ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಲ್ಪಸಂಖ್ಯಾತರ ಅನುದಾನ ಕಡಿತಕ್ಕೆ ವಿರೋಧ

ಮುಸ್ಲಿಂ ಚಿಂತಕರ ಚಾವಡಿಯಿಂದ ಸರ್ಕಾರಕ್ಕೆ ಮನವಿ
Last Updated 10 ಡಿಸೆಂಬರ್ 2020, 13:32 IST
ಅಕ್ಷರ ಗಾತ್ರ

ವಿಜಯಪುರ: ರಾಜ್ಯದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅನುದಾನವನ್ನು ಕಡಿತಗೊಳಿಸಿರುವುದನ್ನು ವಿರೋಧಿಸಿ ನಗರದಲ್ಲಿ ಕಾಂಗ್ರೆಸ್ ಮುಖಂಡರಅಬ್ದುಲ್ ಹಮೀದ್ ಮುಶ್ರೀಫ್ ನೇತೃತ್ವದಲ್ಲಿ ಮುಸ್ಲಿಂ ಚಿಂತಕರ ಚಾವಡಿಯಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಔದ್ರಾಮ್ ಅವರ ಮೂಲಕ ಗುರುವಾರ ಮನವಿ ಸಲ್ಲಿಸಿದ ಮುಖಂಡರು, ಅಲ್ಪಸಂಖ್ಯಾತ ಸಮುದಾಯಗಳ ಅಭಿವೃದ್ಧಿ ಯೋಜನೆಗಳು ಯಾವುದೇ ಕಾರಣಕ್ಕೂ ಸ್ಥಗಿತಗೊಳ್ಳಬಾರದು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೂಲಕ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಬೌದ್ಧ, ಪಾರ್ಸಿ ಮತ್ತು ಜೈನ ಸಮುದಾಯಗಳ ಜನಪರ ಕಲ್ಯಾಣ ಯೋಜನೆಗಳಿಗೆ ನಿಗದಿಗೊಳಿಸಲಾದ ಅನುದಾನ ಕಡಿತಗೊಳಿಸಲಾಗಿದೆ ಎಂದು ದೂರಿದರು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಈ ಹಿಂದೆ ನಿಗದಿಗೊಳಿಸುತ್ತಾ ಬಂದಿರುವ ಅನುದಾನ ಕಡಿತಗೊಳಿಸಿದ್ದಲ್ಲದೇ ಹಲವು ಯೋಜನೆಗಳನ್ನು ರದ್ದು ಮಾಡಲಾಗಿದೆ ಎಂದು ಆರೋಪಿಸಿದರು.

2019-20ನೇ ಸಾಲಿನಲ್ಲಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸರ್ಕಾರ ಬಜೆಟ್‍ನಲ್ಲಿ ಘೋಷಿಸಿದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅನುದಾನವನ್ನು ₹1897 ಕೋಟಿಯಿಂದ ₹1571 ಕೋಟಿಗೆ ಕಡಿತಗೊಳಿಸಲಾಗಿದೆ. 2020-21ನೇ ಸಾಲಿನಲ್ಲಿ ರಾಜ್ಯ ಸರ್ಕಾರ ಮಂಡಿಸಿದ್ದ ಬಜೆಟ್‍ನಲ್ಲಿ ₹ 1177 ಕೋಟಿಗಳಷ್ಟಿದ್ದ ಅನುದಾನವನ್ನು ಮತ್ತೆ ಕಡಿತಗೊಳಿಸಿ ₹ 1055 ಕೋಟಿಗಳಿಗೆ ನಿಗದಿಗೊಳಿಸಿದೆ. ಇತ್ತೀಚಿಗೆ ಮತ್ತೆ ₹ 1055 ಕೋಟಿಗಳಷ್ಟಿದ್ದ ಅನುದಾನದಲ್ಲಿ ₹ 50 ಕೋಟಿ ಅನುದಾನ ಕಡಿತಗೊಳಿಸಿದೆ ಎಂದು ತಿಳಿಸಿದರು.

ಹಿಂದಿನ ಸರ್ಕಾರಗಳು ಜಾರಿಯಲ್ಲಿಟ್ಟಿದ್ದ ಕಾಲೊನಿ ಅಭಿವೃದ್ಧಿ ಯೋಜನೆ, ಶಾದಿಭಾಗ್ಯ ಯೋಜನೆಯನ್ನು ರದ್ದುಗೊಳಿಸಲಾಗಿದೆ. ವಿದೇಶದಲ್ಲಿ ಉನ್ನತ ವ್ಯಾಸಂಗದ ಯೋಜನೆ, ನಾಗರಿಕ ಪರೀಕ್ಷೆ ತರಬೇತಿ ಯೋಜನೆ, ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ, ಮೆರಿಟ್-ಕಂ ಮೀನ್ಸ್ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿಯಂತಹ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾದಂತಹ ಯೋಜನೆಗಳಿಗೆ ಅನುದಾನವನ್ನು ಸರ್ಕಾರ ಬಿಡುಗಡೆಗೊಳಿಸದೇ ಇರುವದು ವಿದ್ಯಾರ್ಥಿಗಳಿಗೆ ಸಾಕಷ್ಟು ಆರ್ಥಿಕ ತೊಂದರೆಯಾಗುತ್ತಿದೆ ಎಂದು ಹೇಳಿದರು.

ಕರ್ನಾಟಕ ರಾಜ್ಯ ಸರ್ಕಾರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಸಂಬಂಧಿಸಿದ ಯಾವುದೇ ಹೊಸ ಯೋಜನೆ ಜಾರಿಗೊಳಿಸದೇ ಇದ್ದರೂ ಈಗಾಗಲೇ ಜಾರಿಯಲ್ಲಿರುವ ಎಲ್ಲ ಯೋಜನೆಗಳನ್ನು ಮುಂದುವರಿಸಬೇಕು. ಈ ಯೋಜನೆಗಳನ್ನು ಮುಂದುವರಿಸಲು ಬೇಕಾಗುವ ಅನುದಾನವನ್ನು ಸಂಪೂರ್ಣವಾಗಿ ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿದರು.

ಸಮಾಜದ ಮುಖಂಡರಾದ ಮಹ್ಮದ್ ಇರ್ಫಾನ್ ಶೇಖ್, ಜಾಫರ್ ಕಲಾದಗಿ, ಅಮೀರ್ ಹಮ್ಜಾ, ಇಮ್ರಾನ್ ತಪಕೀರ್, ಅಜೀಜ್ ಮೊಕಾಶಿ, ಅಲ್ಲಾಭಕ್ಷ ಮುಲ್ಲಾ, ಹಾಜಿ ಪಿಂಜಾರ್, ಇಲಿಯಾಸ್ ಸುತಾರ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT