ಬುಧವಾರ, ಸೆಪ್ಟೆಂಬರ್ 22, 2021
21 °C
ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಸಚಿವೆ ಶಶಿಕಲಾ ಜೊಲ್ಲೆ ಅಭಿಮತ

ಜನೋತ್ಸವವಾಗಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ: ಶಶಿಕಲಾ ಜೊಲ್ಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಸ್ವಾತಂತ್ರ್ಯದ ಅಮೃತ ಮಹೋತ್ಸವವು ಕೇವಲ ಸರ್ಕಾರಿ ಪ್ರಾಯೋಜಿತ ಕಾರ್ಯಕ್ರಮವಾಗದೇ, ಅದರಲ್ಲಿ ಪ್ರತಿಯೊಬ್ಬ ಭಾರತೀಯರೂ ದೇಶಪ್ರೇಮದೊಂದಿಗೆ ಭಾಗವಹಿಸುವ ಮೂಲಕ ಜನೋತ್ಸವವಾಗಬೇಕು ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ತೊರವಿಯ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಭಾನುವಾರ ಆಯೋಜಿಸಿದ್ದ ಸ್ವಾತಂತ್ರ್ಯ ಅಮೃತ ಮಹೋತ್ಸವದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ವಿಶ್ವದ ಅತ್ಯಂತ ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರ ನಮ್ಮದು. ಜಾತ್ಯತೀತ ನೆಲೆಗಟ್ಟಿನ ಮೇಲೆ ರೂಪುಗೊಂಡಿರುವ ನಮ್ಮ ದೇಶದ ಸಾಮಾಜಿಕ, ಆರ್ಥಿಕ, ರಾಜಕೀಯ, ಧಾರ್ಮಿಕ, ಸಾಂಸ್ಕೃತಿಕ, ವೈಜ್ಞಾನಿಕ ಹಾಗೂ ರಕ್ಷಣಾ ವಲಯಗಳ ನೀತಿ-ಸಿದ್ಧಾಂತಗಳು ಇಡೀ ವಿಶ್ವಕ್ಕೇ ಮಾದರಿಯಾಗಿವೆ ಎಂದು ಹೇಳಿದರು.

ಬಸವಾದಿ ಶರಣರು ಕಂಡ ಸಮಾನತೆಯ ಸಮಾಜ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್ ಅವರು ಆಶಿಸಿದ ತಾರತಮ್ಯ ರಹಿತ, ಧರ್ಮ ನಿರಪೇಕ್ಷಿತ ಮಾದರಿ ಸಮಾಜದ ಕನಸುಗಳೊಂದಿಗೆ ಭಾರತೀಯರೂ ಸ್ವಾವಲಂಬಿ, ಆತ್ಮನಿರ್ಭರ ರಾಷ್ಟ್ರ ನಿರ್ಮಾಣಕ್ಕಾಗಿ ಕಂಕಣಬದ್ಧರಾಗಬೇಕು ಎಂದರು.

ಕೆಚ್ಚೆದೆಯ ಸ್ವಾತಂತ್ರ್ಯ ಸೇನಾನಿಗಳ ಧೈರ್ಯ, ದೇಶಪ್ರೇಮ, ತ್ಯಾಗ, ಹೋರಾಟ ಮತ್ತು ಬಲಿದಾನಗಳ ಫಲವನ್ನು ಇಂದು ನಾವೆಲ್ಲ ಅನುಭವಿಸುತ್ತಿದ್ದೇವೆ ಎಂದು ಸ್ಮರಿಸಿದರು. 

ಕೋವಿಡ್ ಸಾಂಕ್ರಾಮಿಕ ರೋಗವು ಮನಕುಲದ ಸುಖ-ಶಾಂತಿ-ನೆಮ್ಮದಿಯನ್ನು ಕಿತ್ತುಕೊಂಡು, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ ಕ್ಷೇತ್ರಗಳ ಮೇಲೆ ಗಂಭೀರ ಪ್ರಮಾಣದಲ್ಲಿ ದುಷ್ಪರಿಣಾಮವನ್ನುಂಟುಮಾಡಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಇದುವರೆಗೆ 7 ಲಕ್ಷ ಜನರಿಗೆ ಒಂದನೇ ಡೋಸ್ ಹಾಗೂ 1.72 ಲಕ್ಷ ಜನರಿಗೆ ಎರಡನೇ ಡೋಸ್ ಕೋವಿಡ್ ಲಸಿಕೆಯನ್ನು ನೀಡಲಾಗಿದೆ ಎಂದರು.

ಅತಿವೃಷ್ಠಿಯಿಂದಾಗಿ ಅಂದಾಜು ₹92.79 ಕೋಟಿ ಮೊತ್ತದ ಮೂಲ ಸೌಕರ್ಯಗಳು ಹಾನಿಗೀಡಾಗಿದ್ದು, ಈ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ ಎಂದು ಹೇಳಿದರು.

ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಿದ ಬಳಿಕ ಪಥ ಸಂಚಲನ ವೀಕ್ಷಿಸಿದರು. ಕೋವಿಡ್ ಸಂದರ್ಭದಲ್ಲಿ ಅನುಪಮ ಸೇವೆಗೈದ ವಿವಿಧ ಕ್ಷೇತ್ರಗಳ ಪ್ರಮುಖರನ್ನು ಸಚಿವರು ಸನ್ಮಾನಿಸಿದರು. ಎಸ್‌ಎಸ್‌ಎಲ್‌ಸಿ‌ ಪರೀಕ್ಷೆಯಲ್ಲಿ 625ಕ್ಕೆ 625 ಅಂಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.

ಸಂಸದ ರಮೇಶ ಜಿಗಜಿಣಗಿ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ವಿಧಾನ ಪರಿಷತ್ ಸದಸ್ಯ ಅರುಣ್ ಶಹಾಪುರ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ಗೋವಿಂದ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ್ ಇದ್ದರು. 

‘ಜಿಲ್ಲೆಗೆ ಕೊರೊನಾ ರೂಪಾಂತರಿ ಪತ್ತೆ ಪ್ರಯೋಗಾಲಯ’ 

ವಿಜಯಪುರ: ರೂಪಾಂತರಗೊಳ್ಳುತ್ತಿರುವ ಕೊರೊನಾ ಡೆಲ್ಟಾ, ಡೆಲ್ಟಾ ಪ್ಲಸ್ ವೈರಾಣು ಪತ್ತೆ ಪ್ರಯೋಗಾಲಯ (ಜೀನೋಮಿಕ್ ಸೀಕ್ವೆನ್ಸಿಂಗ್) ಜಿಲ್ಲೆಗೆ ಮಂಜೂರಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಯಾಗಿರುವುದರಿಂದ ಹಾಗೂ ಬೆಂಗಳೂರಿನಲ್ಲಿರುವ ಈ ಪ್ರಯೋಗಾಲಯ ಜಿಲ್ಲೆಗೆ ದೂರವಾಗುವುದರಿಂದ ಜಿಲ್ಲೆಯಲ್ಲೇ ಪ್ರಯೋಗಾಲ ಆರಂಭಕ್ಕೆ ಸರ್ಕಾರ ಒಪ್ಪಿಗೆ ನೀಡಿದೆ ಎಂದರು.

ದಿವಂಗತ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ವ್ಯಕ್ತಿತ್ವ ಏನು ಎಂಬುದು ಎಲ್ಲಿರಿಗೂ ಗೊತ್ತು. ಅವರೊಬ್ಬ ಅಜಾತ ಶತ್ರುವಾಗಿದ್ದರು. ಅವರನ್ನು ಇಂದಿನ ರಾಜಕೀಯಕ್ಕೆ ಎಳೆದುತಂದು ಅವಮಾನ ಮಾಡುವುದು ಯಾರಿಗೂ ಶೋಭೆ ತರುವುದಿಲ್ಲ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.