ವಿಜಯಪುರ: ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ತಡೆಯುವಲ್ಲಿ ವಿಫಲವಾಗಿರುವ ಅಲ್ಲಿನ ರಾಜ್ಯ ಮತ್ತು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಬುಧವಾರ ಎನ್.ಎಸ್.ಯು.ಐ. ಜಿಲ್ಲಾ ಘಟಕದಿಂದ ಪ್ರತಿಭಟಿಸಲಾಯಿತು.
ಎನ್.ಎಸ್.ಯು.ಐ. ಜಿಲ್ಲಾ ಘಟಕದ ಅಧ್ಯಕ್ಷ ಅಮೀತ್ ಚವ್ಹಾಣ ಮಾತನಾಡಿ, ‘ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರ ಹಾಗೂ ಇಬ್ಬರು ಮಹಿಳೆಯರ ಬೆತ್ತಲೆ ಪ್ರಕರಣದಿಂದ ದೇಶವೇ ತಲೆ ತಗ್ಗಿಸುವಂತಾಗಿದೆ. ಅಲ್ಲಿನ ರಾಜ್ಯ ಮತ್ತು ಕೇಂದ್ರ ಬಿಜೆಪಿ ಸರ್ಕಾರಗಳೇ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡುತ್ತಿವೆ’ ಎಂದು ಆರೋಪಿಸಿದರು.
‘ಅಲ್ಲಿನ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ, ಸಾಂವಿಧಾನಿಕ ಸಂಸ್ಥೆಗಳು ನಿಷ್ಕ್ರೀಯವಾಗಿವೆ ಎಂದು ಸುಪ್ರಿಂ ಕೋರ್ಟ್ ಚಾಟಿ ಬೀಸಿದೆ. ಇಷ್ಟಾದರೂ ಪ್ರಧಾನಿ, ಗೃಹ ಸಚಿವರು ಎಚ್ಚೆತ್ತುಕೊಳ್ಳದಿರುವುದು ನಾಚಿಕೆಗೇಡಿನ ಸಂಗತಿ’ ಎಂದರು.
‘ಹಲವು ರಾಜ್ಯಗಳಲ್ಲಿ ಕೋಮು ಗಲಭೆ ನಡೆಯುತ್ತಿದ್ದರೂ ಪ್ರಧಾನಿ ಮೋದಿ ಒಮ್ಮೆಯೂ ಇಂತಹ ಘಟನೆಗಳ ಬಗ್ಗೆ ಪ್ರತಿಕ್ರಿಯಿಸಿಲ್ಲ ಹಾಗೂ ಹಿಂಸೆ ತಡಯಲು ಕಠಿಣ ಕ್ರಮ ತೆಗೆದುಕೊಳ್ಳುತ್ತಿಲ್ಲ’ ಎಂದು ಆರೋಪಿಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪವನ ಬಿರಾದಾರ, ಶರಣು ದೊಡಮನಿ, ಮಾಳು ಬಂಡಿವಡ್ಡರ, ಭೀಮು ಗೊಗದೊಡ್ಡಿ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.