ವಿಜಯಪುರ: ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿರುವ ‘ಒಂದು ದೇಶ-ಒಂದು ಚುನಾವಣೆ’ ಪರಿಕಲ್ಪನೆಯನ್ನು ವಾಪಸ್ ಪಡೆದುಕೊಳ್ಳುವುದು ಸೇರಿದಂತೆ ವಿವಿಧ ಭೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಡಿ.ಜಿ.ಸಾಗರ ಬಣ) ಪ್ರತಿಭಟನೆ ನಡೆಸಿ ಹೆಚ್ಚುವರಿ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರಿಗೆ ಮನವಿ ಸಲ್ಲಿಸಿದರು.
ಸಮಿತಿ ಜಿಲ್ಲಾ ಸಂಚಾಲಕ ಸಿದ್ದು ರಾಯಣ್ಣವರ ಮಾತನಾಡಿ, ‘ಒಂದು ದೇಶ ಒಂದು ಚುನಾವಣೆ’ ಎಂಬುದು ಕೇಂದ್ರ ಸರ್ಕಾರದ ಅಜೆಂಡಾದ ಭಾಗವಾಗಿದೆ. ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿರುವ ಈ ಪ್ರಸ್ತಾಪ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ. ಇದನ್ನು ಅನುಷ್ಠಾನ ಮಾಡಲು ಸಾಧ್ಯವೇ ಇಲ್ಲ ಎಂದರು.
ಒಂದು ದೇಶ ಚುನಾವಣೆಯ ವ್ಯವಸ್ಥೆಯ ಸಂಪೂರ್ಣವಾಗಿ ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಲೋಕಸಭೆ ಇಲ್ಲವೇ ವಿಧಾನಸಭೆಯಲ್ಲಿ ಅಡಳಿತಾರೂಢ ಪಕ್ಷ ವಿಶ್ವಾಸ ಮತ ಗಳಿಸಲು ಸೋತರೆ ಎದುರಾಗುವ ಬಿಕ್ಕಟ್ಟಿಗೆ ಪರಿಹಾರವಿಲ್ಲ. ಇಂತಹ ಸಂದರ್ಭದಲ್ಲಿ ಮಧ್ಯಂತರ ಚುನಾವಣೆಯೊಂದೇ ಯೋಗ್ಯ ಪರಿಹಾರ ಎಂದರು.
ಇಡೀ ದೇಶದಲ್ಲಿ ಒಂದೇ ಬಾರಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳನ್ನು ನಡೆಸುವ ಶಕ್ತಿ ಸಾಮರ್ಥ್ಯ ನಮ್ಮ ಚುನಾವಣೆ ಆಯೋಗಕ್ಕೆ ಇಲ್ಲ. ನಮ್ಮ ಚುನಾವಣಾ ವ್ಯವಸ್ಥೆಯನ್ನು ದುಪ್ಪಟ್ಟು ಪ್ರಮಾಣದಲ್ಲಿ ವಿಸ್ತರಿಸಬೇಕಾಗುತ್ತದೆ. ಇವೆಲ್ಲವೂ ಅವಸರದಿಂದ ಮಾಡುವ ಕೆಲಸ ಅಲ್ಲ. ಸರ್ಕಾರ ಈ ಯೋಜನೆಯನ್ನು ಇಲ್ಲಿಯೇ ಕೈಬಿಡಬೇಕು ಎಂದು ಆಗ್ರಹಿಸಿದರು.