ವಿಜಯಪುರ : ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಿರುವುದು ಸೇಡಿನ ಕ್ರಮ,
ಇದರ ವಿರುದ್ಧ ಕಾನೂನಾತ್ಮಕ ಹೋರಾಟ ಮಾಡುತ್ತೇವೆ, ನಾವು ಇದನ್ನು ಜನರ ಬಳಿ ತೆಗೆದುಕೊಂಡು ಹೋಗುತ್ತೇವೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಹೇಳಿದರು.
ಬಬಲೇಶ್ವರ ತಾಲ್ಲೂಕಿನ ದೇವರಗೆಣ್ಣೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐತಿಹಾಸಿಕ ಭಾರತ್ ಜೋಡೋ ಯಾತ್ರೆಯಿಂದ ರಾಹುಲ್ ಗಾಂಧಿ ಜನಪ್ರಿಯತೆ ಹೆಚ್ಚಾಗಿದೆ, ಈ ಯಾತ್ರೆಯಲ್ಲಿ ಜನರ ಭಾವನೆಗಳಿಗೆ ಸ್ಪಂದಿಸುವ ಕೆಲಸ ಮಾಡಿದ್ದರು. ಇದನ್ನು ಸಹಿಸಲಾಗದೆ ಬಿಜೆಪಿ ಕೀಳುಮಟ್ಟದ ಕ್ರಮಕ್ಕೆ ಇಳಿದಿದೆ ಎಂದು ಆರೋಪಿಸಿದರು.
ರಾಹುಲ್ ಗಾಂಧಿ ಅವರಿಗೆ ಸೂರತ್ ಕೋರ್ಟ್ 30 ದಿನ ಮೇಲ್ಮನವಿಗೆ ಸಮಯ ಕೊಟ್ಟಿತ್ತು. ನಿನ್ನೆ ಅಷ್ಟೇ ಕೋರ್ಟ್ ಆದೇಶ ಬಂದಿದೆ, ಇಂದು ತರಾತುರಿಯಲ್ಲಿ ಅನರ್ಹ ಮಾಡಿರುವುದು ಅವರ ಹತಾಶೆ ಭಾವನೆ ತೋರಿಸುತ್ತೆ ಎಂದರು.
ಬಿಜೆಪಿ ಅಧಿಕಾರಕ್ಕೆ ಬಂದಮೇಲೆ ವಿರೋಧ ಪಕ್ಷದವರನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ, ಸಿಬಿಐ, ಇಡಿ, ಇಟಿ ಮೂಲಕ ವಿರೋಧ ಪಕ್ಷದವರನ್ನು ಹೆದರಿಸುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ತನ್ನ ವೈಫಲ್ಯ ಮುಚ್ಚಿಕೊಳ್ಳಲು ಇಂತಹ ಕ್ರಮಕ್ಕೆ ಮುಂದಾಗಿದೆ ಎಂದು ಹರಿಹಾಯ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.