ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ ಮೂರು ಕಡೆ ಬಂಡವಾಳ ಹೂಡಿಕೆದಾರರ ಸಮಾವೇಶ: ಸಚಿವ ಜಗದೀಶ ಶೆಟ್ಟರ್

Last Updated 12 ಮಾರ್ಚ್ 2021, 13:35 IST
ಅಕ್ಷರ ಗಾತ್ರ

ವಿಜಯಪುರ: ಕೈಗಾರಿಕೆ ಕ್ಷೇತ್ರದ ಅಭಿವೃದ್ಧಿಗಾಗಿವಿಜಯಪುರ- ಬಾಗಲಕೋಟೆ ಸೇರಿದಂತೆ ರಾಜ್ಯದ ಮೂರು ಕಡೆ ಬಂಡವಾಳ ಹೂಡಿಕೆದಾರರ ಬೃಹತ್ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ ಎಂದು ಬೃಹತ್ ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯಪುರ- ಬಾಗಲಕೋಟೆ, ಕಲಬುರಗಿ- ಬೀದರ್ ಹಾಗೂ ಮೈಸೂರು ಸೇರಿದಂತೆ ಈ ಮೂರು ಕಡೆಗೆ ಬಂಡವಾಳ ಹೂಡಿಕೆಗಾದರ ಸಮಾವೇಶ ಹಮ್ಮಿಕೊಳ್ಳಲಾಗುವುದು ಎಂದರು.

ವಿಜಯಪುರ ಜಿಲ್ಲೆಯ ಮುಳವಾಡ ಹತ್ತಿರದಲ್ಲಿ 3 ಸಾವಿರ ಎಕರೆ ಪ್ರದೇಶವನ್ನು ಕೈಗಾರಿಕೆ ವಲಯಕ್ಕೆ ಅಭಿವೃದ್ಧಿ ಪಡಿಸಲಾಗಿದ್ದು, ಕೆಲವೇ ತಿಂಗಳಲ್ಲಿ ಮೊದಲ ಹಂತದ ಪ್ರದೇಶವನ್ನು ಉದ್ಯಮಿಗಳಿಗೆ ಹಂಚಿಕೆ ಮಾಡಲಾಗುವುದು ಎಂದು ಹೇಳಿದರು.

ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಅವಕಾಶ ನೀಡಲು ನೂತನ ಕೈಗಾರಿಕೆ ನೀತಿಯಲ್ಲಿ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.

ತೆರಿಗೆ ಹೊರೆ ತಗ್ಗಿಸಲು ಆದ್ಯತೆ:ಉದ್ದಿಮೆದಾರರಿಂದ ತೆರಿಗೆ ಸಂಗ್ರಹಿಸುವಾಗ ಹೆಚ್ಚು ಕಡಿಮೆ ಅಲ್ಲದ ಮಧ್ಯಮ ಮಾರ್ಗವನ್ನು ಅನುಸರಿಸಿ ತೆರಿಗೆ ಹೊರೆ ತಪ್ಪಿಸಲಾಗುವುದುಎಂದುಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಕೈಗಾರಿಕೆ ಇಲಾಖೆಯ ವಿವಿಧ ಅಧಿಕಾರಿಗಳು ಹಾಗೂ ಉದ್ದಿಮೆದಾರರ ಸಭೆಯಲ್ಲಿ ಅವರು ಮಾತನಾಡಿದರು.

ಉದ್ದಿಮೆದಾರರಿಂದ ಸಂಗ್ರಹಿಸಿದ ತೆರಿಗೆಯನ್ನು ಸಮರ್ಪಕವಾಗಿ ಬಳಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಅಗತ್ಯ ತಿದ್ದುಪಡಿಗಳೊಂದಿಗೆ ಜಾರಿಗೆ ಬಂದ ಹೊಸ ಕೈಗಾರಿಕಾ ನೀತಿಯಿಂದ ಅನೇಕರಿಗೆ ಬಹಳ ಅನುಕೂಲವಾಗಿದೆ. ಇದನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು.

ಮೂಲ ಸೌಕರ್ಯಗಳನ್ನು ಕಲ್ಪಿಸಿದಾಗ ಮಾತ್ರ ಉದ್ದಿಮೆದಾರರು ಇಲ್ಲಿ ಉದ್ದಿಮೆಗಳನ್ನು ಸ್ಥಾಪಿಸಲು ಆಕರ್ಷಿತರಾಗುವುದರಿಂದ ಈ ನಿಟ್ಟಿನಲ್ಲಿ ಸರ್ಕಾರದಿಂದ ಅಗತ್ಯ ಸಹಕಾರವನ್ನು ನೀಡಲಾಗುವುದು ಎಂದು ಹೇಳಿದರು.

ಜಿಲ್ಲೆಯಲ್ಲಿ ವಿಮಾನ ನಿಲ್ದಾಣಕ್ಕೆ ಚಾಲನೆ ದೊರೆತಿರುವುದು ಒಳ್ಳೆಯ ಬೆಳವಣಿಗೆಯಾಗಿದ್ದು, ಮುಂದಿನ ದಿನಗಳಲ್ಲಿ ಈ ವಿಮಾನ ನಿಲ್ದಾಣವು ಜಿಲ್ಲೆಯಲ್ಲಿ ಕೈಗಾರಿಕೋದ್ಯಮ ಶರವೇಗದಲ್ಲಿ ಬೆಳೆಯಲು ಸಹಕಾರಿಯಾಗುತ್ತದೆ. ಇದು ಕೂಡ ಸರ್ಕಾರದ ಒಂದು ಸಾಧನೆಯಾಗಿದೆ ಎಂದರು.

ಜಿಲ್ಲೆಯ ಮುಳವಾಡ ಮಾತ್ರವಲ್ಲದೆ ಇತರ ಭಾಗಗಳಲ್ಲಿಯೂ ಉದ್ಯಮಗಳ ಬೆಳವಣಿಗೆಗೆ ಅಧಿಕಾರಿಗಳು ಗಮನ ಹರಿಸಬೇಕು. ಅದಕ್ಕೆ ಪೂರಕವಾಗಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು. ಈ ನಿಟ್ಟಿನಲ್ಲಿ ಕೂಡಲೇ ಎಸ್ಸಿ, ಎಸ್ಟಿ ಹಾಗೂ ಸಾಮಾನ್ಯ ವರ್ಗದ ಸ್ವೀಕೃತ ಅರ್ಜಿಗಳ ವಿಲೇವಾರಿಯಾಗಬೇಕು ಎಂದು ಅವರು ಹೇಳಿದರು.

ಸರ್ಕಾರದ ಹೊಸ ಕೈಗಾರಿಕಾ ನೀತಿಯಿಂದ ಬೆಂಗಳೂರಿನ ಆಚೆಗೂ ಕೈಗಾರಿಕಾ ಕ್ಷೇತ್ರವನ್ನು ವಿಸ್ತರಿಸಲು ಸಾಧ್ಯವಾಗಿದೆ. ಹುಬ್ಬಳ್ಳಿ-ಧಾರವಾಡಗಳಂತೆ ವಿಜಯಪುರ ಜಿಲ್ಲೆಯನ್ನೂ ಇಂಡಸ್ಟ್ರೀಯಲ್ ಹಬ್ ಆಗಿ ರೂಪಿಸುವ ಪ್ರಯತ್ನವನ್ನು ಸರ್ಕಾರ ಮಾಡಲಿದೆ. ಇಲ್ಲಿನ ವಿವಿಧ ಬೇಡಿಕೆಗಳಿಗೆ ಸ್ಪಂದಿಸಲಾಗುವುದು ‌ ಎಂದರು.

ಶಾಸಕರಾದ ಎ. ಎಸ್ ಪಾಟೀಲ್ ನಡಹಳ್ಳಿ, ಸೋಮನಗೌಡ ಪಾಟೀಲ್, ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್, ಜಿಲ್ಲಾ ಪಂಚಾಯತ್ ಸಿಇೊ ಗೋವಿಂದರೆಡ್ಡಿ, ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆಯ ಅಧ್ಯಕ್ಷ ವಿಜುಗೌಡ ಪಾಟೀಲ್, ಎನ್. ಶಿವಶಂಕರ್, ಕೈಗಾರಿಕೆ ಇಲಾಖೆ ಅಧಿಕಾರಿಗಳು ಹಾಗೂ ಉದ್ದಿಮೆದಾರರು ಉಪಸ್ಥಿತರಿದ್ದರು.

***

ಉತ್ತರ ಕರ್ನಾಟಕ ಕೈಗಾರಿಕೆಗಳ ಬೆಳವಣಿಗೆಗೆ ಪೂರಕವಾಗಿದ್ದು, ಇಲ್ಲಿ ಉದ್ದಿಮೆಗಳನ್ನು ಸ್ಥಾಪಿಸಲು ಕೈಗಾರಿಕೆಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ

- ಜಗದೀಶ ಶೆಟ್ಟರ್,ಬೃಹತ್ ಮಧ್ಯಮ ಕೈಗಾರಿಕಾ ಸಚಿವ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT