ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಂಧಿಚೌಕ್‌ ಅಂಡರ್‌ಪಾಸ್‌ ನಿರ್ಮಾಣಕ್ಕೆ ಆದ್ಯತೆ

ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್‌ ನಗರ ಪ್ರದಕ್ಷಿಣೆ
Last Updated 23 ಜೂನ್ 2020, 12:10 IST
ಅಕ್ಷರ ಗಾತ್ರ

ವಿಜಯಪುರ: ನಗರಾಭಿವೃದ್ಧಿ ಖಾತೆ ಸಚಿವ ಬೈರತಿ ಬಸವರಾಜ ಅವರು ಮಂಗಳವಾರ ಮುಂಜಾನೆ ನಗರದ ವಿವಿಧ ಬಡಾವಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಾಂಧಿಚೌಕ್‌ನಲ್ಲಿ ಸಂಚಾರ ದಟ್ಟಣೆ ಅಧಿಕವಾಗಿರುವುದರಿಂದ ‍ಪಾದಚಾರಿಗಳ ಸಂಚಾರಕ್ಕೆ ಅನುಕೂಲವಾಗುವಂತೆ ₹ 25 ಕೋಟಿ ಅನುದಾನದಲ್ಲಿ ಅಂಡರ್‌ ಪಾಸ್‌ ನಿರ್ಮಾಣಕ್ಕೆ ಕ್ರಮಕೈಗೊಳ್ಳಲಾಗುವುದು ಎಂದರು.

ನಗರದಲ್ಲಿರುವ ಆದಿಲ್‌ ಶಾಹಿ ಅರಸರ ಕಾಲದ 144 ಬಾವಿಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರಿದ್ದು, ಇದನ್ನು ಉದ್ಯಾನಗಳ ನಿರ್ವಹಣೆಗೆ ಬಳಸಿಕೊಳ್ಳಲು ಅನುಕೂಲವಾಗುವಂತೆ ಬಾವಿಗಳ ಆಧುನಿಕರಣ ಮಾಡಲು ಡಿಪಿಆರ್‌ ಮಾಡಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸುವಂತೆ ಸೂಚಿಸಿದರು.

ಎಂ.ಬಿ.ಪಾಟೀಲ ನಗರದಲ್ಲಿರುವ ಕಲ್ಲು ಖಣಿಯನ್ನು ಅಭಿವೃದ್ಧಿಗೊಳಿಸಿ ಪ್ರವಾಸಿ ತಾಣವನ್ನಾಗಿ ರೂಪಿಸಲು ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಹೇಳಿದರು.

ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಿರ್ಮಾಣವಾಗುತ್ತಿರುವ ಸಿಂಥೆಟಿಕ್ ಟ್ರ್ಯಾಕ್ ಕಾಮಗಾರಿಯನ್ನುಒಂದೂವರೆ ತಿಂಗಳೊಳಗೆ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.

ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಕನಕದಾಸ ಬಡಾವಣೆಯಲ್ಲಿ ನಿರ್ಮಿಸಲಾಗುತ್ತಿರುವ ಈಜುಗೊಳ 50 ಮೀಟರ್‌ ನಿರ್ಮಾಣವಾಗಬೇಕಿತ್ತು. ಆದರೆ, ಸದ್ಯ 25 ಮೀಟರ್‌ ಈಜುಗೊಳ ನಿರ್ಮಾಣವಾಗುತ್ತಿದೆ. ಹೀಗಾಗಿ ಬೇರೆಡೆಗೆ ಮತ್ತೊಂದು ಅತ್ಯಾಧುನಿಕ ಈಜುಗೊಳ ನಿರ್ಮಾಣಕ್ಕೆ ಪ್ರಸ್ತಾವ ಸಲ್ಲಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

₹10 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಸುಭಾಶ್ಚಂದ್ರ ಬೋಸ್‌ ಕ್ರೀಡಾಂಗಣಕ್ಕೆ ಮುಂದಿನ ತಿಂಗಳು ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದರು.

ವಿಜಯಪುರವನ್ನು ಸ್ಮಾರ್ಟ್‌ಸಿಟಿ ಯೋಜನೆ ವ್ಯಾಪ್ತಿಗೆ ಸೇರಿಸುವ ಸಂಬಂಧ ಶೀಘ್ರದಲ್ಲೇ ದೆಹಲಿಗೆ ತೆರಳಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಪ್ರಸ್ತಾವ ಸಲ್ಲಿಸಲಾಗುವುದು. ಒಂದು ವೇಳೆ ಸ್ಮಾರ್ಟ್‌ಸಿಟಿ ಯೋಜನೆಗೆ ವಿಜಯಪುರ ಸೇರ್ಪಡೆಯಾದರೆ ಸುಮಾರು ₹ 1 ಸಾವಿರ ಕೋಟಿ ಅನುದಾನ ಸಿಗಲಿದೆ. ಇದರಿಂದ ನಗರದ ಚಿತ್ರಣವನ್ನೇ ಬದಲಿಸಬಹುದಾಗಿದೆ ಎಂದು ಹೇಳಿದರು.

ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ಕೆಎಸ್‌ಆರ್‌ಟಿಸಿ ಚಾಲಕ, ನಿರ್ವಾಹಕರನ್ನು ಭೇಟಿ ಮಾಡಿ, ಯೋಗಕ್ಷೇಮ ವಿಚಾರಿಸಿದರು. ಕೊರೊನಾ ಹಿನ್ನೆಲೆಯಲ್ಲಿ ಬಸ್‌ಗಳನ್ನು ಪ್ರತಿನಿತ್ಯ ಸ್ಯಾನಿಟೈಸರ್‌ ಮಾಡುವಂತೆ ಹಾಗೂ ಮಾಸ್ಕ್‌ ಕಡ್ಡಾಯವಾಗಿ ತೊಡುವ ಮೂಲಕ ಎಚ್ಚರ ವಹಿಸಬೇಕು ಎಂದು ಹೇಳಿದರು.

ಆಕೃತಿ ಕಾಲೊನಿಯಲ್ಲಿ ಅಮೃತ್ ಯೋಜನೆಯಡಿ ನಿರ್ಮಾಣವಾಗಿರುವ ಉದ್ಯಾನ, ಆದಿಲ್‍ಶಾಹಿ ಕಾಲದ ಬಾವಿ, ಆಶ್ರಮದ ಹತ್ತಿರದ ಉದ್ಯಾನ, ಜೋರಾಪುರ ಪೇಟೆ ರಸ್ತೆ ವಿಸ್ತರಣೆ, ಗಾಂಧಿಚೌಕ್‍ನಲ್ಲಿ ಅಂಡರ್‌ ಪಾಸ್‌ ನಿರ್ಮಾಣ ಸ್ಥಳ ಮತ್ತು ಜಲನಗರದಲ್ಲಿನ ಬಿ.ಡಿ.ಎ ಉದ್ಯಾನಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ನಗರದಲ್ಲಿ ಅವಶ್ಯಕ ಅಭಿವೃದ್ಧಿ ಕಾಮಗಾರಿಗಳ ಕುರಿತು ಸಚಿವರ ಗಮನಕ್ಕೆ ತಂದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಔದ್ರಾಮ, ಮಹಾನಗರ ಪಾಲಿಕೆ ಆಯುಕ್ತ ಶ್ರೀಹರ್ಷಾ ಶೆಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT