ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಸಗಿ ಆಸ್ಪತ್ರೆ ಅರ್ಧದಷ್ಟು ಹಾಸಿಗೆ ಕೋವಿಡ್‌ ಚಿಕಿತ್ಸೆಗೆ: ಸುನೀಲ್‌ಕುಮಾರ್‌

Last Updated 2 ಜೂನ್ 2021, 16:16 IST
ಅಕ್ಷರ ಗಾತ್ರ

ವಿಜಯಪುರ: ಕೋವಿಡ್-19 ಚಿಕಿತ್ಸೆಗೆ ಹಂಚಿಕೆ ಮಾಡಲಾದ ಹಾಸಿಗೆಗಳ (ಬೆಡ್‌) ಪೈಕಿ ಶೇ 50ರಷ್ಟು ಹಾಸಿಗೆಗಳನ್ನು ಸರ್ಕಾರಿ ಕೋಟಾದಡಿ ಕೋವಿಡ್‌ ಪೀಡಿತರ ಚಿಕಿತ್ಸೆಗೆ ಕಾಯ್ದಿರಿಸುವಂತೆ ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್‌ ಅವರು ಖಾಸಗಿ ಆಸ್ಪತ್ರೆ ವೈದ್ಯರಿಗೆ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಬುಧವಾರ ಖಾಸಗಿ ಆಸ್ಪತ್ರೆ ಮುಖ್ಯಸ್ಥರು, ವೈದ್ಯಾಧಿಕಾರಿಗಳು, ಚಿಕ್ಕ ಮಕ್ಕಳ ತಜ್ಞರು, ವೈದ್ಯರು, ಐಎಂಎ ಅಧ್ಯಕ್ಷರೊಂದಿಗೆ ಕೋವಿಡ್ 3ನೇ ಅಲೆ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಡೆದಸಭೆಯಲ್ಲಿ ಅವರು ಮಾತನಾಡಿದರು.

ಕೋವಿಡ್ ಮೂರನೇ ಅಲೆಯ ಸಂದರ್ಭದಲ್ಲಿ ಕೋವಿಡ್ ಸೋಂಕಿತ ಮಕ್ಕಳಿಗಾಗಲಿ, ಸೋಂಕಿತರಿಗಾಗಲಿ ವೆಂಟಿಲೇಟರ್, ಆಕ್ಸಿಜನ್ ಮತ್ತು ಬೆಡ್‌ಗಳ ಕೊರತೆಯಾಗದಂತೆ ಯೋಜನೆ ರೂಪಿಸಿಕೊಳ್ಳುವಂತೆ ಅವರು ಸೂಚನೆ ನೀಡಿದರು.

ಕೋವಿಡ್ ಜೊತೆಗೆ ಕೋವಿಡ್‌ಯೇತರ ರೋಗಿಗಳಿಗೂ ಆದ್ಯತೆ ಮೇಲೆ ಚಿಕಿತ್ಸೆ ಒದಗಿಸಬೇಕು. ಈವರೆಗೆ ನೋಂದಾಣಿ ಮಾಡಿಕೊಳ್ಳದೆ ಬಾಕಿ ಉಳಿದಿರುವ ಖಾಸಗಿ ಆಸ್ಪತ್ರೆಗಳು ತಕ್ಷಣ ನೋಂದಾಣೀ ಮಾಡಿಸಿಕೊಳ್ಳುವಂತೆ ತಿಳಿಸಿದರು.

ಕೋವಿಡ್ ಕರ್ತವ್ಯ ಕಾರಣವಾಗಿಟ್ಟುಕೊಂಡು ಕೋವಿಡ್‌ಯೇತರ ರೋಗಿಗಳ ನಿರ್ಲಕ್ಷ್ಯವಾಗಬಾರದು. ಈವರೆಗೆ ಜಿಲ್ಲಾಡಳಿತದೊಂದಿಗೆ ಖಾಸಗಿ ಆಸ್ಪತ್ರೆಗಳ ವೈದ್ಯರ ಸಹಕಾರದಿಂದಾಗಿ ಕೋವಿಡ್ ಸಾವು ನಿಯಂತ್ರಣ, ಕೋವಿಡ್ ಸೋಂಕು ಪ್ರಮಾಣ ಕಡಿತವಾಗಿದೆ. ಆಕ್ಸಿಜನ್ ಮತ್ತು ರೆಮ್‌ಡಿಸಿವಿರ್‌ ಸಮರ್ಪಕ ನಿರ್ವಹಣೆಯಿಂದಾಗಿ ರಾಜ್ಯದಲ್ಲಿಯೇ ಜಿಲ್ಲೆ ಮುಂಚೂಣಿಯಲ್ಲಿ ಇದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ರೋಗಿಗಳನ್ನು ಆದ್ಯತೆ ಮೇಲೆ ಚಿಕಿತ್ಸೆ ಒದಗಿಸಬೇಕು. ರೋಗಿಗಳ ಗಂಭೀರತೆ ಸಂದರ್ಭದಲ್ಲಿ ಮಾತ್ರ ಇತರೆ ಆಸ್ಪತ್ರೆಗಳಿಗೆ ಕಳುಹಿಸಬೇಕು. ಸಂಶೋಧನಾತ್ಮಕ ರೀತಿಯಲ್ಲಿ ಇಂತಹ ರೋಗಿಗಳಿಗೆ ಚಿಕಿತ್ಸಾ ವಿಧಾನ ಒದಗಿಸಬೇಕು ಎಂದು ಅವರು ಸೂಚನೆ ನೀಡಿದರು.

ಸದ್ಯ ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಬ್ಲ್ಯಾಕ್ ಫಂಗಸ್‌ಗೆ ಚಿಕಿತ್ಸೆ ಒದಗಿಸಲಾಗುತ್ತಿದ್ದು, ಯಶೋಧ ಆಸ್ಪತ್ರೆಯ ಮೂಲಕವು ನುರಿತ ವೈದ್ಯರು ಮತ್ತು ಸೌಕರ್ಯಗಳೊಂದಿಗೆ ಚಿಕಿತ್ಸೆ ಒದಗಿಸಲು ಸಲಹೆ ನೀಡಿದರು.

ಮಾಜಿ ಶಾಸಕ ಸಾರ್ವಭೌಮ ಬಗಲಿ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯರು ಖಾಸಗಿ ನರ್ಸಿಂಗ್ ಹೋಮ್ ನಡೆಸುತ್ತಿರುವ ಬಗ್ಗೆ ಪರಿಶೀಲನಾ ವರದಿ ಸಲ್ಲಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯ್ತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಮಾತನಾಡಿ, ಈವರೆಗೆ ಸಾಂಘಿಕ ಪ್ರಯತ್ನ, ಸಮನ್ವಯತೆ ಖಾಸಗಿ ಆಸ್ಪತ್ರೆಗಳ ಸಹಕಾರದಿಂದ ಕೋವಿಡ್ ಸಂಕಷ್ಟದ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಿದ್ದು, ರಾಜ್ಯದಲ್ಲಿ ನಾವು ಮುಂಚೂಣಿಯಲ್ಲಿ ಇದ್ದೇವೆ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ್ ಕಳಸದ, ಉಪವಿಭಾಗಾಧಿಕಾರಿಗಳಾದ ರಾಹುಲ್ ಸಿಂಧೆ, ಬಲರಾಮ್ ಲಮಾಣಿ, ನಗರಾಭಿವೃದ್ಧಿ ಪ್ರಾಧಿಕಾರ ಆಯುಕ್ತ ವಿಜಯಕುಮಾರ್ ಅಜೂರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಹೇಂದ್ರ ಕಾಪಸೆ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT