ಶನಿವಾರ, ಅಕ್ಟೋಬರ್ 24, 2020
24 °C
ಪ್ರವಾಹ ನೀರು ನುಗ್ಗಿದ ಮನೆಗಳಿಗೆ ₹ 10 ಸಾವಿರ ಪರಿಹಾರದ ಭರವಸೆ

ಚಿಂತಿ ಮಾಡ್ಬೇಡಿ: ಸಂತ್ರಸ್ತರಿಗೆ ಸಚಿವೆ ಶಶಿಕಲಾ ಜೊಲ್ಲೆ ಸ್ಪಂದನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ‘ಪ್ರವಾಹ ಸಂತ್ರಸ್ತರ ನೆರವಿಗೆ ಸರ್ಕಾರ, ಜಿಲ್ಲಾಡಳಿತ, ಮುಖ್ಯಮಂತ್ರಿ ಸೇರಿದಂತೆ ನಾನು ನಿಮ್ಮ ಜೊತೆಗಿದ್ದು, ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ. ಒಟ್ಟಾ ಚಿಂತಿ ಮಾಡ್ಬೇಡಿ’ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಸಂತ್ರಸ್ತರಿಗೆ ಮನವಿ ಮಾಡಿದರು.

ಜಿಲ್ಲೆಯ ಚಡಚಣ ತಾಲ್ಲೂಕಿನ ಉಮರಾಣಿ ಗ್ರಾಮದ ಕಾಳಜಿ ಕೇಂದ್ರಕ್ಕೆ ಭಾನುವಾರ ಭೇಟಿ ನೀಡಿ, ರೈತರು ಹಾಗೂ ಸಂತ್ರಸ್ತರ ಆಹವಾಲು ಆಲಿಸಿ ಮಾತನಾಡಿದರು.

ಪ್ರವಾಹದಿಂದ ನೀರು ನುಗ್ಗಿರುವ ಮನೆಗಳಿಗೆ ತಕ್ಷಣ ₹10 ಸಾವಿರ ಪರಿಹಾರಧನ ನೀಡಲಾಗುವುದು ಎಂದು ಹೇಳಿದರು.

ಜಿಲ್ಲೆಯಲ್ಲಿ ಪ್ರವಾಹದಿಂದಾಗಿ 43 ಹಳ್ಳಿಗಳು ಬಾಧಿತವಾಗಿದ್ದು, ಸೂಕ್ತ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದರು.

ಪ್ರವಾಹಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತದಿಂದ ಸಕಲ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದ್ದು, ಯಾವುದೇ ಜೀವಹಾನಿ ಹಾಗೂ ಜಾನುವಾರಗಳಿಗೆ ಹಾನಿಯಾಗದಂತೆ ನೋಡಿಕೊಳ್ಳಲಾಗುವುದು ಎಂದರು.

ಜಿಲ್ಲಾಡಳಿತ ಹಾಗೂ ಕೃಷಿ ಇಲಾಖೆಯಿಂದ ಹಾನಿಗೊಳಗಾದ ಹೊಲಗಳ ಸಮೀಕ್ಷೆ ನಡೆಸಿ, ನಷ್ಟಕ್ಕೊಳಗಾದ ರೈತರ ಬ್ಯಾಂಕ್‌ ಖಾತೆಗೆ ನೇರ ಪರಿಹಾರ ಹಾಕಲಾಗುವುದು ಎಂದು ಹೇಳಿದರು.

‘ಹಳೇ ಉಮರಾಣಿಯಿಂದ ಮಹಾರಾಷ್ಟ್ರದ ಸಾದ್ಯಪುರವನ್ನು ಸಂಪರ್ಕಿಸುವ ಹಳೇ ಸೇತುವೆಯನ್ನು ಎತ್ತರಿಸಬೇಕು, ಹೊಸ ರಸ್ತೆಯನ್ನು ನಿರ್ಮಿಸಿಕೊಡಬೇಕು ಎಂಬ ಗ್ರಾಮಸ್ಥರ ಬೇಡಿಕೆಗೆ ಸ್ಪಂದಿಸಿದ ಸಚಿವೆ, ಈ ಸಂಬಂಧ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ, ಮಾಡಿಸಿಕೊಡುವುದಾಗಿ ಭರವಸೆ ನೀಡಿದರು. 

ಆತ್ಮಸ್ಥೈರ್ಯ ತುಂಬಿದ ಸಚಿವೆ: ಭೀಮಾ ನದಿಯಿಂದ ಬಾಧಿತವಾಗಿರುವ ಅಗರಖೇಡ ಗ್ರಾಮ ಸ್ಥಳಾಂತರಕ್ಕೆ ಸೂಕ್ತ ಕ್ತಮ ಕೈಗೊಳ್ಳಲಾಗುವುದು ಎಂದು ಸಚಿವೆ ಶಶಿಕಲಾ ಜೊಲ್ಲೆ ಭರವಸೆ ನೀಡಿದರು.

ಪ್ರವಾಹ ಸಂದರ್ಭದಲ್ಲಿ ಕೈಗೊಂಡ ರಕ್ಷಣಾ ಕಾರ್ಯಾಚರಣೆ ಕುರಿತು ಮರಾಠಾ ಲೈಟ್ ಇನ್ಫಂಟ್ರಿ ರೆಜಿಮೆಂಟ್‌ ಯೋಧರಿಂದ ಮಾಹಿತಿ ಪಡೆದರು.

ಆಗರಖೇಡ ಗ್ರಾಮದ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಸಂತ್ರಸ್ತರಿಗೆ ಆತ್ಮಸ್ತೈರ್ಯ ತುಂಬಿದರು.

ಶಾಶ್ವತ ಪುನರ್ವಸತಿ: ತಾರಾಪೂರ ಸಂತ್ರಸ್ತರ ಪುನರ್ವಸತಿಗೆ ಸಂಬಂಧಪಟ್ಟಂತೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುವುದಾಗಿ ಜೊಲ್ಲೆ ಭರವಸೆ ನೀಡಿದರು.

ತಾರಾಪುರ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ, ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದ ಅವರು, ತಾರಾಪುರ ಸಂತ್ರಸ್ತರು ಹಲವಾರು ವರ್ಷಗಳಿಂದ ಪುನರ್ವಸತಿ ಸಮಸ್ಯೆ ಎದುರಿಸುತ್ತಿದ್ದು, ಈ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತಂದು, ಶಾಶ್ವತ ಪರಿಹಾರ ಕಂಡುಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.

ತಾರಾಪುರ ಸಂತ್ರಸ್ತ ಕುಟುಂಬಗಳ 18 ವರ್ಷ ವಯಸ್ಸಿನ ಯುವಕರು ಮತ್ತು 35 ವರ್ಷ ವಯಸ್ಸಿನ ಪ್ರತಿಯೊಂದು ಕುಟುಂಬದ ಹೆಣ್ಣು ಮಕ್ಕಳಿಗೆ ನಿವೇಶನ ವಿತರಣೆ, ಪುನರ್ವಸತಿ ಸೌಲಭ್ಯ, ಹಾನಿಗೆ ಸಂಬಂಧಿಸಿದಂತೆ ಹೆಚ್ಚುವರಿ ಪರಿಹಾರ ಒದಗಿಸುವಂತೆ ಗ್ರಾಮಸ್ಥರು ಮಾಡಿದ ಮನವಿಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು.

ನೆರೆ ಸಂತ್ರಸ್ತ ಬಾಣಂತಿಯರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ನಾಗಠಾಣ ಶಾಸಕ ದೇವಾನಂದ ಚವ್ಹಾಣ, ಸಿಂದಗಿ ಶಾಸಕ ಎಂ.ಸಿ ಮನಗೂಳಿ, ಮಾಜಿ ಶಾಸಕ ರಮೇಶ ಬೂಸನೂರ, ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗೋವಿಂದ ರೆಡ್ಡಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು