ಶನಿವಾರ, ಅಕ್ಟೋಬರ್ 16, 2021
29 °C
ಸಿಂದಗಿಗೆ ಕಾಂಗ್ರೆಸ್‌, ಬಿಜೆಪಿ ನಾಯಕರ ದಂಡು ಆಗಮನ ಇಂದು

ಮನಗೂಳಿ, ಭೂಸನೂರು ನಾಮಪತ್ರ ಸಲ್ಲಿಕೆ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಸಿಂದಗಿ ವಿಧಾನಸಭಾ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ಅಶೋಕ ಮನಗೂಳಿ ಮತ್ತು ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರು ಅ.8ರಂದು ನಾಮಪತ್ರ ಸಲ್ಲಿಸಲಿದ್ದಾರೆ.

ಈಗಾಗಲೇ ಜೆಡಿಎಸ್‌ ಅಭ್ಯರ್ಥಿ ನಾಜಿಯಾ ಅಂಗಡಿ ಸೇರಿದಂತೆ ಮೂವರು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಲು ಅ.8 ಕೊನೆಯ ದಿನವಾಗಿದೆ. ಕಾಂಗ್ರೆಸ್‌ ಅಭ್ಯರ್ಥಿ ಅಶೋಕ ಮನಗೂಳಿ ಗುರುವಾರವೇ ನಾಮಪತ್ರ ಸಲ್ಲಿಸಿದ್ದು, ಶುಕ್ರವಾರ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ.

ಮನಗೂಳಿ ಅವರು ಬೆಳಿಗ್ಗೆ 11ಕ್ಕೆ ಸಿಂದಗಿ ಪಟ್ಟಣದ ಗಾಂಧಿ ಸರ್ಕಲ್‌ನಿಂದ ಮೆರವಣಿಗೆ ಮೂಲಕ ತಹಶೀಲ್ದಾರ್‌ ಕಚೇರಿಗೆ ತೆರಳಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಲಿದ್ದಾರೆ. ಬಳಿಕ ಮಧ್ಯಾಹ್ನ 3ಕ್ಕೆ ಪಟ್ಟಣದ ಎಚ್‌.ಜಿ.ಮೈದಾನದಲ್ಲಿ ಬಹಿರಂಗ ಸಭೆ ನಡೆಯಲಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ, ಶಾಸಕರಾದ ಎಚ್.ಕೆ.ಪಾಟೀಲ, ಎಂ.ಬಿ.ಪಾಟೀಲ, ಶಿವಾನಂದ ಪಾಟೀಲ, ಯಶವಂತರಾಯಗೌಡ ಪಾಟೀಲ, ಮಾಜಿ ಶಾಸಕ ಅಪ್ಪಾಜಿನಾಡಗೌಡ, ಜಿಲ್ಲಾ ಘಟಕದ ಅಧ್ಯಕ್ಷ ರಾಜು ಅಲಗೂರ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ:

ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರು ಮಧ್ಯಾಹ್ನ 12.30ಕ್ಕೆ ನಾಮಪತ್ರ ಸಲ್ಲಿಸಲಿದ್ದು, ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ. ಪಾಟೀಲ್, ಶಶಿಕಲಾ ಜೊಲ್ಲೆ, ವಿ. ಸೋಮಣ್ಣ ಮತ್ತು ಸಂಸದ ರಮೇಶ್ ಜಿಗಜಿಣಗಿ ಮತ್ತು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಭಾಗವಹಿಸಲಿದ್ದಾರೆ.

ಪಕ್ಷ ಸೇರ್ಪಡೆ: ವಿಜಯಪುರದ ಕಿತ್ತೂರ ರಾಣಿ ಚೆನ್ನಮ್ಮ ಮಂಗಲ ಕಾರ್ಯಾಲಯದಲ್ಲಿ ಅ.8 ರಂದು ಮಧ್ಯಾಹ್ನ 3.30‌ಕ್ಕೆ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ.

ಮುಖಂಡರಾದ ಅಪ್ಪುಗೌಡ ಪಾಟೀಲ ಮನಗೂಳಿ, ಉಮೇಶ ಕೋಳಕೂರ, ಶಿವಯೋಗೆಪ್ಪ ನೇದಲಗಿ, ಶಿವಶಂಕರಗೌಡ ಭೈರಗೊಂಡ, ಸುರೇಶಗೌಡ ಪಾಟೀಲ ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ್ ಅವರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಗೊಳ್ಳಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.