ಮಂಗಳವಾರ, ಜನವರಿ 18, 2022
27 °C

ಕೋವಿಡ್ ಮೂರನೇ ಅಲೆ ಭಯ ಬೇಡ: ಶಾಸಕ ಬಸನಗೌಡ ಪಾಟೀಲ ಯತ್ನಾಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಕೋವಿಡ್ ಮೂರನೇ ಅಲೆ ಪರಿಣಾಮ ಬಹಳ ಕಂಡುಬರುತ್ತಿಲ್ಲ. ಇದರ ಬಗ್ಗೆ ಯಾರೂ ಅನಗತ್ಯ ಭಯ, ಆತಂಕ ಪಡಬಾರದು. ಕೋವಿಡ್ ಲಸಿಕೆಯ ಬಗೆಗಿನ ತಪ್ಪು ಕಲ್ಪನೆಗಳನ್ನು ಮನಸ್ಸಿನಿಂದ ತೆಗೆದುಹಾಕಿ, ಎಲ್ಲರೂ ಕಡ್ಡಾಯವಾಗಿ ಲಸಿಕೆ ಪಡೆಯಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಹಮ್ಮಿಕೊಂಡಿದ್ದ 15 ರಿಂದ 18 ವರ್ಷದ ವಯಸ್ಸಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ವಿಜಯಪುರ ಜಿಲ್ಲೆ ಲಸಿಕಾಕರಣದಲ್ಲಿ ಉತ್ತಮ ಸಾಧನೆ ಮಾಡಿದೆ. ಶೇ 102 ರಷ್ಟು ಮೊದಲ ಡೋಸ್ ನೀಡಲಾಗಿದ್ದು, ಶೇ 82 ರಷ್ಟು ಎರಡನೇ ಡೋಸ್ ನೀಡಲಾಗಿದೆ. ವಿಜಯಪುರ ನಗರ ಪ್ರದೇಶ ವ್ಯಾಪ್ತಿಯಲ್ಲಿಯೂ ಶೇ 98 ರಷ್ಟು ಲಸಿಕಾಕರಣ ಕೈಗೊಳ್ಳಲಾಗಿದೆ. ಆದಷ್ಟು ಬೇಗನೇ ಶೇ 100 ರಷ್ಟು ಗುರಿ ಸಾಧಿಸಲಾಗುವುದು ಎಂದು ಅವರು ಹೇಳಿದರು.

ಕೋವಿಡ್‌ ಸಂಭವನೀಯ ಮೂರನೇ ಅಲೆ ಹಾಗೂ ಓಮೈಕ್ರಾನ್ ವೈರಸ್ ನಿಯಂತ್ರಿಸುವ ನಿಟ್ಟಿನಲ್ಲಿಯೂ ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತ ಸರ್ವಸನ್ನದ್ಧವಾಗಿದ್ದು, ಎಲ್ಲರಿಗೂ ಉಚಿತವಾಗಿ ಲಸಿಕೆ ಹಾಕುವಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.

ಕೋವಿಡ್ ವಿರುದ್ಧದ ಸಮರದಲ್ಲಿ ಸರ್ಕಾರ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆಗಳೊಂದಿಗೆ ಸಾರ್ವಜನಿಕರೂ ಕೈ ಜೋಡಿಸಿದಾಗ ಮಾತ್ರ ಇದನ್ನು ಇನ್ನಷ್ಟು ನಿಯಂತ್ರಣಕ್ಕೆ ತರಲು ಸಾಧ್ಯ. ಈ ನಿಟ್ಟಿನಲ್ಲಿ ಎಲ್ಲರೂ ತಪ್ಪದೇ ಲಸಿಕೆ ಹಾಕಿಕೊಂಡು, ಕಡ್ಡಾಯವಾಗಿ ಮಾಸ್ಕ್ ಧಾರಣೆ, ಸ್ಯಾನಿಟೈಜರ್ ಬಳಕೆ, ಪರಸ್ಪರ ಅಂತರ ಪಾಲನೆ ಮಾಡಬೇಕು ಎಂದು ಹೇಳಿದರು.

15 ಹಾಗೂ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್‌ ಲಸಿಕೆ ನೀಡುತ್ತಿದ್ದು, ಎಲ್ಲ ಮಕ್ಕಳು ತಪ್ಪದೇ ಈ ಲಸಿಕೆಯನ್ನು ಪಡೆಯಬೇಕು. ಹಾಗೆಯೇ, ಲಸಿಕೆ ಪಡೆಯದ 15 ಹಾಗೂ 18 ವರ್ಷದೊಳಗಿನ ಶಾಲಾ, ಕಾಲೇಜು ಕಲಿಯದ ಮಕ್ಕಳಿಗೂ ಈ ವಿಷಯ ತಿಳಿಸಿ ಅವರು ಲಸಿಕೆ ಪಡೆಯುವಂತೆ ಮಾಡಬೇಕು. ಈ ವಿಷಯದಲ್ಲಿ ಶಿಕ್ಷಕರು ಹಾಗೂ ಪಾಲಕರು ಇನ್ನಷ್ಟು ಮುತುವರ್ಜಿ ವಹಿಸಬೇಕು. ಶಿಕ್ಷಣ ಇಲಾಖೆ ಕೊಳೆಗೇರಿ ಮಕ್ಕಳನ್ನು ಗುರುತಿಸಿ, ಲಸಿಕೆ ನೀಡಬೇಕು ಎಂದು ಸಲಹೆ ನೀಡಿದರು.

ವಿಶ್ವ ಆರೋಗ್ಯ ಸಮಸ್ಥೆಯ ಪ್ರತಿನಿಧಿ ಮುಕುಂದ ಗಲಗಲಿ ಮಾತನಾಡಿ, 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ನಾಲ್ಕು ವಾರಗಳ ಅಂತರದಲ್ಲಿ ಎರಡನೇ ಡೋಸ್ ನೀಡಲಾಗುವುದು. ಯಾರೂ ಕೂಡ ಈ ಲಸಿಕೆಯನ್ನು ನಿರ್ಲಕ್ಷಿಸದೇ ಸದುಪಯೋಗ ಪಡೆದುಕೊಳ್ಳಬೇಕು. ಒಂದು ವೇಳೆ ಆರೋಗ್ಯ ಸಂಬಂಧಿ ಸಮಸ್ಯೆಗಳಿದ್ದರೆ ಪರಿಶೀಲಿಸಿ, ಲಸಿಕೆ ನೀಡಲಾಗುತ್ತದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯ್ತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಉಪ ವಿಭಾಗಾಧಿಕಾರಿ ಬಲರಾಮ ಲಮಾಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ರಾಜಕುಮಾರ ಯರಗಲ್, ಡಾ. ಈರಣ್ಣ ಧಾರವಾಡಕರ, ಎಂ.ಬಿ ಬಿರಾದಾರ, ಡಾ.ಗುಣಾರೆ, ಕವಿತಾ ದೊಡಮನಿ, ಮಹೇಶ ನಾಗರಬೆಟ್ಟ ಉಪಸ್ಥಿತರಿದ್ದರು.

***

ಜಗತ್ತಿನ ಇತರ ದೇಶಗಳಿಗೆ ಹೋಲಿಸಿದರೆ ಭಾರತವು ಜನರಿಗೆ ಕೋವಿಡ್‌ ಲಸಿಕೆ ನೀಡುವಲ್ಲಿ ಗಣನೀಯ ಪ್ರಮಾಣದ ಸಾಧನೆ ಮಾಡಿದೆ.
–ಬಸನಗೌಡ ಪಾಟೀಲ ಯತ್ನಾಳ
ಶಾಸಕ, ವಿಜಯಪುರ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.