ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸ್ಪೃಶ್ಯತೆ ಕಂಡುಬಂದರೆ ಪ್ರಕರಣ ದಾಖಲಿಸಿ: ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್

ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ
Last Updated 31 ಡಿಸೆಂಬರ್ 2020, 15:02 IST
ಅಕ್ಷರ ಗಾತ್ರ

ವಿಜಯಪುರ: ಜಿಲ್ಲೆಯಲ್ಲಿ ಅಸ್ಪೃಶ್ಯತೆ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಸಾಕ್ಷಾಧಾರಗಳಿದ್ದಲ್ಲಿ ತಕ್ಷಣ ಪ್ರಕರಣ ದಾಖಲಿಸಬೇಕು ಎಂದುಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್‌ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಅಸ್ಪೃಶ್ಯತೆ ಪದ್ಧತಿ ನಿಯಂತ್ರಣಕ್ಕೆ ಆಯಾ ತಾಲ್ಲೂಕು ಪಂಚಾಯ್ತಿ ಮತ್ತು ಪಿ.ಡಿ.ಒಗಳು ಕ್ರಮ ಕೈಗೊಳ್ಳುವುದರ ಜೊತೆಗೆ ಮತ್ತು ಈ ಪದ್ಧತಿ ನಿವಾರಣೆ ಕುರಿತು ಸೂಕ್ತ ಜಾಗೃತಿ ಸಹ ಮೂಡಿಸುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಸರ್ಕಾರ ಕೊಡಮಾಡಿದ ಸಾಲ ಮತ್ತು ಸಹಾಯ ಧನ ಸೌಲಭ್ಯ ದೊರಕಿಸುವ ಬಗ್ಗೆ ಜಿಲ್ಲೆಯ ಸಂಬಂಧಪಟ್ಟ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು. ಆರ್‌ಬಿಐ ಮಾರ್ಗ ಸೂಚಿಗಳನ್ವಯ ಈ ಸೌಲಭ್ಯ ಕಲ್ಪಿಸಲು ವಿಫಲವಾಗುವ ಬ್ಯಾಂಕ್ ವ್ಯವಸ್ಥಾಪಕರ ವಿರುದ್ದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಅರ್ಹ ಫಲಾನುಭವಿಗಳಿಗೆ ಸಕಾಲಕ್ಕೆ ಸೌಲಭ್ಯ ತಪ್ಪದೆ ದೊರಕಿಸುವ ಬಗ್ಗೆ ಎಲ್ಲ ಬ್ಯಾಂಕುಗಳಿಗೆ ಎಚ್ಚರಿಕೆ ಪತ್ರ ರವಾನಿಸುವಂತೆ ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ-ಪಂಗಡ ಕಾಯಿದೆ ಅನ್ವಯ ದಾಖಲಾದ ಪ್ರಕರಣಗಳು, ವಿಲೇವಾರಿಯಾದ ಪ್ರಕರಣಗಳು ಹಾಗೂ ಶಿಕ್ಷೆಯಾದ ಕುರಿತಂತೆ ಕಳೆದ ಮೂರು ವರ್ಷಗಳಲ್ಲಿ ಕೈಗೊಂಡ ಕ್ರಮಗಳ ವರದಿಯನ್ನು ಸಲ್ಲಿಸಬೇಕು. ಸದ್ಯಕ್ಕೆ ಕೋರ್ಟ್‌ನಲ್ಲಿ ಇರುವಂತಹ ಪ್ರಕರಣ ಮತ್ತು ಇತ್ಯರ್ಥ ಪ್ರಕರಣಗಳ ಬಗ್ಗೆಯೂ ಮಾಹಿತಿ ನೀಡಬೇಕು ಎಂದರು.

ಸಿಂದಗಿ ತಾಲ್ಲೂಕಿನ ಗೋಲಗೇರಿ ಗ್ರಾಮದ ಹೊಸೂರ ಪರಿಶಿಷ್ಟ ಜಾತಿ ಕಾಲೊನಿಯಲ್ಲಿ ಕಲ್ಪಿಸಲಾಗುತ್ತಿರುವ ಮೂಲ ಸೌಕರ್ಯಗಳ ಕಾಮಗಾರಿ ಕುರಿತಂತೆ ಸೂಕ್ತ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಿಗೆ ತಿಳಿಸಿದರು.

ಸಿಂದಗಿ ತಾಲ್ಲೂಕಿನ ಕೆಸರಟ್ಟಿ ಗ್ರಾಮದಲ್ಲಿ ಕುಡಿಯುವ ನೀರಿನ ಯೋಜನೆ ಪೂರ್ಣಗೊಳ್ಳುವರೆಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಬೇಕು. ಅತಾಲಟ್ಟಿ ಗ್ರಾಮದಲ್ಲಿ ವಿದ್ಯುತ್ ವ್ಯತ್ಯಯ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಬೇಕು. ಬಸವನ ಬಾಗೇವಾಡಿ ತಾಲ್ಲೂಕಿನ ನಾಗೂರು ಗ್ರಾಮದಲ್ಲಿನ ರೈತರ ಅನುಕೂಲಕ್ಕಾಗಿ ಟಿಸಿ ಅಳವಡಿಕೆಗೆ ಸಂಬಂಧಪಟ್ಟಂತೆ ಸಮಾಜ ಕಲ್ಯಾಣ ಉಪನಿರ್ದೇರ್ಶಕರು ಸ್ಥಳೀಯವಾಗಿ ಭೇಟಿ ನೀಡಿ ಪರಿಶೀಲನಾ ವರದಿ ಸಲ್ಲಿಸುವಂತೆ ಸೂಚನೆ ನೀಡಿದರು.

ನಿಡಗುಂದಿ ತಾಲ್ಲೂಕಿನ ಹಾಲಿಹಾಳ ಗ್ರಾಮದಲ್ಲಿ ರಸ್ತೆ ನಿರ್ಮಾಣಕ್ಕಾಗಿ ಅವಶ್ಯಕವಿರುವ ಖಾಸಗಿ ಮಾಲಿಕತ್ವದ ಜಮೀನು ಖರೀದಿಗೆ ಸಂಬಂಧಿಸಿದಂತೆ ಸಂಬಂಧಿಸಿದ ಮಾಲೀಕರನ್ನು ವಿಶ್ವಾಸಕ್ಕೆ ಮತ್ತು ಮನವರಿಕೆಗೆ ಪ್ರಯತ್ನಿಸಲಾಗುವುದು ಎಂದರು.

ವಿಜಯಪುರ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ ನವೀಕರಣಕ್ಕೆ ಸಂಬಂಧಿಸಿದಂತೆ ಯೋಜನೆ ಸಿದ್ಧವಾಗಿದ್ದು, ತಾಂತ್ರಿಕ ಮತ್ತು ಆಡಳಿತಾತ್ಮಕ ಅನುಮೋದನೆಗೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ರಾಮನಗೌಡ ಕನ್ನೊಳ್ಳಿ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಇಂಡಿ ಉಪವಿಭಾಗಾಧಿಕಾರಿ ರಾಹುಲ ಶಿಂಧೆ, ವಿಜಯಪುರ ಉಪವಿಭಾಗಾಧಿಕಾರಿ ರಾಮಚಂದ್ರ ಗಡಾದೆ, ಜಿ.ಪಂ. ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರಾದ ಅಡಿವೆಪ್ಪ ಸಾಲಗಲ್, ಸುರೇಶ ಮಣ್ಣೂರ, ಅರವಿಂದ ಸಾಲವಾಡಗಿ, ಗಣಪತಿ ಬಾಣಿಕೋಲ, ಶಿವಾನಂದ ಪಟ್ಟೇದ, ರಾಜಶೇಖರ ಕುಚಬಾಳ, ಅಶೋಕ ಕರೆಕಲ್, ವಿನಾಯಕ ಗುಣಸಾಗರ, ಪರಶುರಾಮ ಮಾದರ, ಮನೋಹರ ಕಾಂಬಳೆ, ಮುತ್ತಣ್ಣ ಸಾಸನೂರ, ಬಸವರಾಜ ಪೂಜಾರಿ ಸಭೆಯಲ್ಲಿ ಉಪಸ್ಥಿತರಿದ್ದರು.

***

ಹೆಚ್ಚು ದೌರ್ಜನ್ಯ ಪ್ರಕರಣಗಳು ದಾಖಲಾಗಿರುವ ಪ್ರದೇಶಗಳಲ್ಲಿ ಕಾನೂನು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ನೊಂದ ಸಂತ್ರಸ್ತರಿಗೆನ್ಯಾಯ ದೊರಕಿಸಿಕೊಡಬೇಕು

- ಪಿ.ಸುನೀಲ್‌ ಕುಮಾರ್‌,ಜಿಲ್ಲಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT