ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಪರೀಕ್ಷೆಗೆ ಶೀಘ್ರ ಆರ್‌ಟಿಪಿಸಿಆರ್ ಲ್ಯಾಬ್

ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಭರವಸೆ
Last Updated 3 ಜುಲೈ 2020, 14:19 IST
ಅಕ್ಷರ ಗಾತ್ರ

ವಿಜಯಪುರ: ಕೋವಿಡ್-19 ಸಾಂಕ್ರಾಮಿಕ ರೋಗ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಈಗಾಗಲೆ ಇರುವ ಗಂಟಲುದ್ರವ ಮಾದರಿ ಪರೀಕ್ಷಾ ಲ್ಯಾಬ್ ಸಾಮರ್ಥ್ಯ ಹೆಚ್ಚಿಸುವ ಹಿನ್ನೆಲೆಯಲ್ಲಿ ಆರ್.ಟಿ.ಪಿ.ಸಿ.ಆರ್ ಲ್ಯಾಬ್ ಶೀಘ್ರದಲ್ಲಿಯೇ ಕಾರ್ಯಾರಂಭಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ನಗರದಲ್ಲಿ ಕೋವಿಡ್-19 ನಿಯಂತ್ರಣ ಹಾಗೂ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರತಿದಿನ ರೋಗಿಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಪ್ರತಿ ದಿನ 25 ರಿಂದ 30ರಷ್ಟು ಜನರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆ ಮಾಡುವ ಲ್ಯಾಬ್ ಇದ್ದು, ಇದರ ಜೊತೆಗೆ ಆರ್.ಟಿ.ಪಿ.ಸಿ.ಆರ್ ಲ್ಯಾಬ್ ಆರಂಭಿಸಲಾಗುವುದು. ಇದರಿಂದ ಪ್ರತಿದಿನ 250 ರಿಂದ 300 ಗಂಟಲು ದ್ರವ ಮಾದರಿಯನ್ನು ಪರೀಕ್ಷಿಸಬಹುದಾಗಿದೆ ಎಂದರು.

ಕೋವಿಡ್‌ ಪರೀಕ್ಷೆ ಸಂಬಂಧ ಬೆಂಗಳೂರು, ಕಲಬುರ್ಗಿ ಜಿಲ್ಲೆಗಳ ಮೇಲೆ ಅವಲಂಬನೆಯಾಗುವ ಬದಲಿಗೆ ನಮ್ಮ ಜಿಲ್ಲೆಯಲ್ಲಿಯೇ ಪರೀಕ್ಷಿಸಿಕೊಳ್ಳಬಹುದಾಗಿದ್ದು, ತುರ್ತು ಸಂದರ್ಭದಲ್ಲಿ ಬಹಳಷ್ಟು ಸಹಕಾರಿಯಾಗಲಿದೆ ಎಂದು ಹೇಳಿದರು.

ಕೋವಿಡ್-19 ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ಈಗಾಗಲೇ 10 ಖಾಸಗಿ ಆಸ್ಪತ್ರೆಗಳು ಕೈಜೋಡಿಸಿದ್ದು, ಪಾಸಿಟಿವ್ ರೋಗಿಗಳಿಗೆ ಚಿಕಿತ್ಸೆ ನೀಡಲು ಮುಂದಾಗಿವೆ. ಅದರಂತೆ ಇನ್ನೂ ಹೆಚ್ಚಿನ ಆಸ್ಪತ್ರೆಗಳ ಮೂಲಕ ಚಿಕಿತ್ಸೆ ನೀಡುವ ಕುರಿತಂತೆ ಸಹಕಾರಿಯಾಗಲು ಅಲ್ಲಿನ ಚಿಕಿತ್ಸಾ ವ್ಯವಸ್ಥೆಗಳ ಪರಿಶೀಲನೆಗೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಸೂಚಿಸಲಾಗಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಕಂಟೈನ್ಮೆಂಟ್ ವಲಯಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಪಾಸಿಟಿವ್ ಪ್ರಕರಣ ದೃಢ ಪಟ್ಟ ವಲಯಗಳಲ್ಲಿ ತೀವ್ರ ನಿಗಾ ಇಟ್ಟು ಪಾಥಮಿಕ ಹಾಗೂ ದ್ವಿತೀಯ ಸಂಪರ್ಕ ಹೊಂದಿರುವ ವ್ಯಕ್ತಿಗಳ ಬಗ್ಗೆ ನಿಗಾ ಇಡಬೇಕು ಎಂದರು.

ಕೋವಿಡ್‌ ಪಾಸಿಟಿವ್ ರೋಗಿಗಳು ಹೆಚ್ಚಿನ ಪ್ರಮಾಣದಲ್ಲಿ ಗುಣಮುಖವಾಗುತ್ತಿರುವುದಕ್ಕೆ ಮತ್ತು ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆಯಿಂದ ಅತ್ಯುತ್ತಮ ಕಾರ್ಯ ನಿರ್ವಹಣೆ ಬಗ್ಗೆ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಟಾಸ್ಕಪೋರ್ಸ್‌ ಸಮಿತಿಗಳು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವುದಕ್ಕೆ ಸಚಿವರು ಪ್ರಶಂಸೆ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಮುಂಗಾರು ಮಳೆಯಾಗಿರುವುದರಿಂದ ಬಿತ್ತನೆ ಕಾರ್ಯ ಪ್ರಾರಂಭವಾಗಿದೆ. ಈ ನಿಟ್ಟಿನಲ್ಲಿ ರೈತರಿಗೆ ಬಿತ್ತನೆ ಬೀಜಗಳ ಖರೀದಿಯಲ್ಲಿ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಇನ್ನೂ ಕೆಲವು ಪ್ರದೇಶಗಳಲ್ಲಿ ಮಳೆ ಪ್ರಮಾಣ ಕಡಿಮೆ ಇದ್ದು, ಇನ್ನೂ ಬಿತ್ತನೆ ಕಾರ್ಯ ಪ್ರಾರಂಭಿಸದೇ ಇರುವುದರಿಂದ ಮುಂಬರುವ ದಿನಗಳಲ್ಲಿ ಬಿತ್ತನೆ ಬೀಜಗಳ ಖರೀದಿಯಲ್ಲಿ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ತೊಗರಿ, ಶೇಂಗಾ ಹಾಗೂ ಸಜ್ಜೆ ಬೆಳೆ ಹೆಚ್ಚಿನ ರೈತರು ಅವಲಂಬನೆಯಾಗಿರುವುದರಿಂದ ಅವುಗಳ ಕೊರತೆ ನೀಗಿಸಬೇಕು ಎಂದರು.

ಜಿಲ್ಲೆಯಲ್ಲಿ ನಿಂಬೆ ಬೆಳಗಾರರು ಹೆಚ್ಚಿನ ಪ್ರಮಾಣದಲ್ಲಿದ್ದು, ನಿಂಬೆ ಬೆಳೆಗಾರರಿಗೆ ಸರಿಯಾದ ದರ ಸಿಗುತ್ತಿಲ್ಲ. ಲಿಂಬೆ ಬೆಳೆಗಾರರಿಗೆ ಸಹಾಯವಾಗುವ ನಿಟ್ಟಿನಲ್ಲಿ ಸರ್ಕಾರ ಹಾಗೂ ಸಂಬಂಧಪಟ್ಟ ಸಚಿವರ ಗಮನಕ್ಕೆ ತರಲಾಗುವುದು ಎಂದು ಹೇಳಿದರು.

ಕೋವಿಡ್-19 ಸಂಕಷ್ಠದ ಪರಿಸ್ಥಿತಿಯಲ್ಲಿ ತರಕಾರಿ ಹಾಗೂ ಹೂ ಬೆಳೆಗಾಗರಿಗೆ ಸರ್ಕಾರದಿಂದ ಸಹಾಯಧನ ನೀಡಲಾಗುತ್ತಿದ್ದು, ಈ ಸಹಾಯಧನವು ಜಿಲ್ಲೆಯ ಎಲ್ಲ ರೈತರಿಗೆ ತಲುಪುವಲ್ಲಿ ಕಾರ್ಯ ನಿರ್ವಹಿಸಬೇಕು. ಹೂ ಬೆಳೆಗಾರರು ಹಾಗೂ ತರಕಾರಿ ಬೆಳೆಗಾರರು ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ ಯಾವುದೇ ಲೋಪದೋಷ ಆಗಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಶಾಸಕರಾದ ಎಂ.ಸಿ. ಮನಗೂಳಿ, ದೇವಾನಂದ ಚವ್ಹಾಣ, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್‌ ಅಗರವಾಲ್‌, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಮಹಾನಗರ ಪಾಲಿಕೆ ಆಯುಕ್ತ ಶ್ರೀಹರ್ಷಾ ಶೆಟ್ಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಮಹೇಂದ್ರ ಕಾಪ್ಸೆ, ಕೃಷಿ ಜಂಟಿ ನಿರ್ದೇಶಕ ಶಿವಕುಮಾರ, ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಸಂತೋಷ ಇನಾಮದಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT