ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣರಾಜ್ಯೋತ್ಸವ: ವಿಜಯಪುರದಲ್ಲಿ ಸಚಿವ ಉಮೇಶ ಕತ್ತಿ ಧ್ವಜಾರೋಹಣ

Last Updated 26 ಜನವರಿ 2022, 5:10 IST
ಅಕ್ಷರ ಗಾತ್ರ

ವಿಜಯಪುರ: ಇಲ್ಲಿನ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಬುಧವಾರ ಆಯೋಜಿಸಲಾಗಿದ್ದ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಧ್ವಜಾರೋಹಣ ನೆರವೇರಿಸಿದರು.

ಪಥ ಸಂಚಲನ ವೀಕ್ಷಣೆ ಮಾಡಿ, ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಮತ್ತು ಸರ್ವರ ವಿಕಾಸದ ಕನಸನ್ನು ಕಂಡ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಾನವೀಯ ಅಂತಃಕರಣದಿಂದ ಒಡಮೂಡಿ ಬಂದ ನಮ್ಮ ದೇಶವು ಇಂದು ವಿಶ್ವದಲ್ಲೇ ಅತ್ಯಂತ ಬಲಿಷ್ಠ ಮತ್ತು ಪ್ರಭಾವಶಾಲಿ ಗಣತಂತ್ರ ರಾಷ್ಟ್ರವೆಂದು ಪರಿಗಣಿತವಾಗಿದೆ ಎಂದರು.
ಸಂವಿಧಾನಾತ್ಮಕ ಮಾರ್ಗವೊಂದೇ ಸಾಮಾಜಿಕ ಅಸಮಾನತೆಯನ್ನು ತೊಲಗಿಸುವ ಸಾಧನವಾಗಿದ್ದು, ವ್ಯಕ್ತಿಗತ ಆತ್ಮಗೌರವಕ್ಕೆ ಪ್ರಾಮುಖ್ಯತೆ ನೀಡಲಾಗಿದೆ ಎಂದರು.

ಗಣತಂತ್ರ ವ್ಯವಸ್ಥೆಯ ಚೌಕಟ್ಟಿನಲ್ಲಿ, ಜಾತ್ಯತೀತ ಮೌಲ್ಯಗಳ ಪರಧಿಯಲ್ಲಿ ಮತ್ತು ಭ್ರಾತೃತ್ವದ ಬೆಸುಗೆಯಲ್ಲಿ ಸತ್ಯ,ನಿಷ್ಠೆ, ಪ್ರಾಮಾಣಿಕತೆಯಿಂದ ರಾಷ್ಟ್ರೀಯ ಭಾವೈಕ್ಯತೆಯನ್ನು ಸಾಕಾರಗೊಳಿಸಲು ಮತ್ತಷ್ಟು ಸಾಂಘಿಕವಾಗಿ ಶ್ರಮಿಸೋಣ. ತನ್ಮೂಲಕ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಆದರ್ಶಗಳನ್ನು ಎತ್ತಿ ಹಿಡಿಯೋಣ ಎಂದರು.

ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆಯನ್ನು ಬೋಧಿಸಲಾಯಿತು. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರನ್ನು ಸಚಿವರು ಸನ್ಮಾನಿಸಿದರು.

ಶಾಸಕರಾದ ಎಂ.ಬಿ.ಪಾಟೀಲ,ಬಸನಗೌಡ ಪಾಟೀಲ ಯತ್ನಾಳ, ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀ ಹರಿ ಗೊಳಸಂಗಿ, ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT