ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಂದಗಿ ವಿಧಾನಸಭಾ ಉಪಚುನಾವಣೆ: ಅಕ್ರಮ ತಡೆಗೆ ವಾಟ್ಸ್‌ ಆ್ಯಪ್‌ ಗ್ರೂಪ್‌ ರಚನೆ

ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಜಿಲ್ಲಾಧಿಕಾರಿ ಸಭೆ
Last Updated 29 ಸೆಪ್ಟೆಂಬರ್ 2021, 12:20 IST
ಅಕ್ಷರ ಗಾತ್ರ

ವಿಜಯಪುರ: ಚುನಾವಣಾ ಅಕ್ರಮ ತಡೆಯಲು ವಿವಿಧ ಅಧಿಕಾರಿಗಳನ್ನು ಒಳಗೊಂಡ ತಂಡಗಳನ್ನು ರಚಿಸಲಾಗುವುದು. ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಂಪರ್ಕ ಸಾಧಿಸಲು ರಾಜಕೀಯ ಪಕ್ಷ ಹಾಗೂ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ವಾಟ್ಸ್‌ ಆ್ಯಪ್‌ ಗ್ರೂಪ್ ರಚಿಸಲಾಗುವುದು ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್ ಹೇಳಿದರು.

ಸಿಂದಗಿ ವಿಧಾನಸಭಾ ಉಪಚುನಾವಣೆಗೆ ಸಂಬಂಧಪಟ್ಟಂತೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಅವರು,ಮತಕ್ಷೇತ್ರದ ವ್ಯಾಪ್ತಿಯಲ್ಲಿನ ಸೂಕ್ಷ್ಮ ಹಾಗೂ ಅತೀ ಸೂಕ್ಷ್ಮ ಮತಗಟ್ಟೆಗಳ ಬಗ್ಗೆ ಪರಿಶೀಲಿಸಿ ಮಾಹಿತಿ ನೀಡಿದ್ದಲ್ಲಿ ಅವಶ್ಯಕತೆ ಇರುವ ಕಡೆ ಇಂತಹ ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು.

ಯಾವುದೇ ರೀತಿಯ ಅನಾನುಕೂಲತೆಗಳ ಬಗ್ಗೆ ಮತ್ತು ಹೆಚ್ಚಿನ ಮಾಹಿತಿಗೆ ಹೆಚ್ಚುವರಿ ಜಿಲ್ಲಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ. ಕಾನೂನು ಸುವ್ಯವಸ್ಥೆ ಜವಾಬ್ದಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ವಹಿಸಿದ್ದು, ಮಾದರಿ ನೀತಿ ಸಂಹಿತೆ ಕುರಿತು ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮುಖ್ಯಸ್ಥರಾಗಿರುತ್ತಾರೆ ಎಂದು ತಿಳಿಸಿದರು.

ಚುನಾವಣಾ ವೇಳಾಪಟ್ಟಿ, ಮಾದರಿ ನೀತಿ ಸಂಹಿತೆ ಉಲ್ಲಂಘನಾ ಪ್ರಕರಣಗಳ ನಿಯಂತ್ರಣ ಸೇರಿದಂತೆ ಪ್ರಚಾರ ಸಂದರ್ಭದಲ್ಲಿ ಕೋವಿಡ್ ನಿಯಮಗಳನ್ನು ಪಾಲಿಸುವ ಬಗ್ಗೆ ತಿಳಿ ಹೇಳಿದರು.

ಚುನಾವಣಾ ಅಭ್ಯರ್ಥಿಗಳು, ಆಯಾ ವಾಹನ ಚಾಲಕರು ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆಯಬೇಕು ಎಂದು ಸೂಚಿಸಿದರು.

ಚುನಾವಣೆಗೆ ಸ್ಫರ್ಧಿಸುವ ಅಭ್ಯರ್ಥಿಗಳ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗಳನ್ನು ಚುನಾವಣಾ ಕಾರ್ಯಕ್ಕೆ ಬಳಸಲಾಗುವುದಿಲ್ಲ. ಅನುದಾನಿತ ಹಾಗೂ ಅನುದಾನ ರಹಿತ ಸಿಬ್ಬಂದಿಗಳನ್ನು ಬಳಸದೇ ಸರ್ಕಾರಿ ಸಿಬ್ಬಂದಿಗಳನ್ನು ಮಾತ್ರ ಚುನಾವಣೆ ಕಾರ್ಯಕ್ಕೆ ಬಳಸಲಾಗುವುದು ಎಂದು ತಿಳಿಸಿದರು.

ಜಿ.ಪಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಆನಂದ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕಳಸದ, ಉಪವಿಭಾಗಾಧಿಕಾರಿ ರಾಹುಲ್ ಸಿಂಧೆ ಸೇರಿದಂತೆ ವಿವಿಧ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ನೀತಿ ಸಂಹಿತೆ ಉಲ್ಲಂಘನೆ; ಎಚ್ಚರ ವಹಿಸಲು ಸೂಚನೆ

ವಿಜಯಪುರ: ನ್ಯಾಯಸಮ್ಮತ ಚುನಾವಣೆ ನಡೆಯಲು ಅನುಕೂಲವಾಗುವಂತೆ ಸಿಂದಗಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಲು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಇಂಡಿ, ಸಿಂದಗಿ, ದೇವರ ಹಿಪ್ಪರಗಿ ಹಾಗೂ ಸಂಬಂಧಿಸಿದ ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೊ ಸಂವಾದ ಸಭೆಯಲ್ಲಿ ಅವರು ಮಾತನಾಡಿದರು.

ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಕಂಡುಬಂದಲ್ಲಿ ಹಾಗೂ ದೂರು ಬಂದಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕು. ಫ್ಲಾಯಿಂಗ್ ಸ್ಕ್ವಾಡ್ ತಂಡ, ಸ್ಟ್ಯಾಟಿಕ್ ಸವೇನಲ್ಸ್ ತಂಡಗಳು ಸನ್ನದ್ಧವಾಗಿರಬೇಕು ಎಂದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಸಿಂದಗಿ ವಿಧಾನ ಸಭಾ ಕ್ಷೇತ್ರದ ಗ್ರಾಮ ಪಂಚಾಯ್ತಿ ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪೋಸ್ಟರ್ಸ್, ಬಂಟಿಗ್ಸ್ ಮತ್ತು ಕಟೌಟ್‍ಗಳನ್ನು ತಕ್ಷಣ ತೆರವುಗೊಳಿಸಿ, ಸಂಬಂಧಿಸಿದ ಅಧಿಕಾರಿಗಳು ವರದಿ ಸಲ್ಲಿಸಬೇಕು ಎಂದರು.

ಸಿಂದಗಿ, ತಾಳಿಕೋಟಿ, ದೇವರ ಹಿಪ್ಪರಗಿ ಹಾಗೂ ಸಂಬಂಧಿಸಿದ ಗಡಿಭಾಗದಲ್ಲಿ ಚೆಕ್‍ಪೋಸ್ಟ್‌ಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು. ಫ್ಲಾಯಿಂಗ್ ಸ್ಕ್ವಾಡ್ ತಂಡ, ಸ್ಟ್ಯಾಟಿಕ್ ಸವೇಲೆನ್ಸ್‌ ತಂಡಗಳು ಸನ್ನದ್ಧಗೊಳ್ಳಬೇಕು ಎಂದು ತಿಳಿಸಿದರು.

ಅನಧಿಕೃತ ಮದ್ಯಮಾರಾಟ ಬಗ್ಗೆ ಅಬಕಾರಿ ಇಲಾಖೆಯ ನೋಡಲ್ ಅಧಿಕಾರಿಗಳು ಸೂಕ್ತ ಕ್ರಮಕೈಗೊಂಡು ವರದಿ ಸಲ್ಲಿಸಬೇಕು ಎಂದರು.

ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು ಮೊಬೈಲ್ ಫೋನ್‌ ಚಾಲನೆಯಲ್ಲಿ ಇಟ್ಟಿರುಬೇಕು ಎಂದು ಕಟ್ಟು ನಿಟ್ಟಿನ ಸೂಚನೆ ನೀಡಿದರು.

***

ಸಿಂದಗಿ ಮತಕ್ಷೇತ್ರ ವ್ಯಾಪ್ತಿಯ ಸಂಬಂಧಪಟ್ಟ ಸ್ಥಳಗಳಲ್ಲಿ ಚೆಕ್‍ಪೋಸ್ಟ್ ಸ್ಥಾಪನೆಗೂ ಕ್ರಮಕೈಗೊಳ್ಳಲಾಗುವುದು. ಚುನಾವಣೆ ಕಾರ್ಯಕ್ಕೆ ಸರ್ಕಾರಿ ಸಿಬ್ಬಂದಿಗಳನ್ನು ಮಾತ್ರ ಬಳಸಿಕೊಳ್ಳಲಾಗುವುದು

–ಪಿ.ಸುನೀಲ್ ಕುಮಾರ್‌, ಜಿಲ್ಲಾಧಿಕಾರಿ

****

ನಿಗದಿತ ಅವಧಿಯೊಳಗೆ ಬಾರ್, ರೆಸ್ಟೊರೆಂಟ್, ಡಾಬಾ ಬಂದ್ ಆಗುವಂತೆ ಸಂಬಂಧಪಟ್ಟ ಅಧಿಕಾರಿಗಳು ನೋಡಿಕೊಳ್ಳಬೇಕು. ಒಂದೇ ಒಂದು ದೂರು ಬರದಂತೆ ಸೂಕ್ತ ನಿಗಾ ಇಡಬೇಕು

–ಗೋವಿಂದ ರೆಡ್ಡಿ, ಸಿಇಓ, ಜಿಲ್ಲಾ ಪಂಚಾಯ್ತಿ, ವಿಜಯಪುರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT