ಮಂಗಳವಾರ, ಡಿಸೆಂಬರ್ 1, 2020
21 °C
ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್‌ ಅಧಿಕಾರಿಗಳಿಗೆ ಸೂಚನೆ

ಶಾಲಾ ವ್ಯಾಪ್ತಿ; ತಂಬಾಕು ಉತ್ಪನ್ನ ಮಾರಾಟಕ್ಕೆ ಕಡಿವಾಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಜಿಲ್ಲೆಯ ಪ್ರತಿ ಶಾಲಾ ವ್ಯಾಪ್ತಿಯಲ್ಲಿ (ನೂರು ಅಡಿ) ತಂಬಾಕು ಉತ್ಪನ್ನ ಮಾರಾಟ ನಿಷೇಧವಿದ್ದು, ಇಂತಹ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡುವುದು ಕಂಡುಬಂದರೆ ದೂರು ನೀಡುವಂತೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಮಟ್ಟದ ತ್ರೈಮಾಸಿಕ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಕ್ರಮಕೈಗೊಳ್ಳಬೇಕು. ತಂಬಾಕು ಉತ್ಪನ್ನ ಸೇವನೆಯಿಂದ ಆಗುವ ಹಾನಿಯ ಬಗ್ಗೆ ಸಾರ್ವಜನಿಕರಲ್ಲಿ ಮನವರಿಕೆ ಮಾಡುವ ಜೊತೆಗೆ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲೆಯ ಮಹಾನಗರ ಪಾಲಿಕೆ, ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಹಾಗೂ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ನಿಯಂತ್ರಣದ ಅವಶ್ಯಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.

ಜಿಲ್ಲೆಯ ಪ್ರತಿ ಶಾಲಾ ಕಾಲೇಜು, ಆಸ್ಪತ್ರೆ ಮತ್ತು ನಗರ ಸ್ಥಳೀಯ ವ್ಯಾಪ್ತಿಯಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಈ ಕಾನೂನಿನ ರೀತ್ಯ ಕ್ರಮಗಳನ್ನು ಕೈಗೊಳ್ಳಬೇಕು. ತಂಬಾಕು ಉತ್ಪನ್ನಗಳ ನಿಷೇಧ, ಜಪ್ತಿ ಮತ್ತು ಮಾರಾಟದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.

ಸಾರ್ವಜನಿಕ ಪ್ರದೇಶದಲ್ಲಿ ಧೂಮಪಾನ ನಿಷೇಧವಿದ್ದು, ಈ ನಿಯಮ ಪಾಲಿಸದ ವ್ಯಕ್ತಿಗೆ ₹200 ದಂಡ ವಿಧಿಸಲಾಗುವುದು ಎಂದರು.

ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಜಾಹೀರಾತುಗಳ ನಿಷೇಧ ನಿಯಮದ ಮೊದಲ ಉಲ್ಲಂಘನೆಗೆ 2 ವರ್ಷ ಜೈಲು ಶಿಕ್ಷೆ ಹಾಗೂ ₹ 1ಸಾವಿರ ದಂಡ ವಿಧಿಸಲಾಗುವುದು, ಎರಡನೆ ಉಲ್ಲಂಘನೆಗೆ 5 ವರ್ಷ ಜೈಲು ಶಿಕ್ಷೆ ಹಾಗೂ ₹ 5ಸಾವಿರ ದಂಡ, ಸೆಕ್ಷನ್ 6 ರನ್ವಯ 18 ವರ್ಷದೊಳಗಿನ ಮಕ್ಕಳಿಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಹಾಗೂ ಶಾಲಾ ಕಾಲೇಜುಗಳ 100 ಅಡಿಗಳ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಿದರೆ ₹ 200ರವರೆಗೆ ದಂಡ ವಿಧಿಸಲಾಗುವುದು. ಎಂದು ಎಚ್ಚರಿಕೆ ನೀಡಿದರು.

ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಮೇಲೆ ನಿರ್ದಿಷ್ಟ ಆರೋಗ್ಯದ ಎಚ್ಚರಿಕೆಗಳ ಸಂದೇಶಗಳಿಲ್ಲದೆ ಮಾರುವುದರ ನಿಷೇಧವಿದ್ದು, ಇದರನ್ವಯ ಉತ್ಪಾದಕರಿಗೆ ಮೊದಲ ಉಲ್ಲಂಘನೆಗೆ ಎರಡು ವರ್ಷ ಜೈಲು ಶಿಕ್ಷೆ ಹಾಗೂ ₹ 5000 ದಂಡ ವಿಧಿಸಲಾಗುವುದು. ಎರಡನೇ ಉಲ್ಲಂಘನೆಗೆ 5 ವರ್ಷ ಜೈಲು ಶಿಕ್ಷೆ ₹ 10 ಸಾವಿರ ದಂಡ ವಿಧಿಸಲಾಗುವುದು ಎಂದರು.

ಮಾರಾಟ, ಚಿಲ್ಲರೆ ವ್ಯಾಪಾರಕ್ಕಾಗಿ ಮೊದಲ ಉಲ್ಲಂಘನೆಗೆ 2 ವರ್ಷ ಜೈಲು ಶಿಕ್ಷೆ ₹ 1ಸಾವಿರ ದಂಡ ಹಾಗೂ ಎರಡನೇ ಉಲ್ಲಂಘನೆಗಾಗಿ 5 ವರ್ಷ ಜೈಲು ಶಿಕ್ಷೆ ಹಾಗೂ ₹ 3 ಸಾವಿರ ದಂಡ ವಿಧಿಸಲಾಗುವುದು ಎಂದು ಅವರು ತಿಳಿಸಿದರು.

ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಸೂಚನೆ: ಕೋವಿಡ್ ನಿಯಂತ್ರಣ ಕಾರ್ಯಕ್ರಮಗಳ ಜೊತೆಗೆ ಡೆಂಗಿ ಚಿಕುನ್ ಗುನ್ಯ, ಡಿಪ್ತೀರಿಯಾ ಸೇರಿದಂತೆ ಸಾಂಕ್ರಾಮಿಕ ರೋಗ ನಿಯಂತ್ರಣ ಕಾರ್ಯಕ್ರಮಗಳನ್ನು ಸಹ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಹಾನಗರ ಪಾಲಿಕೆ ಆಯುಕ್ತ ಶ್ರೀಹರ್ಷ ಶೆಟ್ಟಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಹೇಂದ್ರ ಕಾಪಸೆ, ತಂಬಾಕು ನಿಷೇಧ ಘಟಕದ ಅಧಿಕಾರಿ ಎಂ.ಬಿ.ಬಿರಾದಾರ ಸಭೆಯಲ್ಲಿ ಉಪಸ್ಥಿತರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.