ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅ.7ಕ್ಕೆ ಜೆಡಿಎಸ್‌ ಅಭ್ಯರ್ಥಿ ನಾಜಿಯಾ ನಾಮಪತ್ರ ಸಲ್ಲಿಕೆ

ನಾಮಪತ್ರ ಸಲ್ಲಿಕೆಗೆ ಎರಡು ದಿನ ಬಾಕಿ; ಎರಡು ನಾಮಪತ್ರ ಸಲ್ಲಿಕೆ
Last Updated 6 ಅಕ್ಟೋಬರ್ 2021, 15:25 IST
ಅಕ್ಷರ ಗಾತ್ರ

ವಿಜಯಪುರ: ಸಿಂದಗಿ ವಿಧಾನಸಭಾ ಮತಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್‌ ಅಭ್ಯರ್ಥಿ ನಾಜಿಯಾ ಶಕೀಲ್‌ ಅಂಗಡಿ ಅ.7ರಂದು ಮಧ್ಯಾಹ್ನ 1ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ, ಜೆಡಿಎಸ್‌ ಮುಖಂಡ ಬಂಡೆಪ್ಪ ಕಾಶೆಂಪುರ, ಶಾಸಕ ದೇವಾನಂದ ಚವ್ಹಾಣ ಮತ್ತಿತರರು ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ನಾಮಪತ್ರ ಸಲ್ಲಿಸಿದ ಬಳಿಕ ಸಿಂದಗಿ ಪಟ್ಟಣದ ಮಾಂಗಲ್ಯ ಕಲ್ಯಾಣ ಮಂಟಪದಲ್ಲಿ ಪಕ್ಷದ ಶಾಸಕರು ಹಾಗೂ ಮುಖಂಡರು ಮತ್ತು ಕಾರ್ಯಕರ್ತ ಸಭೆ ನಡೆಯಲಿದೆ ಎಂದು ಜೆಡಿಎಸ್‌ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ ತಿಳಿಸಿದ್ದಾರೆ.

ಎರಡು ನಾಮಪತ್ರ ಸಲ್ಲಿಕೆ:ನಾಮಪತ್ರ ಸಲ್ಲಿಕೆಗೆ ಕೇವಲ ಎರಡು ದಿನ ಮಾತ್ರ ಬಾಕಿ ಉಳಿದಿದೆ. ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿ ಡಾ. ಸುನೀಲ್ ಕುಮಾರ ಹಬ್ಬಿ ಹಾಗೂ ಪಕ್ಷೇತರ ಅಭ್ಯರ್ಥಿ ಬೆಂಗಳೂರಿನ ದೀಪಿಕಾ ಎಸ್ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದಾರೆ.

ಅ.8ರಂದು ಕಾಂಗ್ರೆಸ್‌, ಬಿಜೆಪಿ ಅಭ್ಯರ್ಥಿಗಳಿಬ್ಬರು ನಾಮಪತ್ರ ಸಲ್ಲಿಸುವುದರಿಂದ ಎರಡೂ ಪಕ್ಷಗಳ ರಾಜ್ಯ ನಾಯಕರ ದಂಡು ಜಿಲ್ಲೆಯಲ್ಲಿ ಬೀಡುಬಿಡಲಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಲಿವೆ.

ಮುಗಿಯದ ಬಿಜೆಪಿ ಅಭ್ಯರ್ಥಿ ಹುಡುಕಾಟ:ಬಿಜೆಪಿ ಅಭ್ಯರ್ಥಿ ಯಾರೆಂಬುದು ಇನ್ನೂ ಅಂತಿಮವಾಗಿಲ್ಲ. ಮಾಜಿ ಶಾಸಕ ರಮೇಶ ಭೂಸನೂರ ಬಹುತೇಕ ಅಭ್ಯರ್ಥಿಯಾಗುವ ಸಾಧ್ಯತೆ ಇದೆ. ಆದರೆ, ಪಕ್ಷದಲ್ಲಿ ಟಿಕೆಟ್‌ ಆಕಾಂಕ್ಷಿಗಳು ಅಧಿಕ ಸಂಖ್ಯೆಯಲ್ಲಿ ಇರುವುದರಿಂದ ಬಂಡಾಯ ಶಮನ ಮಾಡುವ ಪ್ರಯತ್ನ ನಡೆದಿದ್ದು, ಈ ಹಿನ್ನೆಲೆಯಲ್ಲಿ ಅಭ್ಯರ್ಥಿ ಘೋಷಣೆ ವಿಳಂಬವಾಗಿದೆ ಎನ್ನಲಾಗುತ್ತಿದೆ. ಅ.8ರಂದೇ ಅಭ್ಯರ್ಥಿ ಘೋಷಣೆ ಮತ್ತು ನಾಮಪತ್ರ ಸಲ್ಲಿಕೆ ನಡೆಯುವುದು ಬಹುತೇಕ ಖಚಿತವಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌, ಸಚಿವರಾದ ಗೋವಿಂದ ಕಾರಜೋಳ ಅವರು ನಾಮಪತ್ರ ಸಲ್ಲಿಕೆ ವೇಳೆ ಉಪಸ್ಥಿತರಿರಲಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲೆಯ ಕಾಂಗ್ರೆಸ್‌, ಜೆಡಿಎಸ್‌ ಮುಖಂಡರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ.

ಕಾಂಗ್ರೆಸ್‌ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ನಾಳೆ:ಕಾಂಗ್ರೆಸ್‌ ಅಭ್ಯರ್ಥಿ ಅಶೋಕ ಮನಗೂಳಿ ಅವರು ಅ.8ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಕೆ‍ಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್‌ ಸದಸ್ಯ ಎಸ್‌.ಆರ್‌.ಪಾಟೀಲ ಅವರು ನಾಮಪತ್ರ ಸಲ್ಲಿಕೆ ವೇಳೆಯಲ್ಲಿ ಭಾಗಿಯಾಗಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT