ಭಾನುವಾರ, ಏಪ್ರಿಲ್ 2, 2023
31 °C

ಬೆಲೆ ಏರಿಕೆ ಹಿಂದೆ ಬಿಜೆಪಿ ಕೈವಾಡವಿದೆ: ಕೆಪಿಸಿಸಿ ವಕ್ತಾರ ಎಸ್‌.ಎಂ.ಪಾಟೀಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಪಟ್ರೋಲ್‌, ಡೀಸೆಲ್‌, ಅಡುಗೆ ಎಣ್ಣೆ, ಅಡುಗೆ ಅನಿಲ(ಎಲ್‌ಪಿಜಿ ಸಿಲಿಂಡರ್‌), ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿಂದೆ ಬಿಜೆಪಿ ಕೈವಾಡವಿದೆ ಎಂದು ಕೆಪಿಸಿಸಿ ವಕ್ತಾರ ಎಸ್‌.ಎಂ.ಪಾಟೀಲ ಗಣಿಯಾರ ಆರೋಪಿಸಿದರು.

ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿಂದೆ ಇರುವ ವ್ಯಾಪಾರಿಗಳು, ಉದ್ಯಮಿಗಳಿಗೆ ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬೆಂಬಲವಾಗಿ ನಿಂತು, ಅವರಿಗೆ ಅನುಕೂಲ ಮಾಡಿಕೊಡುತ್ತಿದೆ ಎಂದು ಹೇಳಿದರು.

ಲಾಕ್‌ಡೌನ್‌, ಕೋವಿಡ್‌ ಪರಿಣಾಮ ಮೊದಲೇ ತತ್ತರಿಸಿ ಹೋಗಿರುವ ಬಡ, ಮಧ್ಯಮದವರ ಜೀವನ ಬೆಲೆ ಏರಿಕೆಯಿಂದ ದುಸ್ತರವಾಗಿದೆ ಎಂದರು. 

ರಾಜ್ಯ ಬಿಜೆಪಿ ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದೆ. ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಸ್ವತಃ ಮುಖ್ಯಮಂತ್ರಿ ಮೇಲೆ ಅವರದೇ ಪಕ್ಷದ ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಗಂಭೀರ ಆರೋಪ ಮಾಡಿದ್ದಾರೆ. ಸಚಿವ ಶ್ರೀರಾಮಲು ಆಪ್ತ ಕಾರ್ಯದರ್ಶಿ ಭ್ರಷ್ಟಾಚಾರದ ಆರೋಪದ ಮೇಲೆ ಬಂಧಿತರಾಗಿದ್ದಾರೆ. ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಭ್ರಷ್ಟಾಚಾರದಲ್ಲಿ ನಿರತವಾಗಿದ್ದಾರೆ ಎಂದು ನೇರವಾಗಿ ಆರೋಪ ಮಾಡಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಜಿಎಸ್‌ಟಿ ಪಾಲು ಬಂದಿಲ್ಲ. ಕೇಂದ್ರ ಸರ್ಕಾರದಿಂದ ಅನ್ಯಾಯವಾಗುತ್ತಿದ್ದರೂ ರಾಜ್ಯದ 26 ಜನ ಬಿಜೆಪಿ ಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುತ್ತಿಲ್ಲ ಎಂದು ಆಪಾದಿಸಿದರು.

ಕೋವಿಡ್‌ ಲಸಿಕಾ ಅಭಿಯಾನ ಕೇವಲ ಜಾಹೀರಾತಿಗೆ ಸೀಮಿತವಾಗಿದೆ. ರಾಜ್ಯ, ದೇಶದಲ್ಲಿ ಕೋವಿಡ್‌ ಲಸಿಕಾ ಅಭಿಯಾನ ಕುಂಟುಂತಾ ಸಾಗಿದೆ. ಲಸಿಕೆ ಕೊರತೆ ತೀವ್ರವಾಗಿದೆ. ಮೂರನೇ ಅಲೆಯ ಆತಂಕ ಇರುವುದರಿಂದ ಕೋವಿಡ್‌ ಲಸಿಕಾ ಅಭಿಯಾನವನ್ನು ಚುರುಕುಗೊಳಿಸಬೇಕು ಎಂದು ಆಗ್ರಹಿಸಿದರು. 

ವಿಜಯಪುರ ನಗರದಲ್ಲಿ ರಸ್ತೆಗಳು ಸಂಪೂರ್ಣ ಹದಗೆಟ್ಟಿ ಹೋಗಿದೆ. ಅಭಿವೃದ್ಧಿ ಕಾರ್ಯಗಳು ನಿಂತುಹೋಗಿವೆ. ಇಷ್ಟಾದರೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಇತ್ತ ಗಮನ ನೀಡುತ್ತಿಲ್ಲ. ಕೇವಲ ರಾಜಕೀಯ ಆರೋಪಗಳಿಗೆ ಸೀಮಿತವಾಗಿದ್ದಾರೆ ಎಂದರು.

ಕಾಂಗ್ರೆಸ್‌ ಸಮರ್ಥ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸುತ್ತಿದೆ. ಕೋವಿಡ್‌ ಸಂಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡಿದೆ. ಸರ್ಕಾರದ ಭ್ರಷ್ಟಾಚಾರ, ಬೆಲೆ ಏರಿಕೆ ನೀತಿ ಖಂಡಿಸಿ ಅನೇಕ ಹೋರಾಟ ನಡೆಸಿದೆ ಎಂದು ಸಮರ್ಥಿಸಿಕೊಂಡರು.

ಕಾಂಗ್ರೆಸ್‌ ಮುಖಂಡರಾದ ವೈಜನಾಥ ಕರ್ಪೂರಮಠ, ನಾಗರಾಜ ಲಂಬು, ವಸಂತ ಹೊನಮೋಡೆ ಇದ್ದರು.

****

ಬಿಜೆಪಿ, ಕಾಂಗ್ರೆಸ್‌ ಶಾಸಕರು ಜಿಲ್ಲೆಯಲ್ಲಿ ಹೊಂದಾಣಿಕೆ ರಾಜಕೀಯ ಮಾಡುತ್ತಿದ್ದಾರೆ. ಸರ್ಕಾರದ ಲೋಪದೋಷಗಳ ವಿರುದ್ಧ ಧ್ವನಿ ಎತ್ತುತ್ತಿಲ್ಲ ಎಂಬ ಆರೋಪ ಸುಳ್ಳು
–ಎಸ್‌.ಎಂ.ಪಾಟೀಲ ಗಣಿಯಾರ
ಕೆಪಿಸಿಸಿ ವಕ್ತಾರ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು