ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆಗೆ ‘ಕೈ’ ಅಭ್ಯರ್ಥಿ ಘೋಷಣೆ: ವಿಜಯಪುರದಿಂದ ರಾಜು ಆಲಗೂರ ಕಣಕ್ಕೆ

Published 8 ಮಾರ್ಚ್ 2024, 14:56 IST
Last Updated 8 ಮಾರ್ಚ್ 2024, 14:56 IST
ಅಕ್ಷರ ಗಾತ್ರ

ವಿಜಯಪುರ: ನಿರೀಕ್ಷೆಯಂತೆ ವಿಜಯಪುರ ಮೀಸಲು ಲೋಕಸಭಾ ಕ್ಷೇತ್ರಕ್ಕೆ ಮಾಜಿ ಶಾಸಕ ಪ್ರೊ.ರಾಜು ಆಲಗೂರ ಅವರಿಗೆ ಕಾಂಗ್ರೆಸ್‌ ಟಿಕೆಟ್‌ ಘೋಷಣೆ ಮಾಡಿದೆ.

ವಿಜಯಪುರ ಜಿಲ್ಲಾ ಕಾಂಗ್ರೆಸ್‌ ಘಟಕದ ಹಾಲಿ ಅಧ್ಯಕ್ಷರೂ ಆಗಿರುವ ರಾಜು ಆಲಗೂರ ಅವರು ಜಿಲ್ಲೆಯಲ್ಲಿ ಪ್ರಬಲವಾಗಿರುವ ಬಲಗೈ (ಚಲುವಾದಿ) ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ಈ ಹಿಂದೆ 1999–2004ರಲ್ಲಿ ಬಳ್ಳೊಳ್ಳಿ ಮೀಸಲು ವಿಧಾನಸಭಾ ಕ್ಷೇತ್ರ ಹಾಗೂ 2013–18ರ ಅವಧಿಯಲ್ಲಿ ನಾಗಠಾಣ ಮೀಸಲು ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿದ್ದರು. ಕರ್ನಾಟಕ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮ(ಕೆಎಸ್‌ಡಿಎಲ್)ದ ಅಧ್ಯಕ್ಷರಾಗಿ, ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಯಾಗಿಯೂ ಆಲಗೂರ ಕಾರ್ಯನಿರ್ವಹಿಸಿದ್ದಾರೆ.

ರೈತ ಪರ, ದಲಿತಪರ ಸಂಘಟನೆಗಳಲ್ಲಿ ಸಕ್ರಿಯವಾಗಿದ್ದ ಅವರು, ಜಿಲ್ಲೆಯಲ್ಲಿ ನಡೆದ ಅನೇಕ ಹೋರಾಟಗಳ ನೇತೃತ್ವವನ್ನು ವಹಿಸಿದ್ದರು.  

ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಸದ್ಯ ಆರು ಶಾಸಕರನ್ನು ಹೊಂದಿರುವ ಕಾಂಗ್ರೆಸ್‌ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಪ್ರಬಲ ಪೈಪೋಟಿ ನೀಡುವ ನಿರೀಕ್ಷೆ ಇದೆ.

‘ಕಾಂಗ್ರೆಸ್‌ ಪಕ್ಷವು ನನಗೆ ಟೆಕೆಟ್ ನೀಡುವ ಮೂಲಕ ಎಸ್‌ಸಿ ಬಲಗೈ ಸಮುದಾಯಕ್ಕೆ ನ್ಯಾಯ ಒದಗಿಸಿದೆ. ಸಚಿವರಾದ ಎಂ.ಬಿ.ಪಾಟೀಲ, ಶಿವಾನಂದ ಪಾಟೀಲ ಹಾಗೂ ಶಾಸಕರು, ಮುಖಂಡರ ಸಹಕಾರದಿಂದ ವಿಜಯಪುರ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದೇನೆ. ಪಕ್ಷದ ಮುಖಂಡರು, ಜಿಲ್ಲೆಯ ಮತದಾರರು ಈ ಬಾರಿ ಕಾಂಗ್ರೆಸ್‌ ಕೈಹಿಡಿಯುವ ವಿಶ್ವಾಸ ಇದೆ’ ಎಂದು ಪ್ರೊ.ರಾಜು ಆಲಗೂರ ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್‌ ಟಿಕೆಟ್‌ಗಾಗಿ ಜಿಲ್ಲೆಯಲ್ಲಿ 10 ಜನ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿ, ಲಾಬಿ ನಡೆಸಿದ್ದರು. ಆದರೆ, ಪಕ್ಷದ ವರಿಷ್ಠರು  ರಾಜು ಆಲಗೂರ ಅವರ ಹೆಸರು ಅಂತಿಮಗೊಳಿಸಿದ್ದಾರೆ.

ಅಂತಿಮವಾಗದ ಬಿಜೆಪಿ ಅಭ್ಯರ್ಥಿ: ವಿಜಯಪುರ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ. ಹಾಲಿ ಸಂಸದ ರಮೇಶ ಜಿಗಜಿಣಗಿ, ಡಾ.ಬಾಬು ರಾಜೇಂದ್ರ ನಾಯಿಕ ಸೇರಿದಂತೆ ಮೂರ್ನಾಲ್ಕು ಹೆಸರು ಪ್ರಬಲವಾಗಿ ಕೇಳಿಬರುತ್ತಿದೆ. ಒಂದೆರಡು ದಿನಗಳಲ್ಲಿ ಬಿಜೆಪಿ ಅಭ್ಯರ್ಥಿ ಘೋಷಣೆಯಾಗುವ ನಿರೀಕ್ಷೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT