ವಿಜಯಪುರ: ಜಿಲ್ಲೆಯ 147 ಪರೀಕ್ಷಾ ಕೇಂದ್ರಗಳಲ್ಲಿ ಶುಕ್ರವಾರ ಎಸ್ ಎಸ್ ಎಲ್ ಸಿ ಭಾಷಾ ಪರೀಕ್ಷೆಯು ಸುಸೂತ್ರವಾಗಿ ಜರುಗಿತು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಉಮೇಶ ಶಿರಹಟ್ಟಿಮಠ ತಿಳಿಸಿದ್ದಾರೆ.
ಶುಕ್ರವಾರ ನಡೆದ ಭಾಷಾ ಪರೀಕ್ಷೆಗೆ ಒಟ್ಟು 39,129 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಈ ಪೈಕಿ 38,297 ವಿದ್ಯಾರ್ಥಿಗಳು ಹಾಜರಾಗಿದ್ದು, 832 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು ಎಂದು ಅವರು ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಭೇಟಿ: ಜಿಲ್ಲಾಧಿಕಾರಿ ವಿಜಯ ಮಹಾಂತೇಶ ಅವರು ಶುಕ್ರವಾರ ನಗರದ ಟಿಟಿಐ ಆವರಣದಲ್ಲಿರುವ ಸರ್ಕಾರಿ ಉರ್ದು ಪ್ರೌಢಶಾಲೆ ಹಾಗೂ ಬಾಗಲಕೋಟೆ ರಸ್ತೆಯಲ್ಲಿರುವ ಪಿಡಿಜೆ ಪ್ರೌಢಶಾಲೆ ಹಾಗೂ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಪಾರದರ್ಶಕ ಹಾಗೂ ನಕಲು ಮುಕ್ತ ಪರೀಕ್ಷೆಗಳು ನಡೆಯುವಂತೆ ನೋಡಿಕೊಳ್ಳುವಂತೆ ಅವರು ತಿಳಿಸಿದರು.
ಪರೀಕ್ಷಾ ಕೇಂದ್ರಗಳ ಮೂಲ ಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿದರು.
ಪರೀಕ್ಷಾರ್ಥಿಗಳು ಯಾವುದೇ ಭಯವಿಲ್ಲದೇ, ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯುವಂತೆ ಪರೀಕ್ಷಾರ್ಥಿಗಳಲ್ಲಿ ಆತ್ಮಸ್ಥೈರ್ಯ ತುಂಬಿದರು.
ಪರೀಕ್ಷೆಗೆ ನಿಯೋಜಿಸಿದ ಅಧಿಕಾರಿ- ಸಿಬ್ಬಂದಿ ಮಾತ್ರ ಪರೀಕ್ಷಾ ಕೇಂದ್ರದಲ್ಲಿರಬೇಕು. ಬೇರೆ ಯಾರನ್ನು ಪರೀಕ್ಷಾ ಕೇಂದ್ರದೊಳಗೆ ಅನುಮತಿಸಬಾರದು. ಪರೀಕ್ಷೆಗೆ ಸಂಬಂಧಿಸಿದ ಅಗತ್ಯ ಸೂಚನೆಗಳನ್ನು ಚಾಚೂ ತಪ್ಪದೇ ಪಾಲಿಸಬೇಕು.
ಏನಾದರೂ ಲೋಪದೋಷಗಳಾದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ಅಗತ್ಯ ಮುಂಜಾಗ್ರತೆ ತೆಗೆದುಕೊಂಡು ಅತ್ಯಂತ ಸುಸೂತ್ರವಾಗಿ ಪರೀಕ್ಷೆ ನಡೆಸುವ ಬಹು ದೊಡ್ಡ ಜವಾಬ್ದಾರಿ ನಿಮಗಿದೆ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ನಗರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಮೊರಟಗಿ, ಅಧಿಕಾರಿಗಳು ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.