ವಿಜಯಪುರ: ‘ಮಹಾತ್ಮ ಗಾಂಧೀಜಿ ಅವರು ಪ್ರತಿಪಾದಿಸಿದ ಅಭಿವೃದ್ಧಿ ಮಾದರಿಗಳನ್ನು ದೇಶದಲ್ಲಿ ಅನುಷ್ಠಾನಗೊಳಿಸಿದರೆ ಸುಸ್ಥಿರ ಅಭಿವೃದ್ಧಿ ಮತ್ತು ವಿಕಸಿತ ಭಾರತದ ಗುರಿಗಳನ್ನು ಸುಲಭವಾಗಿ ಸಾಧಿಸಲು ಸಾಧ್ಯವಿದೆ ಎಂದು ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಪ್ರತಿಪಾದಿಸಿದರು.
ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಎನ್.ಎಸ್.ಎಸ್ ಕೋಶ ಹಾಗೂ ಗಾಂಧಿ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ರ್ತೀ ಅವರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಗಾಂಧೀಜಿಯವರು ಪ್ರತಿಪಾದಿಸಿದ ಗ್ರಾಮಸ್ವರಾಜ್ಯ, ಗುಡಿ ಕೈಗಾರಿಕೆಗಳ ಅಭಿವೃದ್ಧಿ ಹೀಗೆ ಹಲವು ಬಗೆಯ ಅಭಿವೃದ್ಧಿ ಮಾದರಿಗಳ ಮೂಲಕ ನಾವು ದೇಶದ ಪ್ರಗತಿಗೆ ಮುಂದಾಗಬೇಕಿದೆ’ ಎಂದು ಸಲಹೆ ನೀಡಿದರು.
ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ‘ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ರ್ತೀ ಅವರ ಬದುಕು ನಮಗೆಲ್ಲರಿಗೂ ಪ್ರೇರಣಾದಾಯಕವಾಗಿದ್ದು ಅವರು ಪ್ರತಿಪಾದಿಸಿದ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ’ ಎಂದರು.
ಸಂಗೀತ ವಿಭಾಗದ ವಿದ್ಯಾರ್ಥಿನಿಯರಿಂದ ಭಜನ ನಡೆಯಿತು. ನಿವೃತ್ತ ಪ್ರಾಧ್ಯಾಪಕ ಬಿ.ಜಿ.ಪತ್ತಾರ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ್, ಗಾಂಧಿ ಅಧ್ಯಯನ ಕೇಂದ್ರದ ಸಂಯೋಜಕ ಅಮರನಾಥ ಪ್ರಜಾಪತಿ ಇದ್ದರು.