ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

‘ಬೀಜ, ರಸಗೊಬ್ಬರ ಕೊರತೆಯಾಗದಿರಲಿ’

ಮುಂಗಾರು ಹಂಗಾಮು ಸಿದ್ಧತೆ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ. ಭೂಬಾಲನ್‌ ಸೂಚನೆ
Published 9 ಜೂನ್ 2024, 7:12 IST
Last Updated 9 ಜೂನ್ 2024, 7:12 IST
ಅಕ್ಷರ ಗಾತ್ರ

ವಿಜಯಪುರ: ಕಳೆದ ಕೆಲ ದಿನಗಳಿಂದ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರವನ್ನು ಸಮರ್ಪಕವಾಗಿ ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮುಂಗಾರು ಹಂಗಾಮು–2024 ಸಿದ್ಧತೆ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಯಾವುದೇ ಕಾರಣಕ್ಕೂ ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಕೊರತೆ ಉಂಟಾಗದಂತೆ ನೋಡಿಕೊಳ್ಳಬೇಕು. ಅಗತ್ಯ ಬಿದ್ದರೆ ಹೆಚ್ಚಿನ ಪ್ರಮಾಣದಲ್ಲಿ ದಾಸ್ತಾನು ಸಂಗ್ರಹಿಸುವ ಕಾರ್ಯ ಮಾಡಬೇಕು ಎಂದರು.

ರೈತ ಸಂಪರ್ಕ ಕೇಂದ್ರಗಳು ಬೀಜ ಹಾಗೂ ರಸಗೊಬ್ಬರ ನೀಡುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಬೇಕು. ಸರ್ಕಾರ ನಿಗದಿಮಾಡಿದ ದರಕ್ಕಿಂತ ಹೆಚ್ಚಿನ ಹಣವನ್ನು ರೈತರಿಂದ ವಸೂಲಾತಿ ಮಾಡುತ್ತಿರುವುದು ಕಂಡು ಬಂದರೆ ಅಂತಹ ಅಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರಾಜಶೇಖರ ವಿಲಿಯಮ್ಸ್ ಮಾತನಾಡಿ, ‘ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ 2,66,970 ಹೆಕ್ಟೇರ್‌ ನೀರಾವರಿ, 4,44,400 ಹೆಕ್ಟೇರ್‌ ಖುಷ್ಕಿ ಸೇರಿದಂತೆ ಒಟ್ಟು 7,11,370 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ’ ಎಂದು ಮಾಹಿತಿ ನೀಡಿದರು.

ಬಿತ್ತನೆ ಬೀಜಕ್ಕೆ ಸಂಬಂಧಿಸಿ ರೈತರಿಂದ ತೊಗರಿ ಬೀಜಕ್ಕೆ ಹೆಚ್ಚಿನ ಬೇಡಿಕೆ ಬಂದಿದೆ, ಈವರೆಗೆ ಜಿಲ್ಲೆಯಲ್ಲಿ 5788.25 ಕ್ವಿಂಟಲ್ ಬೀಜವನ್ನು ಸ್ವೀಕರಿಸಿದ್ದು, 4095.67 ಕ್ವಿಂಟಲ್ ಬೀಜವನ್ನು ರೈತರಿಗೆ ವಿತರಣೆ ಮಾಡಲಾಗಿದೆ. 1702.58 ಕ್ವಿಂಟಲ್‌ಗಳಷ್ಟು ತೊಗರಿ ಬೀಜ ಲಭ್ಯವಿದೆ. ಮುಂದೆ ರೈತರ ಬೇಡಿಕೆಗೆ ಅನುಗುಣವಾಗಿ ಇನ್ನಷ್ಟು ಬೀಜವನ್ನು ದಾಸ್ತಾನು ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

ಬಸವನಬಾಗೇವಾಡಿ, ವಿಜಯಪುರ, ಮುದ್ದೇಬಿಹಾಳ, ಇಂಡಿ, ಸಿಂದಗಿ ತಾಲ್ಲೂಕು ವ್ಯಾಪ್ತಿಯಲ್ಲಿ 51 ಕ್ವಿಂಟಲ್ ಹೆಸರು ಬೀಜಕ್ಕೆ ಬೇಡಿಕೆಯಿದ್ದು, 24.52 ಕ್ವಿಂಟಲ್‌ ವಿತರಣೆ ಮಾಡಲಾಗಿದೆ. 49.20 ಕ್ವಿಂಟಲ್ ಹೆಸರು ಬೀಜ ದಾಸ್ತಾನುವಿದೆ. 140 ಕ್ವಿಂಟಲ್ ಸಜ್ಜೆ ಬೇಡಿಕೆಯಿದ್ದು, 19.66 ಕ್ವಿಂಟಲ್ ರೈತರಿಗೆ ವಿತರಣೆ ಮಾಡಲಾಗಿದ್ದು, 39.30 ಕ್ವಿಂಟಲ್ ದಾಸ್ತಾನುವಿದೆ. ‌

9,535 ಕ್ವಿಂಟಲ್ ಮೆಕ್ಕೆಜೋಳಕ್ಕೆ ಬೇಡಿಕೆಯಿದ್ದು, 836.86 ಕ್ವಿಂಟಲ್ ಬೀಜವನ್ನು ರೈತರಿಗೆ ವಿತರಣೆ ಮಾಡಲಾಗಿದ್ದು, 905 ಕ್ವಿಂಟಲ್ ಬೀಜ ದಾಸ್ತಾನುವಿದೆ. 250 ಕ್ವಿಂಟಲ್‌ಗಳಷ್ಟು ಸೂರ್ಯಕಾಂತಿ ಬೀಜಕ್ಕೆ ಬೇಡಿಕೆಯಿದ್ದು, 5.58 ಕ್ವಿಂಟಲ್ ಬೀಜವನ್ನು ರೈತರಿಗೆ ವಿತರಣೆ ಮಾಡಲಾಗಿದ್ದು, 36 ಕ್ವಿಂಟಲ್ ಬೀಜ ದಾಸ್ತಾನು ಇದೆ. ಶೇಂಗಾ ಬೀಜಕ್ಕೆ 25 ಕ್ವಿಂಟಲ್ ಬೇಡಿಕೆಯಿದ್ದು, 25 ಕ್ವಿಂಟಲ್ ಬೀಜ ದಾಸ್ತಾನು ಇದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ರಸಗೊಬ್ಬರ ದಾಸ್ತಾನು ಇದ್ದು, 51,642.456 ಮೆಟ್ರಿಕ್ ಟನ್ ಯೂರಿಯಾ, 7,094.92 ಮೆಟ್ರಿಕ್ ಟನ್ ಡಿಎಪಿ, 1,914.945 ಮೆಟ್ರಿಕ್‌ ಟನ್ ಎಂಒಪಿ, 33,615.395 ಮೆಟ್ರಿಕ್ ಟನ್ ಎನ್‌ಪಿಕೆಎಸ್, 2,924.65 ಮೆಟ್ರಿಕ್ ಟನ್ ಎಸ್‌ಎಸ್‌ಪಿ, 1.15 ಮೆಟ್ರಿಕ್ ಟನ್ ಕಾಂಪೋಸ್ಟ್ ರಸಗೊಬ್ಬರ ದಾಸ್ತಾನು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಸೇರಿದಂತೆ ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು, ಕೃಷಿ ಇಲಾಖೆಯ ಅಧಿಕಾರಿಗಳು ಇದ್ದರು.

ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮುಂಗಾರು ಹಂಗಾಮು–2024 ಸಿದ್ಧತೆ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರಾಜಶೇಖರ ವಿಲಿಯಮ್ಸ್ ಮಾಹಿತಿ ನೀಡಿದರು
ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮುಂಗಾರು ಹಂಗಾಮು–2024 ಸಿದ್ಧತೆ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರಾಜಶೇಖರ ವಿಲಿಯಮ್ಸ್ ಮಾಹಿತಿ ನೀಡಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT