ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ವಾರಂಟೈನ್ ಕೇಂದ್ರಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಿ: ಸಚಿವೆ ಶಶಿಕಲಾ ಜೊಲ್ಲೆ ಸೂಚನೆ

Last Updated 27 ಮೇ 2020, 15:25 IST
ಅಕ್ಷರ ಗಾತ್ರ

ವಿಜಯಪುರ: ಗ್ರಾಮಾಂತರ ಪ್ರದೇಶದಲ್ಲಿ ಮಾಡಲಾಗಿರುವ ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳಿಗೆ ಅಗತ್ಯ ಮೂಲಸೌಲಭ್ಯ ಒದಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಬುಧವಾರ ನಡೆದ ಕೋವಿಡ್-19 ಮುನ್ನೆಚ್ಚರಿಕಾ ಕ್ರಮ ಹಾಗೂ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ವಿವಿಧ ರಾಜ್ಯಗಳಿಂದ ಬಂದಿರುವ ವಲಸಿಗರಿಗೆ ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳಲ್ಲಿ ಯಾವುದೇ ಲೋಪಕ್ಕೆ ಅವಕಾಶ ನೀಡದೆ ವ್ಯವಸ್ಥಿತವಾಗಿ ನಿರ್ವಹಿಸಬೇಕು ಎಂದರು.

ಕ್ವಾರಂಟೈನ್ ಕೇಂದ್ರಗಳಲ್ಲಿ ಊಟೋಪಹಾರದ ವ್ಯವಸ್ಥೆ ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಅವಶ್ಯಕತೆ ಇರುವ ಕಡೆಗಳಲ್ಲಿ ಪಡಿತರ ಧಾನ್ಯಗಳನ್ನು ಸಮರ್ಪಕವಾಗಿ ಮತ್ತು ನ್ಯಾಯಬದ್ಧವಾಗಿ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಹೆಚ್ಚುವರಿ ನೀರು ಬಿಡುಗಡೆ ಹಾಗೂ ಆಲಿಕಲ್ಲು ಮಳೆಯಿಂದ ಹಾನಿಗೊಳಗಾದ ತೋಟಗಾರಿಕೆ ಮತ್ತು ಕೃಷಿ ಬೆಳೆಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸುವುದಾಗಿ ತಿಳಿಸಿದರು.

ಜಿಲ್ಲೆಯ ನದಿಪಾತ್ರದಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ನಗರ ಮತ್ತು ಪಟ್ಟಣ ವ್ಯಾಪ್ತಿಯಲ್ಲಿ ಜಾರಿಯಾಗಿರುವ 24X7 ಕುಡಿಯುವ ನೀರಿನ ಯೋಜನೆಯ ಸಮರ್ಪಕ ಅನುಷ್ಠಾನ ಮತ್ತು ನಿಗದಿತ ಸಮಯಕ್ಕೆ ನೀರು ಬಿಡಲು ಅಧಿಕಾರಿಗಳಿಗೆ ಸೂಚಿಸಿದರು.

ಇಂಡಿ, ಸಿಂದಗಿ ಸೇರಿದಂತೆ ವಿವಿಧ ಭಾಗಗಳಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಬೆಳೆಗಳ ಬಗ್ಗೆ ರೈತರಿಗೆ ಪರಿಹಾರ ಒದಗಿಸುವ ಬಗ್ಗೆ ಸಮೀಕ್ಷೆ ನಡೆಸಿ ತಕ್ಷಣ ವರದಿ ಸಲ್ಲಿಸುವಂತೆ ತಿಳಿಸಿದರು.

ಜಿಲ್ಲಾ ಪಂಚಾಯ್ತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋವಿಂದರೆಡ್ಡಿ, ಸದ್ಯ ಜಿಲ್ಲೆಯಲ್ಲಿ ಕೇವಲ 11 ಗ್ರಾಮಗಳಿಗೆ 35 ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಕಳೆದ ಬಾರಿ ಇದೇ ಅವಧಿಯಲ್ಲಿ 122 ಗ್ರಾಮಗಳಿಗೆ 2 ಸಾವಿರ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಲಾಗಿತ್ತು ಎಂದರು.

ಸದ್ಯ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮತ್ತು ಏತ ನೀರಾವರಿ ಯೋಜನೆಗಳ ಮೂಲಕ 16 ಕೆರೆಗಳನ್ನು ತುಂಬಿರುವುದರಿಂದ 296 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ನಿಂತಿದ್ದು, ಜೂನ್ 15 ರವರೆಗೆ ನೀರಿನ ಯಾವುದೇ ಕೊರತೆಯಿಲ್ಲ ಎಂದು ಹೇಳಿದರು.

ಶಾಸಕರಾದ ಯಶವಂತರಾಯಗೌಡ ಪಾಟೀಲ, ಎಂ.ಸಿ ಮನಗೂಳಿ ಅವರು ಇಂಡಿ ಮತ್ತು ಸಿಂದಗಿ ಭಾಗದಲ್ಲಿನ ಸಮಸ್ಯೆಗಳ ಬಗ್ಗೆ ಸಚಿವರ ಗಮನಕ್ಕೆ ತಂದರು.

ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಜಿ,ಪಂ ಸಿಇಒ ಗೋವಿಂದ ರೆಡ್ಡಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT