ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾ.ಪಂ.ಅಭಿವೃದ್ಧಿಗೆ ಪ್ರಥಮ ಆದ್ಯತೆ

ವಿಧಾನ ಪರಿಷತ್‌ ಬಿಜೆಪಿ ಅಭ್ಯರ್ಥಿ ಪಿ.ಎಚ್.ಪೂಜಾರ ಭರವಸೆ
Last Updated 6 ಡಿಸೆಂಬರ್ 2021, 14:30 IST
ಅಕ್ಷರ ಗಾತ್ರ

ಬಬಲೇಶ್ವರ: ಪ್ರಧಾನಿ ನರೇಂದ್ರ ಮೋದಿ ಅವರು ಗ್ರಾಮ ಪಂಚಾಯ್ತಿಗಳಿಗೆ ನೇರವಾಗಿ ಅನುದಾನ ಲಭಿಸುವಂತೆ ಮಾಡುವ ಮೂಲಕ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿದ್ದಾರೆ. ಗ್ರಾಮ ಪಂಚಾಯ್ತಿಗಳ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಪ್ರಥಮ ಆದ್ಯತೆ ನೀಡಿದೆ ಎಂದು ವಿಧಾನ ಪರಿಷತ್‌ ಬಿಜೆಪಿ ಅಭ್ಯರ್ಥಿ ಪಿ.ಎಚ್.ಪೂಜಾರ ಹೇಳಿದರು.

ಬಬಲೇಶ್ವರದ ಗುರುಪಾದೇಶ್ವರ ಮಠದ ಆವರಣದಲ್ಲಿ ಆಯೋಜಿಸಿದ್ದ ಬಿಜೆಪಿ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಹಳ್ಳಿ, ಹಳ್ಳಿಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿತ್ತು. ಮಾಜಿ ಪ್ರಧಾನಿ ದಿ. ರಾಜೀವ್‌ ಗಾಂಧಿ ಅವರೇ ಹೇಳಿರುವಂತೆ ಕೇಂದ್ರ ಸರ್ಕಾರ ಬಿಡುಗಡೆ ಮಾಡುವ ಪ್ರತಿ ₹1 ರಲ್ಲಿ ಗ್ರಾಮೀಣ ಭಾಗಕ್ಕೆ ಕೇವಲ 25 ಪೈಸೆ ತಲುಪುತ್ತಿತ್ತು. ಅಷ್ಟೊಂದು ಭ್ರಷ್ಟಾಚಾರ ಇತ್ತು. ಬಿಜೆಪಿ ಆಡಳಿತದಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಬಿದ್ದಿದೆ. ಗ್ರಾಮಾಭಿವೃದ್ಧಿಯಾಗುತ್ತಿದೆ ಎಂದರು.

ವಿಧಾನ ಪರಿಷತ್‌ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾದ ನನಗೆ ಪ್ರಥಮ ಪ್ರಾಶಸ್ತ್ಯದ ಮತಗಳನ್ನು ಹಾಕಿ ಕಳುಹಿಸಿದರೆ ಗ್ರಾಮ ಪಂಚಾಯ್ತಿ ಸದಸ್ಯರಿಗೆ ಅಗತ್ಯ ಮೂಲಸೌಲಭ್ಯ ಒದಗಿಸಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸುತ್ತೇನೆ ಎಂದು ಹೇಳಿದರು.

ಅವಳಿ ಜಿಲ್ಲೆಯ ಹಾಲಿ, ಮಾಜಿ ಶಾಸಕರು, ಹಾಲಿ, ಮಾಜಿ ಸಚಿವರು, ಮುಖಂಡರು, ಕಾರ್ಯಕರ್ತರು, ಗ್ರಾಮ ಪಂಚಾಯ್ತಿ ಸದಸ್ಯರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದ್ದು, ಚುನಾವಣೆಯಲ್ಲಿ ನನ್ನ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಂಸದ ರಮೇಶ ಜಿಗಜಿಣಗಿ ಮಾತನಾಡಿ, ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಗ್ರಾಮೀಣಾಭಿವೃದ್ಧಿ ಪರ್ವ ಆರಂಭವಾಗಿದೆ. ಪ್ರತಿ ಹಳ್ಳಿಗೆ ಕುಡಿಯುವ ನೀರು, ರಸ್ತೆ, ಸಾರಿಗೆ, ವಿದ್ಯುತ್‌ ಸೇರಿದಂತೆ ಮೂಲಸೌಲಭ್ಯ ಒದಗಿಸಲಾಗುತ್ತಿದೆ ಎಂದರು.

ವಿಧಾನ ಪರಿಷತ್‌ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವಸಭ್ಯ, ಭ್ರಷ್ಟಾಚಾರ ರಹಿತ ರಾಜಕಾರಣಿಯಾಗಿರುವ ಪಿ.ಎಚ್‌.ಪೂಜಾರ ಅವರನ್ನು ಬಹುಮತದೊಂದಿಗೆ ವಿಧಾನಸೌಧಕ್ಕೆ ಆರಿಸಿ ಕಳುಹಿಸಬೇಕು ಎಂದು ಹೇಳಿದರು.

ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ ಮಾತನಾಡಿ, ಕಾಂಗ್ರೆಸ್‌ ಅಭ್ಯರ್ಥಿ ಗ್ರಾಮ ಪಂಚಾಯ್ತಿಗಳಿಗೆ ಸ್ಯಾನಿಟೈಜರ್‌ ಮಷಿನ್‌ ಒದಗಿಸಿರುವುದಾಗಿ ಹೇಳುತ್ತಾರೆ. ಆದರೆ, ಮಿಷನ್‌ ಖರೀದಿಯಲ್ಲೇ ಭ್ರಷ್ಟಾಚಾರ ಮಾಡಿದ್ದಾರೆ. ಈ ಬಗ್ಗೆ ನನ್ನ ಬಳಿ ದಾಖಲೆಗಳಿದ್ದು, ಸಮಯ ಬಂದಾಗ ಬಹಿರಂಗ ಪಡಿಸುತ್ತೇನೆ ಎಂದು ಹೇಳಿದರು.

ಬಿಜೆಪಿ ವಿಜಯಪುಯರ ಜಿಲ್ಲಾ ಘಟಕದ ಅಧ್ಯಕ್ಷ ಆರ್‌.ಎಸ್‌.ಪಾಟೀಲ ಕೂಚಬಾಳ, ವಿಧಾನ ಪರಿಷತ್‌ ಮಾಜಿ ಸದಸ್ಯ ನಾರಾಯಣಸಾ ಬಾಂಡಗೆ, ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪುರ, ಮಾಜಿ ಸಚಿವ ಎಸ್‌.ಕೆ.ಬೆಳ್ಳುಬ್ಬಿ, ಮುಖಂಡರಾದ ಚಂದ್ರಶೇಖರ ಕವಟಗಿ, ಪ್ರಕಾಶ ಅಕ್ಕಲಕೋಟೆ, ವಿಠಲ ಕಿರಸೂರ ಸೇರಿದಂತೆ ನೂರಾರು ಗ್ರಾಮ ಪಂಚಾಯ್ತಿ ಸದಸ್ಯರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT