ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಯವ್ಯ ಶಿಕ್ಷಕರ, ಪದವೀಧರ ಕ್ಷೇತ್ರಕ್ಕೆ ಚುನಾವಣೆ ಜೂನ್‌ 13ಕ್ಕೆ

ವಿಧಾನ ಪರಿಷತ್‌ ಚುನಾವಣೆ; ವಿಜಯಪುರ ಜಿಲ್ಲೆಯಲ್ಲಿ 40 ಮತಗಟ್ಟೆ: ಡಿಸಿ
Last Updated 12 ಮೇ 2022, 14:32 IST
ಅಕ್ಷರ ಗಾತ್ರ

ವಿಜಯಪುರ: ವಿಧಾನ ಪರಿಷತ್‌ ವಾಯವ್ಯ ಶಿಕ್ಷಕರ ಮತ್ತು ಪದವೀಧರ ಮತಕ್ಷೇತ್ರಗಳಿಗೆಚುನಾವಣಾ ಆಯೋಗವು ವೇಳಾಪಟ್ಟಿ ಪ್ರಕಟಿಸಿದ್ದು, ಜೂನ್‌ 13ಕ್ಕೆ ಮತದಾನ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ಬಿ.ದಾನಮ್ಮನವರ ಹೇಳಿದರು.

ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮೇ 19ರಂದು ಅಧಿಸೂಚನೆ ಹೊರಡಿಸಲಾಗುವುದು. ಮೇ 26 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಮೇ 27ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ ಎಂದರು.

ನಾಮಪತ್ರಗಳನ್ನು ಹಿಂಪಡೆಯಲು ಮೇ 30 ಕೊನೆಯ ದಿನವಾಗಿದೆ. ಜೂನ್ 13ರಂದು ಬೆಳಿಗ್ಗೆ 8 ರಿಂದ ಸಂಜೆ 4ರವರೆಗೆಮತದಾನ ನಡೆಯಲಿದೆ. ಜೂನ್ 15 ರಂದು ಮತ ಎಣಿಕೆ ನಡೆಯಲಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟು 40 ಮತಗಟ್ಟೆಗಳನ್ನು ತೆರೆಯಲಾಗುವುದು. ಆಯಾ ತಾಲ್ಲೂಕಿನ ತಹಶೀಲ್ದಾರ್ ಕಚೇರಿಯಲ್ಲಿ ಮಸ್ಟರಿಂಗ್ ಮತ್ತು ಡಿ ಮಸ್ಟರಿಂಗ್ ಕಾರ್ಯ ನಡೆಯಲಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ4094 ಪುರುಷರು ಹಾಗೂ 1418 ಮಹಿಳೆಯರು ಸೇರಿದಂತೆ ಒಟ್ಟು 5512 ಶಿಕ್ಷಕ ಮತದಾರರು ಹಾಗೂ 11,218 ಪುರುಷರು ಮತ್ತು 3626 ಮಹಿಳೆಯರು ಸೇರಿ ಒಟ್ಟು 14,846 ಪದವೀಧರ ಮತದಾರರು ಈ ಚುನಾವಣೆಯಲ್ಲಿ ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ ಎಂದು ಹೇಳಿದ್ದಾರೆ.

ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಸುವ್ಯವಸ್ಥಿತವಾಗಿ ಜಾರಿ ಮಾಡಲು ತಲಾ 13 ಎಫ್ಎಸ್‌ಟಿ, ವಿವಿಟಿ, ವಿಎಸ್‌ಟಿ, ಎಂಸಿಸಿ ಸೇರಿದಂತೆ ವಿವಿಧ ತಂಡಗಳ ರಚನೆಯ ಪ್ರಕ್ರಿಯೆ ನಡೆಯುತ್ತಿದೆ ಎಂದು ಅವರು ಹೇಳಿದರು.

ಕೋವಿಡ್-19 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಈ ಚುನಾವಣೆಯ ಪ್ರಕ್ರಿಯೆ ನಡೆಸಲಾಗುವುದು ಎಂದು ಅವರು ಹೇಳಿದರು.

ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ನೋಂದಾಣಿ ಕಾರ್ಯ ಮುಂದುವರಿದಿದೆ. ಆಯೋಗದಿಂದ ಸೂಚನೆ ಬಂದ ಬಳಿಕ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ್ ಮಾತನಾಡಿ, ಚುನಾವಣಾ ಅಕ್ರಮಗಳು ನಡೆಯದಂತೆ ಪೊಲೀಸ್‌ ಇಲಾಖೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಿದೆ. ಶಾಂತಿಯುತವಾಗಿ ಮತ್ತು ಪಾರದರ್ಶಕವಾಗಿ ಚುನಾವಣೆ ನಡೆಸಲು ಅಗತ್ಯ ಬಂದೋಬಸ್ತ್‌ ಕೈಗೊಳ್ಳಲಾಗುವುದು ಎಂದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕಳಸದ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT