ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳ ಚಿಕಿತ್ಸೆಗೆ ಪ್ರತ್ಯೇಕ ಕೋವಿಡ್‌ ಆರೈಕೆ ಕೇಂದ್ರ

ಕೋವಿಡ್‌ ಮೂರನೇ ಅಲೆ: ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಸೂಚನೆ
Last Updated 9 ಜೂನ್ 2021, 13:07 IST
ಅಕ್ಷರ ಗಾತ್ರ

ವಿಜಯಪುರ: ಕೋವಿಡ್ ಮೂರನೇ ಅಲೆ ಸಂದರ್ಭದಲ್ಲಿ ಮಕ್ಕಳಿಗೆ ಸೂಕ್ತ ಚಿಕಿತ್ಸೆ ಒದಗಿಸಲು ಪ್ರತ್ಯೇಕ ಆರೈಕೆ ಕೇಂದ್ರಗಳನ್ನು ಸ್ಥಾಪಿಸಲು ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಕೋವಿಡ್–19 ರೋಗ ನಿಯಂತ್ರಣ ಕ್ರಮಗಳ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲಾಸ್ಪತ್ರೆ, ಆಯಾ ತಾಲ್ಲೂಕು ಆಸ್ಪತ್ರೆ ಹಾಗೂ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಮಕ್ಕಳ ಚಿಕಿತ್ಸೆಗಾಗಿ ಬೆಡ್‌, ಆಕ್ಸಿಜನ್, ವೆಂಟಿಲೇಟರ್,ಎನ್ಐಸಿಯು ಸೇರಿದಂತೆ ಸಕಲ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಕೋವಿಡ್‌ನಿಂದ ತಮ್ಮ ತಂದೆ, ತಾಯಿಯನ್ನು ಕಳೆದುಕೊಂಡು ಮೂರು ಮಕ್ಕಳು ಅನಾಥವಾಗಿರುವ ಬಗ್ಗೆ ಗಮನಕ್ಕೆ ಬಂದಿದೆ. ಅಂತಹ ಮಕ್ಕಳ ಪೋಷಣೆ, ಭವಿಷ್ಯಕ್ಕಾಗಿ ಮುಖ್ಯಮಂತ್ರಿಗಳು ಬಾಲ ಸೇವಾ ಯೋಜನೆಯಡಿ ಸೌಲಭ್ಯ ಕಲ್ಪಿಸಬೇಕು ಎಂದು ಸೂಚಿಸಿದರು.

ತಂದೆ ಮತ್ತು ತಾಯಿ ಇವರಿಬ್ಬರಲ್ಲಿ ಒಬ್ಬರನ್ನು ಕಳೆದುಕೊಂಡ ಮಕ್ಕಳ ಸಂಖ್ಯೆ ಜಿಲ್ಲೆಯಲ್ಲಿ 289 ಇದ್ದಾರೆ. ಅನಾಥರಾಗುವ ಇಂಥ ಮಕ್ಕಳ ಯಾರಾದರೂ ದಾನಿಗಳು, ಸಂಘ-ಸಂಸ್ಥೆಗಳು, ಶೈಕ್ಷಣಿಕ ಸಂಸ್ಥೆಗಳು ಮುಂದೆ ಬಂದು ಅವರ ಶಿಕ್ಷಣ ಮತ್ತು ಉದ್ಯೋಗಕ್ಕೆ ಅವಕಾಶ ಕಲ್ಪಿಸಿ, ಭವಿಷ್ಯ ರೂಪಿಸಲು ಮುಂದೆ ಬಂದಲ್ಲಿ ದತ್ತು ನಿಯಮ ಪ್ರಕಾರ ಅವರಿಗೆ ಸರ್ಕಾರದಿಂದ ಸಹಕಾರ ಕಲ್ಪಿಸಲಾಗುವುದು ಎಂದು ಹೇಳಿದರು.

ಶಾಸಕ ಯಶವಂತರಾಯಗೌಡ ಪಾಟೀಲ, ಕೋವಿಡ್ ಮೂರನೇ ಅಲೆ ಎದುರಿಸಲು ಈಗಿನಿಂದಲೇ ಯೋಜನೆ ರೂಪಿಸಬೇಕು. ಡೆತ್ ಆಡಿಟ್‌ ಸರಿಯಾಗಿ ನಿರ್ವಹಿಸಬೇಕು. ಮುಂದಿನ ದಿನಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಿಸಲು ಸಿದ್ಧತೆ ಮಾಡಿಕೊಳ್ಳಲು ಸಲಹೆ ನೀಡಿದರು.

ಸಂಸದ ರಮೇಶ ಜಿಗಜಿಣಗಿ, ಶಾಸಕರಾದ ಸೋಮನಗೌಡ ಪಾಟೀಲ ಸಾಸನೂರ, ದೇವಾನಂದ ಚವ್ಹಾಣ, ಸಾವಯವ ಪ್ರಮಾಣನ ಮತ್ತು ಬೀಜ ನಿಗಮ ಅಧ್ಯಕ್ಷ ವಿಜುಗೌಡ ಪಾಟೀಲ, ವಿಧಾನಪರಿಷತ್ ಸದಸ್ಯ ಅರುಣ ಶಹಾಪುರ, ಹನುಮಂತ ನಿರಾಣಿ, ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪುರ, ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್‌, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್ ಉಪಸ್ಥಿತರಿದ್ದರು.

ಅಭಿನಂದನೆ:

ನಿರಾಣಿ ಸಂಸ್ಥೆಯಿಂದ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯ್ತಿ ಮತ್ತು ನಗರದ 35 ವಾರ್ಡ್‌ಗಳ ವ್ಯಾಪ್ತಿಯಲ್ಲಿ ಬಳಸಲು ಕೊಡ ಮಾಡಿದ ಸ್ಯಾನಿಟೈಸರ್ ಅನ್ನು ವಿಜಯಪುರ ಜಿಲ್ಲಾಡಳಿತಕ್ಕೆ ಪೂರೈಸಿದ್ದಕ್ಕಾಗಿ ಸಚಿವೆ ಶಶಿಕಲಾ ಜೊಲ್ಲೆ ಅಭಿನಂದನೆ ಸಲ್ಲಿಸಿದರು.

***

ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ; ಕಾಮಗಾರಿ ಪರಿಶೀಲನೆ

ವಿಜಯಪುರ: ನಗರದ ಸರ್ಕಾರಿ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯಾಗಿ ರೂಪಿಸಲು ಅನುಕೂಲವಾಗುವಂತೆ ಮುಂದಿನ 15 ತಿಂಗಳಲ್ಲಿ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳಲಿವೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ನಿರ್ಮಾಣ ಹಂತದಲ್ಲಿರುವ ಸರ್ಕಾರಿ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಕಾಮಗಾರಿ ಪರಿಶೀಲಿಸಿದ ನಂತರ ಅವರು ಮಾತನಾಡಿದರು.

ತಾಂತ್ರಿಕ ಕಾರಣಗಳಿಂದಾಗಿ ಈ ಆಸ್ಪತ್ರೆ ಕಾಮಗಾರಿ ನೆನೆಗುದಿಗೆ ಬಿದ್ದಿತ್ತು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ, ಆರೋಗ್ಯ ಸಚಿವರನ್ನು ಭೇಟಿ ಮಾಡಿ ಗಮನಕ್ಕೆ ತರಲಾಗಿತ್ತು. ಇದೀಗ ಆಸ್ಪತ್ರೆ ಕಾಮಗಾರಿ ವೇಗ ಪಡೆುಕೊಂಡಿದೆ ಎಂದು ಹೇಳಿದರು.

ಆಸ್ಪತ್ರೆಯ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡಿದ್ದು, ವಿದ್ಯುತ್, ನೀರು, ಚರಂಡಿ ಸೇರಿದಂತೆ ಎರಡನೇ ಹಂತದ ಕಾಮಗಾರಿಗಳು ತ್ವರಿತವಾಗಿ ಕಳೆದ 4 ದಿನಗಳಿಂದ ಆರಂಭಗೊಂಡಿವೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ವೈದ್ಯರ ಕೊರತೆ ನೀಗಿಸಲು ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT