ಶುಕ್ರವಾರ, ಅಕ್ಟೋಬರ್ 30, 2020
23 °C
ಜಿಲ್ಲೆಯಲ್ಲಿ ಪ್ರಸಕ್ತ 50,340 ಕ್ವಿಂಟಲ್ ಇಳುವರಿ ನಿರೀಕ್ಷೆ

ಹೆಸರುಕಾಳು ಖರೀದಿ ಕೇಂದ್ರ ಆರಂಭಕ್ಕೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಜಿಲ್ಲೆಯ ತಾಲ್ಲೂಕು ಕೇಂದ್ರಗಳಲ್ಲಿ ಹೆಸರುಕಾಳು ಖರೀದಿ ಕೇಂದ್ರಗಳನ್ನು ಸ್ಥಾಪಿಸುವಂತೆ ಜಿಲ್ಲಾಧಿಕಾರಿ ಪಿ. ಸುನೀಲ್‌ ಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಕನಿಷ್ಠ ಬೆಂಬಲ ಬೆಲೆಗಿಂತ ಕಡಿಮೆ ದರದಲ್ಲಿ ಹೆಸರುಕಾಳು ಮಾರಾಟವಾಗುತ್ತಿರುವುದರಿಂದ, ವಿಜಯಪುರ, ಬಸವನ ಬಾಗೇವಾಡಿ, ಮುದ್ದೇಬಿಹಾಳ, ತಾಳಿಕೋಟೆ, ಸಿಂದಗಿ ಹಾಗೂ ಇಂಡಿ ತಾಲ್ಲೂಕುಗಳಲ್ಲಿ ಬೆಂಬಲಬೆಲೆ ಯೋಜನೆಯಡಿ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಿ, ವ್ಯವಸ್ಥಿತವಾಗಿ ನಿರ್ವಹಿಸುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ 6712 ಹೆಕ್ಟೆರ್‌ ಕ್ಷೇತ್ರದಲ್ಲಿ ಹೆಸರು ಬಿತ್ತನೆಯಾಗಿದ್ದು, ಕೃಷಿ ಇಲಾಖೆ ಮಾಹಿತಿ ಪ್ರಕಾರ ಅಂದಾಜು 50,340 ಕ್ವಿಂಟಲ್ ಇಳುವರಿ ಬರಬಹುದು ಎಂದು ನೀರಿಕ್ಷಿಸಲಾಗಿದೆ. ಜಿಲ್ಲೆಯ ಯಾವ ರೈತರಿಗೂ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಕನಿಷ್ಠ ಬೆಂಬಲಬೆಲೆ ಯೋಜನೆಯಡಿ ಕೆಂದ್ರ ಸರ್ಕಾರವು ಪ್ರತಿ ಕ್ವಿಂಟಾಲ್‍ಗೆ ₹ 7196 ಬೆಲೆ ನಿಗದಿ ಮಾಡಿದ್ದು, ಪ್ರತಿ ಎಕರೆಗೆ 4 ಕ್ವಿಂಟಲ್ ಗರಿಷ್ಠ ಪ್ರಮಾಣ ಹಾಗೂ ಪ್ರತಿ ರೈತರಿಂದ ಗರಿಷ್ಠ 4 ಕ್ವಿಂಟಲ್ ಖರೀದಿ ಪ್ರಮಾಣ ನಿಗದಿಪಡಿಸಿ ಖರೀದಿಸಬೇಕು ಎಂದರು.

ರೈತರ ಹೆಸರಿನ ಆಧಾರ್‌ ಸಂಖ್ಯೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ಮಾತ್ರ ಉತ್ಪನ್ನದ ಮೌಲ್ಯವು ಡಿ.ಬಿ.ಐ ಮೂಲಕ ಜಮಾ ಆಗುವಂತೆ ಪಾವತಿ ಮಾಡಬೇಕು ಎಂದು ಸೂಚಿಸಿದರು.

ಹೆಸರುಕಾಳ ಖರೀದಿ ಕೇಂದ್ರಗಳಲ್ಲಿ ರೈತರ ಹೆಸರಿನಲ್ಲಿ ವರ್ತಕರು ತರುವ ಹೆಸರುಕಾಳು ಖರೀದಿಸದಂತೆ ಹಾಗೂ ಯಾವುದೇ ರೀತಿಯ ದುರುಪಯೋಗ ಆಗದಂತೆ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದರು.

ಬೆಂಬಲಬೆಲೆ ಯೋಜನೆ ಮಾರ್ಗಸೂಚಿ ಹಾಗೂ ಆವರ್ತನಿಧಿ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಹಾಗೂ ಕೊರೊನಾ ಹಿನ್ನೆಲೆ ಪರಸ್ಪರ ಅಂತರ ಕಾಪಾಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಂಟಿ ಕೃಷಿ ನಿರ್ದೇಶಕ ರಾಜಶೇಖರ ವಿಲಿಯಮ್ಸ್, ಎ.ಪಿ.ಎಂ.ಸಿ ಸಹಾಯಕ ನಿರ್ದೇಶಕ ಛಬನೂರ ಸಭೆಯಲ್ಲಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು