ವಿಜಯಪುರ: ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಒಂದು ತಿಂಗಳಿಗೂ ಅಧಿಕ ದಿನಗಳಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಬೇಡಿಕೆಗೆ ಸರ್ಕಾರ ತಕ್ಷಣ ಸ್ಪಂದಿಸಬೇಕು ಎಂದು ಎನ್‌ಸಿಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಬಿ.ಎಂ. ಬಿರಾದಾರ ಆಗ್ರಹಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಅತಿಥಿ ಉಪನ್ಯಾಸಕರು ನಡೆಸುತ್ತಿರುವ ಧರಣಿ ಸ್ಥಳಕ್ಕೆ ಭೇಟಿ ನೀಡಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿದ ಅವರು, ಅತಿಥಿ ಉಪನ್ಯಾಸಕರ ಹೋರಾಟಕ್ಕೆ ಸರ್ಕಾರ ಈವರೆಗೂ ಸ್ಪಂದಿಸದೇ ಇರುವುದು ಖಂಡನೀಯ ಎಂದರು.
ಒಂದು ತಿಂಗಳಿಹೂ ಹೆಚ್ಚು ಸಮಯದಿಂದ ಪ್ರತಿಭಟನೆ ನಡೆಸುತ್ತಿರುವುದರಿಂದ ತರಗತಿಗಳು ನಡೆಯದೇ ವಿದ್ಯಾರ್ಥಿಗಳು ಸಮಸ್ಯೆ ಅನುಭವಿಸುವಂತಾಗಿದೆ. ಪರೀಕ್ಷೆಗಳು ಸಮೀಪಿಸುತ್ತಿದ್ದು, ಆದಷ್ಟು ಬೇಗ ಸರ್ಕಾರ ಅತಿಥಿ ಉಪನ್ಯಾಸಕರೊಂದಿಗೆ ಮಾತುಕತೆ ನಡೆಸಿ, ತರಗತಿಗಳು ನಡೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಉಪನ್ಯಾಸಕ ವೃತ್ತಿ ಕಾಯಂ ಆಗುವುದೆನ್ನುವ ನಂಬಿಕೆಯಿಂದ ಪರ್ಯಾಯ ಉದ್ಯೋಗ ಮಾರ್ಗಗಳನ್ನು ಹುಡುಕಿಕೊಳ್ಳುವ ಗೋಜಿಗೆ ಹೋಗದ ಹಲವರ ಬದುಕು ಅತಂತ್ರ ಸ್ಥಿತಿಯಲ್ಲಿದೆ. ಹಲವು ಅಭ್ಯರ್ಥಿಗಳ ವಯೋಮಿತಿ ಮೀರಿದೆ ಎಂದು ಅವರು ಹೇಳಿದರು.
ಸರ್ಕಾರಿ ಪದವಿ ಕಾಲೇಜುಗಳು ಬಹುತೇಕ ಅತಿಥಿ ಉಪನ್ಯಾಸಕರನ್ನೇ ಅವಲಂಬಿಸಿವೆ. ಅದರಲ್ಲಿ ಬಹುತೇಕರು ತರಗತಿ ಬಹಿಷ್ಕರಿಸಿ ಮುಷ್ಕರದಲ್ಲಿ ಪಾಲ್ಗೊಂಡಿರುವುದರಿಂದ ಶೈಕ್ಷಣಿಕ ಚಟುವಟಿಕೆಗಳು ಸ್ಥಗಿತವಾಗಿವೆ. ರಾಜ್ಯದ 430 ಸರ್ಕಾರಿ ಪದವಿ ಕಾಲೇಜುಗಳಲ್ಲಿ 10ಸಾವಿರಕ್ಕೂ ಅಧಿಕ ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದಾರೆ. ಇಂದಲ್ಲ, ನಾಳೆ ಉದ್ಯೋಗ ಕಾಯಂ ಆಗಬಹುದೆನ್ನುವ ನಿರೀಕ್ಷೆಯಲ್ಲಿ 15 ರಿಂದ 20 ವರ್ಷಗಳನ್ನು ಕಳೆದಿದ್ದಾರೆ. ಕನಿಷ್ಠ ಗೌರವಧನ ಪಡೆದು ಹತ್ತಾರು ವರ್ಷ ಕಾರ್ಯ ನಿರ್ವಹಿಸಿದ್ದಾರೆ. ಅವರ ನಿರೀಕ್ಷೆ ಈವರೆಗೆ ಮರೀಚಿಕೆಯಾಗಿದೆ ಎಂದರು.
ತಮ್ಮ ಬೇಡಿಕೆ ಮುಂದಿಟ್ಟು ಆಗಾಗ ಧರಣಿ, ಮುಷ್ಕರ ನಡೆಸುತ್ತಿರುವುದರಿಂದ ಸಣ್ಣಪುಟ್ಟ ಬೇಡಿಕೆ ಈಡೇರಿರುವುದು ಬಿಟ್ಟರೆ ಅತಿಥಿ ಉಪನ್ಯಾಸಕರ ಜೀವನ ಅತಂತ್ರವಾಗಿಯೇ ಮುಂದುವರೆದಿದೆ. ಅಧಿಕಾರಕ್ಕೆ ಬಂದರೆ ಅತಿಥಿ ಉಪನ್ಯಾಸಕರಿಗೆ ಸೇವಾಭದ್ರತೆ ಒದಗಿಸುವುದಾಗಿ ವಿಧಾನ ಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಭರವಸೆ ನೀಡಿತ್ತು. ಆ ಭರವಸೆಯನ್ನು ಸರ್ಕಾರ ಈಡೇರಿಸುವ ಮೂಲಕ ನುಡಿದಂತೆ ನಡೆಯಬೇಕು ಎಂದು ಒತ್ತಾಯಿಸಿದರು.
Cut-off box - ಇಟ್ಟಿಗೆ ಹೊತ್ತು ಆಕ್ರೋಶ ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿಜಯಪುರದ ಜಿಲ್ಲಾಧಿಕಾರಿ ಕಚೇರಿ ಹತ್ತಿರ ನಡೆದಿರುವ ಮುಸ್ಕರ 35ನೇ ದಿನಕ್ಕೆ ಕಾಲಿರಿಸಿದ್ದು ಧರಣಿ ನಿರತ ಉಪನ್ಯಾಸಕರು ಬುಧವಾರ ರಕ್ತದಾನ ಹಾಗೂ ತಲೆಯ ಮೇಲೆ ಇಟ್ಟಿಗೆ ಹೊತ್ತು ಆಕ್ರೋಶ ಹೊರಹಾಕಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.