ಶನಿವಾರ, ಜೂಲೈ 4, 2020
24 °C

ತಂಬಾಕು ಉತ್ಪನ್ನ ಮಾರಾಟ ತಡೆಗೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಸಾರ್ವಜನಿಕರ ಆರೋಗ್ಯಕ್ಕೆ ಹಾನಿಕರವಾಗಿರುವ ತಂಬಾಕು ಉತ್ಪನ್ನ ಮಾರಾಟ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾಮಟ್ಟದ ತ್ರೈಮಾಸಿಕ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಅನಧಿಕೃತ ತಂಬಾಕು ಮಾರಾಟ ಕೇಂದ್ರಗಳ ಮೇಲೆ ಜಿಲ್ಲಾ ಹಾಗೂ ತಾಲ್ಲೂಕು ತನಿಖಾ ತಂಡದಿಂದ ನಿರಂತರ ದಾಳಿ ನಡೆಸುವಂತೆ ಸೂಚಿಸಿದರು.

ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ ಮತ್ತು ಗ್ರಾಮ ಪಂಚಾಯ್ತಿಯಿಂದ ಪರವಾನಗಿ ನೀಡುವಾಗ ಎಲ್ಲ ಪಾನ್ ಶಾಪ್‍, ಅಂಗಡಿ, ಹೋಟೆಲ್, ರೆಸ್ಟೋರೆಂಟ್, ಬೇಕರಿ ಹಾಗೂ ಲಾಡ್ಜ್‌ಗಳಲ್ಲಿ ತಂಬಾಕು ಉತ್ಪನ್ನ ಮಾರಾಟ ನಿಷೇಧ ಮತ್ತು ತಂಬಾಕು ಬಳಕೆಯಿಂದ ಆಗುವ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸುವ ನಾಮಫಲಕವನ್ನು ಅಳವಡಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಸರ್ಕಾರಿ ಮತ್ತು ಸರ್ಕಾರೇತರ ಕಚೇರಿಗಳನ್ನು ‘ತಂಬಾಕು ಮುಕ್ತ ಕಚೇರಿ’ ಗಳನ್ನಾಗಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಎಲ್ಲ ಶಿಕ್ಷಣ ಸಂಸ್ಥೆಗಳು ತಂಬಾಕು ಮುಕ್ತ ವಲಯವನ್ನಾಗಿ ಮಾಡಬೇಕು ಎಂದರು.

ಸಿಂದಗಿ ತಾಲ್ಲೂಕಿನಲ್ಲಿ ಕೊಟ್ಪಾ ನಿಯಮಗಳು ಪರಿಣಾಮಕಾರಿಯಾಗಿ ಅನುಷ್ಠಾನ ಕೈಗೊಳ್ಳಬೇಕು. ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಜರುಗಿಸಬೇಕು ಹಾಗೂ ಪ್ರತ್ಯಕ್ಷ ಹಾಗೂ ಪರೋಕ್ಷ ಜಾಹಿರಾತು ಫಲಕಗಳನ್ನು ತೆರುವುಗೊಳಿಸಬೇಕು. ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳನ್ನು ತಂಬಾಕು ಮುಕ್ತ ಪ್ರದೇಶಗಳಾಗಿಸುವ ನಿಟ್ಟಿನಲ್ಲಿ ಕಾರ್ಯಕೈಗೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ಡಾ.ಮಲ್ಲನಗೌಡ ಬಿರಾದಾರ ಮಾತನಾಡಿ, ಮೇ 31 ರಂದು ವಿಶ್ವ ತಂಬಾಕು ರಹಿತ ದಿನವೆಂದು ಆಚರಿಸಲಾಗುತ್ತಿದೆ ಎಂದರು.

ಈ ವರ್ಷ ‘ಯುವ ಪೀಳಿಗೆಯನ್ನು ತಂಬಾಕು ಬಳಕೆಯಿಂದ ರಕ್ಷಣೆ ಮಾಡುವ’ ಧ್ಯೇಯ ವಾಕ್ಯದೊಂದಿಗೆ ತಂಬಾಕು ಉತ್ಪನ್ನಗಳ ಬಳಕೆಯಿಂದ ಉಂಟಾಗುವ ಸಾವು ನೋವುಗಳ  ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಆದ್ಯತೆ ನೀಡಲಾಗುತ್ತಿದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ ಅಗರವಾಲ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಮಹಾನಗರ ಪಾಲಿಕೆ ಆಯುಕ್ತ ಶ್ರೀಹರ್ಷಾ ಶೆಟ್ಟಿ, ಜಿಲ್ಲಾ ಆರೋಗ್ಯಾಧಿಕಾರಿ ಮಹೇಂದ್ರ ಕಾಪ್ಸೆ, ಡಾ.ಕಟ್ಟಿ, ಡಾ. ಸಂಪತ್‍ಕುಮಾರ ಗುಣಾರೆ, ಡಾ.ಕವಿತಾ ಉಪಸ್ಥಿತರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು