ಶನಿವಾರ, ಜನವರಿ 28, 2023
13 °C

ರಸ್ತೆ ನಿಯಮ ಜಾಗೃತಿ ಕೊರತೆ: ಅಪಘಾತ ಹೆಚ್ಚಳ -ವಿಜಯಮಹಾಂತೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಜನರಲ್ಲಿ ರಸ್ತೆ ನಿಯಮಗಳ ಕುರಿತು ಜಾಗೃತಿ ಇಲ್ಲದೇ ಇರುವುದರಿಂದ ಅಪಘಾತಗಳು ಹೆಚ್ಚಾಗಿ ಸಂಭವಿಸುತ್ತಿವೆ. ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ಪೊಲೀಸ್‌ ಇಲಾಖೆ ಸಮನ್ವಯತೆ ಸಾಧಿಸಿಕೊಂಡು ರಸ್ತೆ ನಿಯಮಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ವಿಜಯಮಹಾಂತೇಶ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ಅವರು ಮಾತನಾಡಿದರು.

ರಸ್ತೆ ನಿಯಮಗಳ ಕುರಿತು ಚಾಹನ ಸವಾರರಿಗೆ ಸೂಕ್ತ ಸಲಹೆ, ನಿರ್ದೇಶನಗಳನ್ನು ನೀಡುವುದರ ಮೂಲಕ ರಸ್ತೆ ಅಪಘಾತಗಳ ನಿಯಂತ್ರಣಕ್ಕೆ ಕ್ರಮ ವಹಿಸಬೇಕು ಎಂದು ಅವರು ಹೇಳಿದರು.

ಟೋಲ್‌ಗೇಟ್ ಹತ್ತಿರ ಸೂಚನಾ ಫಲಕ ಅಳವಡಿಸಬೇಕು. ರಾಷ್ಟ್ರೀಯ ಹೆದ್ದಾರಿಯಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು. ಇದರಿಂದ ಅಪಘಾತಗಳು ಸಂಭವಿಸಿದ ಸಂದರ್ಭದಲ್ಲಿ ಅಪಘಾತವಾದ ನಿಖರ ಕಾರಣ ಅರಿಯಲು ಸಾಧ್ಯವಾಗುತ್ತದೆ ಎಂದರು.

ಜಿಲ್ಲೆಯ ವಿವಿಧೆಡೆ ಇರುವ  ಕರ್ವಿಂಗ್ ರಸ್ತೆಗಳಲ್ಲಿ ಹೆಚ್ಚಾಗಿ ಅಪಘಾತಗಳು ಸಂಭವಿಸುವುದರಿಂದ ಇಂತಹ ಸ್ಥಳಗಳಲ್ಲಿ ಎಚ್ಚರಿಕೆ ಫಲಕಗಳನ್ನು ಅಳವಡಿಸಬೇಕು. ಅಪಘಾತದಲ್ಲಿ  ಗಾಯಾಳುಗಳಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ದೊರೆತಲ್ಲಿ ಸಾವು-ನೋವುಗಳನ್ನು ನಿಯಂತ್ರಣ ಮಾಡಬಹುದಾಗಿದ್ದು, ಈ ಕುರಿತು ಸಹ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಶಾಲಾ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಪ್ರಥಮ ಚಿಕಿತ್ಸೆ ಕುರಿತು ಅರಿವು ಮೂಡಿಸುವ ಜಾಥಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಶಾಲಾ ವಾಹನಗಳ ಸಂಚಾರಕ್ಕೆ ಸೂಕ್ತ ದಾಖಲೆಗಳನ್ನು ಪಡೆದುಕೊಂಡ ಮೇಲೆ ಅನುಮತಿ ನೀಡಬೇಕು. ಶಾಲಾ ವಾಹನಗಳಲ್ಲಿ ನಿಗದಿತ ಮಕ್ಕಳೊಂದಿಗೆ ಸಂಚಾರ ಕೈಗೊಳ್ಳುವುದರ ಕುರಿತು ಪರಿಶೀಲನೆ ನಡೆಸಬೇಕು. ವಿವಿಧ ಶಾಲೆಗಳಲ್ಲಿ ರಸ್ತೆ ಸುರಕ್ಷತೆ ನಿಯಮಗಳ ಕುರಿತು ಮಕ್ಕಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು  ಸೂಚನೆ ನೀಡಿದರು.

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ರಸ್ತೆಗಳಲ್ಲಿ ಟ್ರಾಫಿಕ್ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕೆ ಸೂಕ್ತ ಸೂಚನಾ ಫಲಕಗಳ ಅಳವಡಿಕೆ ಸೇರಿದಂತೆ ಯಾವುದಾದರೂ ಸಮಸ್ಯೆಗಳಿದ್ದಲ್ಲಿ, ಪರಿಹರಿಸಿಕೊಂಡು ಸುಗಮ ಸಂಚಾರಕ್ಕೆ ಅನುವು ಕಲ್ಪಿಸಬೇಕು ಎಂದರು. 

ಪ್ರಾದೇಶಿಕ ಸಾರಿಗೆ ಅಧಿಕಾರಿ ಆನಂದ ಪಾರ್ತನಳ್ಳಿ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಡಿವೈಎಸ್‍ಪಿ ಸಿದ್ದೇಶ್ವರ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್‌ ಎ.ಬಿ.ಚಿಕ್ಕಲಕಿ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ರಾಜು ಮುಜುಮದಾರ, ಕೆಎಸ್‍ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಎ.ಮುಲ್ಲಾ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಉಮೇಶ ಶಿರಹಟ್ಟಿಮಠ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್.ಎ.ಬಗಲಿ, ಕಂದಾಯ ಅಧಿಕಾರಿ ಆರ್.ಎ.ಆಲೂರಕರ, ಆರೋಗ್ಯ ಇಲಾಖೆ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ.ಎಂ.ಕೋಳೂರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು