ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ವಿತೀಯ ಪಿಯು ಮಧ್ಯ ವಾರ್ಷಿಕ ಬೋರ್ಡ್‌ ಪರೀಕ್ಷೆಗೆ ವಿರೋಧ

ಸುತ್ತೋಲೆ ಹಿಂಪಡೆಯಲು ವಿಧಾನ ಪರಿಷತ್‌ ಬಿಜೆಪಿ ಸದಸ್ಯ ಅರುಣ ಶಹಾಪೂರ ಒತ್ತಾಯ
Last Updated 17 ನವೆಂಬರ್ 2021, 10:32 IST
ಅಕ್ಷರ ಗಾತ್ರ

ವಿಜಯಪುರ: ದ್ವಿತೀಯ ಪಿಯುಸಿ ಮಧ್ಯ ವಾರ್ಷಿಕ ಪರೀಕ್ಷೆಯನ್ನು ಬೋರ್ಡ್‌ ಪರೀಕ್ಷೆಯಾಗಿ ನಡೆಸುವುದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಸುತ್ತೋಲೆ ಹೊರಡಿಸಿರುವುದು ಅವೈಜ್ಞಾನಿಕವಾಗಿದೆ ಎಂದು ವಿಧಾನ ಪರಿಷತ್‌ ಬಿಜೆಪಿ ಸದಸ್ಯ ಅರುಣ ಶಹಾಪೂರ ವಿರೋಧ ವ್ಯಕ್ತಪಡಿಸಿದರು.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು, ಪಾಲಕರು, ಶಿಕ್ಷಣ ತಜ್ಞರು, ಪ್ರಾಂಶುಪಾಲರು, ಉಪನ್ಯಾಸಕರೊಂದಿಗೆ ಚರ್ಚಿಸದೇ ತರಾತರಿಯಲ್ಲಿ ಬೋರ್ಡ್‌ ಪರೀಕ್ಷೆ ನಡೆಲು ಹೊರಟಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ರಾಜ್ಯ ಸರ್ಕಾರದ ಅಧೀನದಲ್ಲಿದೆಯೋ ಅಥವಾ ಸ್ವಾಯತ್ತ ಸಂಸ್ಥೆಯೋ ಎಂದುಅವರು ಪ್ರಶ್ನಿಸಿದರು.

ಪರೀಕ್ಷಾ ವಿಧಾನ, ಮೌಲ್ಯಮಾಪನದ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲದೇ, ಅಗತ್ಯಪೂರ್ವ ತಯಾರಿ ಮಾಡಿಕೊಳ್ಳದೇ ಬೋರ್ಡ್‌ ಪರೀಕ್ಷೆ ನಡೆಸುವುದು ಸರಿಯಲ್ಲ. ಮುಖ್ಯಮಂತ್ರಿ, ಶಿಕ್ಷಣ ಸಚಿವರು ಈ ಬಗ್ಗೆ ತಕ್ಷಣ ಗಮನ ಹರಿಸಬೇಕು. ಎಲ್ಲರ ಅಭಿಪ್ರಾಯ ಪಡೆದ ಬಳಿಕ ಸೂಕ್ತ ತೀರ್ಮಾನ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಒಂದು ವೇಳೆ ಕೋವಿಡ್‌ ಮೂರನೇ ಅಲೆ ವ್ಯಾಪಿಸಿದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಸಲು ಸಾಧ್ಯವಾಗದೇ ಇದ್ದರೇ ಇದೀಗ ನಡೆಸುವ ಬೋರ್ಡ್‌ ಪರೀಕ್ಷೆಯ ಅಂಕಗಳ ಆಧಾರದ ಮೇಲೆ ವಿದ್ಯಾರ್ಥಿಗಳ ಫಲಿತಾಂಶ ನಿರ್ಧರಿಸಲಾಗುವುದು ಎಂಬ ಪದವಿ ಪೂರ್ವ ಶಿಕ್ಷಣ ಇಲಾಖೆಯ ಲೆಕ್ಕಾಚಾರವೇ ತಪ್ಪು ಎಂದು ಅವರು ವಿರೋಧ ವ್ಯಕ್ತಪಡಿಸಿದರು.

ಯಾವುದೇ ಮುನ್ಸೂಚನೆ ನೀಡದೇ ಏಕಾಏಕಿ ಬೋರ್ಡ್‌ ಪರೀಕ್ಷೆ ನಡೆಸಿದರೆ ಮಕ್ಕಳ ಭವಿಷ್ಯದ ಮೇಲೆ ಮಾರಕ ಪರಿಣಾಮ ಬೀರಲಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಕೋವಿಡ್‌ ಹಿನ್ನೆಲೆಯಲ್ಲಿ ಪದವಿ ಪೂರ್ವ ಕಾಲೇಜುಗಳು ರಾಜ್ಯದಾದ್ಯಂತ ಏಕಕಾಲಕ್ಕೆ ಪ್ರಾರಂಭವಾಗಿಲ್ಲ. ಕೆಲವು ಜಿಲ್ಲೆಗಳಲ್ಲಿ ಮೊದಲೇ ಆರಂಭವಾಗಿದ್ದರೇ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಮೈಸೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ತಡವಾಗಿ ಆರಂಭವಾಗಿವೆ. ಪಾಠ ಬೋಧನೆ ಏಕಪ್ರಕಾರವಾಗಿ ನಡೆದಿಲ್ಲ. ಹೀಗಿರುವಾಗ ಏಕ ಪ್ರಕಾರದ ಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎಂದರು.

ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕ ಹುದ್ದೆಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಅಕ್ಟೋಬರ್‌ನಲ್ಲಿ ಅನುಮತಿ ನೀಡಲಾಗಿದೆ. ನವೆಂಬರ್‌ನಿಂದ ಅತಿಥಿ ಉಪನ್ಯಾಸಕರು ಪಾಠ ಬೋಧನೆ ಆರಂಭಿಸಿದ್ದಾರೆ. ಏಕರೂಪ ಪ್ರಶ್ನೆ ಪತ್ರಿಕೆ ಮೂಲಕ ಜಿಲ್ಲಾ ಮಟ್ಟದಲ್ಲಿ ಪರೀಕ್ಷೆ ನಡೆಸುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಉನ್ನತ ಶಿಕ್ಷಣ ಇಲಾಖೆ ನಡುವೆ ಸಿಲುಕಿಹಾಕಿಕೊಂಡಿರುವಪದವಿ ಪೂರ್ವ ಶಿಕ್ಷಣ ಇಲಾಖೆಗೆ ನಿರ್ದೇಶಕರಾಗಲು ಐಎಎಸ್‌ ಅಧಿಕಾರಿಗಳು ಮುಂದೆ ಬರುತ್ತಿಲ್ಲ. ಪದವಿ ಪೂರ್ವ ಶಿಕ್ಷಣ ಇಲಾಖೆ ಶೈಕ್ಷಣಿಕ ವಿಭಾಗ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಇಲಾಖೆ ಸುಧಾರಣೆಗೆ ಸರ್ಕಾರ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.

ಪದವಿ ಪೂರ್ವ ಕಾಲೇಜು ನೌಕರರ ಸಂಘದ ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷ ಎಸ್‌.ಎಸ್‌.ಗೌರಿ, ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘದ ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷ ಪ್ರೊ.ಎಂ.ಬಿ.ಹೆಬ್ಬಿ, ಪ್ರಾಂಶುಪಾಲರಾದ ಎಸ್‌.ಸಿ.ಸಣ್ಣಳ್ಳಿ, ಟಿ.ಆರ್‌.ಕುಲಕರ್ಣಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT