ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ನಿಯಂತ್ರಣಕ್ಕೆ ಕೈಜೋಡಿಸಿ: ಸಚಿವೆ ಶಶಿಕಲಾ ಜೊಲ್ಲೆ ಕರೆ

Last Updated 6 ಮೇ 2021, 14:32 IST
ಅಕ್ಷರ ಗಾತ್ರ

ವಿಜಯಪುರ: ತೀವ್ರತರವಾಗಿ ಹರಡುತ್ತಿರುವ ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರದೊಂದಿಗೆ ಸಂಘ-ಸಂಸ್ಥೆಗಳು ಕೈಜೋಡಿಸಿ ಕಾರ್ಯನಿರ್ವಹಿಸಿದ್ದಲ್ಲಿ ಸಾರ್ವಜನಿಕರಿಗೆ ಇನ್ನೂ ಹೆಚ್ಚಿನ ಅನುಕೂಲವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ನಗರದ ಅಫ್ಜಲಪುರ ಟಕ್ಕೆ ಕೇಂದ್ರೀಯ ವಿದ್ಯಾಲಯ ಎದುರು ಹುಬ್ಬಳ್ಳಿಯ ಲೋಕಹಿತ ಟ್ರಸ್ಟ್ ಸಂಚಾಲಿತ ಡಾ.ಹೆಡಗೆವಾರ್ ಕೋವಿಡ್ ಆರೈಕೆ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು.

ವಿಶ್ವ ಹಾಗೂ ಭಾರತದಾದ್ಯಂತ ಕೋವಿಡ್ ತೀವ್ರತರವಾಗಿ ಹಬ್ಬುವ ಮೂಲಕ ಆತಂಕ ಸೃಷ್ಟಿಸಿದೆ. ಕಳೆದ ವರ್ಷವೂ ಕೂಡ ಈ ಕೋವಿಡ್ ಎಲ್ಲೆಡೆ ತಲ್ಲಣಗೊಳಿಸಿತ್ತು. ಇಂತಹ ಅಪಾಯಕಾರಿ ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರ, ವಿವಿಧ ಸಂಘ-ಸಂಸ್ಥೆಗಳು ಕೈಜೋಡಿಸಿ ಕಾರ್ಯನಿರ್ವಹಿಸಿದ್ದಲ್ಲಿ ಸಾರ್ವಜನಿಕರಿಗೆ ಇನ್ನೂ ಹೆಚ್ಚಿನ ನೆರವಾಗಲಿದೆ ಎಂದರು.

ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರಗಳಲ್ಲಿ ಲೋಕಹಿತ ಟ್ರಸ್ಟ್ ಸಂಚಾಲಿತ ಸ್ವಯಂ ಸೇವಕ ಸಂಘದ ವತಿಯಿಂದ ಕೋವಿಡ್ ಆರೈಕೆ ಕೇಂದ್ರ ಆರಂಭಿಸಿರುವುದು ಅಭಿನಂದನಾರ್ಹ ಎಂದು ಹೇಳಿದರು.

ವಿಜಯಪುರ ನಗರದಲ್ಲಿ ಡಾ.ಹೆಡಗೆವಾರ್ ಹೆಸರಿನಲ್ಲಿ ಕೋವಿಡ್ ಆರೈಕೆ ಕೇಂದ್ರ ಈಗ ಆರಂಭಗೊಂಡಿದ್ದು, ವೈದ್ಯರು, ಸ್ಟಾಪ್‌ ನರ್ಸ್‌ ಹಾಗೂ ಡಿ ಗ್ರೂಪ್ ನೌಕರರು ಸೇವೆಗೆ ಸನ್ನದ್ಧಗೊಂಡಿರುವುದು ಸಂತಸದ ವಿಷಯವಾಗಿವಾಗಿದೆ ಎಂದರು.

ಟ್ರಸ್ಟ್ ವತಿಯಿಂದ ಕೋವಿಡ್ ಆರೈಕೆ ಕೇಂದ್ರ ಸ್ಥಾಪಿಸಿ 50 ಸುಸಜ್ಜಿತ ಬೆಡ್‌ಗಳು, 10 ಆಕ್ಸಿಜನ್ ಬೆಡ್ ವ್ಯವಸ್ಥೆ ಮಾಡಿ ಇನ್ನೂ ಹೆಚ್ಚಿನ ಬೆಡ್‌ಗಳ ಸ್ಥಾಪನೆಗೆ ಪ್ರಯತ್ನ ನಡೆಸಿದ್ದು, ಇಲ್ಲಿಗೆ ಬರುವ ಗಂಡು ಮತ್ತು ಹೆಣ್ಣು ಮಕ್ಕಳಿಗೆ ಪ್ರತ್ಯೇಕ ವಿಭಾಗ ಸ್ಥಾಪಿಸಿ ಊಟ, ಉಪಹಾರದ ವ್ಯವಸ್ಥೆ ಮಾಡಿರುವುದು ಅಭಿನಂದನಾರ್ಹವಾಗಿದೆ ಎಂದು ಅಭಿಪ್ರಾಯಪಟ್ಟರು.

ಜಿಲ್ಲಾ ಆರೋಗ್ಯ ಸಂಘ ಸಂಚಾಲಕ ಡಾ.ಸತೀಶ ಜಿಗಜಿನ್ನಿ ಮಾತನಾಡಿ, ರಾಷ್ಟ್ರ ಕಟ್ಟುವ ಕಾರ್ಯದಲ್ಲಿ ಆರ್‌ಎಸ್‌ಎಸ್ ಸಕ್ರಿಯವಾಗಿದೆ. ಶೈಕ್ಷಣಿಕ, ಆರೋಗ್ಯ, ಸಾಮಾಜಿಕ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸುತ್ತಿದೆ. ಈ ಹಿಂದೆ ಲಾಕ್‌ಡೌನ್ ಸಂದರ್ಭದಲ್ಲಿ ಸಾರ್ವಜನಿಕರಿಗೆ ಆಹಾರ, ಔಷಧ ಪೂರೈಸಿದೆ. ಈಗ ಕೋವಿಡ್ ಆರೈಕೆ ಕೇಂದ್ರ ಆರಂಭಿಸಲಾಗಿದ್ದು, ಇಲ್ಲಿಗೆ ಬರುವ ಜನರ ಆಧಾರದ ಮೇಲೆ ಹೆಚ್ಚಿನ ಆಮ್ಲಜನಕ ಪೂರೈಕೆಗೆ ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕಳಸದ ಮಾತನಾಡಿ, ಜಿಲ್ಲಾಡಳಿತ ವತಿಯಿಂದ 6 ಕೋವಿಡ್ ಕೇರ್ ಸೆಂಟರ್‌ಗಳನ್ನು ಸ್ಥಾಪಿಸಲಾಗಿದೆ. ಮನೆಯಲ್ಲಿ ಐಸೋಲೇಶನ್ ಆಗದವರಿಗೆ ಈ ಆರೈಕೆ ಕೇಂದ್ರದಲ್ಲಿ ಸೇವೆ ಪಡೆಯಲು ಅನುಕೂಲವಾಗಲಿದ್ದು, ಇದರ ಸದುಪಯೋಗ ಪಡೆಯುವಂತೆ ಕರೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಅರುಣ ಶಹಾಪೂರ, ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪೂರ, ವಿಧಾನ ಪರಿಷತ್‌ ಸದಸ್ಯ ಹಣಮಂತ ನಿರಾಣಿ, ಬೀಜ ಹಾಗೂ ಸಾವಯವ ಪ್ರಮಾಣನ ಸಂಸ್ಥೆಯ ಅಧ್ಯಕ್ಷ ವಿಜುಗೌಡ ಪಾಟೀಲ, ಮಾಜಿ ಸಚಿವ ಎಸ್.ಕೆ ಬೆಳ್ಳುಬ್ಬಿ, ಮಾಜಿ ಶಾಸಕ ಸಾರ್ವಭೌಮ ಬಗಲಿ ಹಾಗೂ ಚಂದ್ರಶೇಖರ ಮಗಿಮಠ, ಮಾಜಿ ಶಾಸಕ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ರಮೇಶ ಭೂಸನೂರ, ದಯಾನಂದ, ವಿಜಯ ಜೋಶಿ, ಚಂದ್ರಶೇಖರ ಇದ್ದರು.

****

ಕೋವಿಡ್ ನಿಯಂತ್ರಣಕ್ಕೆ ಜನರು ಕೂಡ ಸ್ವಯಂ ಪ್ರೇರಿತರಾಗಿ ಮುನ್ನೆಚ್ಚರಿಕೆ ವಹಿಸಿಕೊಳ್ಳಬೇಕು. ಸ್ವಚ್ಛತೆ, ಅಂತರ, ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಕೂಡ ಆದ್ಯ ಕರ್ತವ್ಯವಾಗಿದೆ

–ಶಶಿಕಲಾ ಜೊಲ್ಲೆ, ಜಿಲ್ಲಾ ಉಸ್ತುವಾರಿ ಸಚಿವೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT