ಗುರುವಾರ , ಮಾರ್ಚ್ 23, 2023
22 °C

ಸಿಂದಗಿ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರಗೆ ಭರ್ಜರಿ ಗೆಲುವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಸಿಂದಗಿ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ 31,088 ಮತಗಳ ಅಂತರದಿಂದ ಭರ್ಜರಿ ಗೆಲುವು ದಾಖಲಿಸಿದ್ದಾರೆ.

ರಮೇಶ ಭೂಸನೂರ ಅವರು 93,380 ಮತಗಳನ್ನು ಪಡೆದುಕೊಂಡಿದ್ದಾರೆ.ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರು 62,292 ಮತಗಳನ್ನು ಪಡೆದುಕೊಂಡಿದ್ದಾರೆ. ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ 4321 ಮತಗಳನ್ನು ಪಡೆಯಲಷ್ಟೇ ಶಕ್ತವಾಗಿದ್ದಾರೆ. ಜೆಡಿಎಸ್ ಅಭ್ಯರ್ಥಿ ಸೇರಿದಂತೆ ಕಣದಲ್ಲಿದ್ದ ಇತರೆ ನಾಲ್ವರು ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ.

ಸಿಂದಗಿ ಚುನಾವಣಾ ಉಸ್ತುವಾರಿ ವಹಿಸಿಕೊಂಡಿದ್ದ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಕ್ಷೇತ್ರದಲ್ಲಿ ಜಾತಿ ಸಮೀಕರಣ ಮಾಡುವ ಮೂಲಕ ಬಿಜೆಪಿಗೆ ಜಯ ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ.

ಸಚಿವರಾದ ಗೋವಿಂದ ಕಾರಜೋಳ, ವಿ.ಸೋಮಣ್ಣ, ಸಿ.ಸಿ.ಪಾಟೀಲ, ಶಶಿಕಲಾ ಜೊಲ್ಲೆ ಅವರು ಚುನಾವಣಾ ಉಸ್ತುವಾರಿ ಲಕ್ಷ್ಮಣ ಸವದಿ ನೇತೃತ್ವದಲ್ಲಿ ಒಂದು ತಿಂಗಳ ಕಾಲ ಕ್ಷೇತ್ರದಲ್ಲಿ ಹಳ್ಳಿ, ಹಳ್ಳಿಯನ್ನು ಸುತ್ತಿ ಎಲ್ಲ ಸಮುದಾಯದ ಮುಖಂಡರು, ಮತದಾರರನ್ನು ಬಿಜೆಪಿಯತ್ತ ಸೆಳೆಯುವಲ್ಲಿ ಯಶಸ್ವಿಯಾಗಿದ್ದರು.

ಕ್ಷೇತ್ರದಲ್ಲಿ ಬಹುಸಂಖ್ಯೆಯಲ್ಲಿರುವ ತಳವಾರ ಸಮುದಾಯಕ್ಕೆ  ಎಸ್.ಟಿ.ಮೀಸಲಾತಿ ನೀಡುವುದಾಗಿ ಚುನಾವಣಾ ಪ್ರಚಾರದ ವೇಳೆ ಭರವಸೆ ನೀಡುವ ಮೂಲಕ ಆ ಸಮುದಾಯದ ಮತಗಳನ್ನು  ಸೆಳೆಯುವಲ್ಲಿ ಬಿಜೆಪಿ ಮುಖಂಡರು ಯಶಸ್ವಿಯಾಗಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರಿಗೆ ತಂದೆ, ಮಾಜಿ ಸಚಿವ  ಎಂ.ಸಿ.‌ಮನಗೂಳಿ ಅವರ ಸಾವಿನ ಅನುಕಂಪ ಕೈಹಿಡಿದಿಲ್ಲ.

ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಅಶೋಕ ಮನಗೂಳಿ ಅವರಿಗೆ ಮೂಲ ಕಾಂಗ್ರೆಸ್ ಮುಖಂಡರು ಚುನಾವಣೆಯಲ್ಲಿ ಕೈಕೊಟ್ಟಿರುವುದು ಸಾಬೀತಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯ ಮಂತ್ರಿಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಉಪಾಧ್ಯಕ್ಷ ವಿಜಯೇಂದ್ರ ಸೇರಿದಂತೆ ಬಹುತೇಕ ಸಚಿವರು, ಶಾಸಕರು ಅಬ್ಬರದ ಪ್ರಚಾರ ನಡೆಸುವ ಮೂಲಕ ಮತದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.

ರಾಜ್ಯ, ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿ ಇರುವುದರಿಂದ ಕ್ಷೇತ್ರದ ಅಭಿವೃದ್ಧಿಗೆ ನೆರವಾಗಬಹುದು ಎಂಬ ಕಾರಣಕ್ಕೆ ಮತದಾರರು ಬಿಜೆಪಿ ಪರ ಮತಚಲಾಯಿಸಿದ್ದಾರೆ.

ಬೆಲೆ ಏರಿಕೆ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರಿಲ್ಲ.

2018ರಲ್ಲಿ ಜೆಡಿಎಸ್ ಸಿಂದಗಿಯಲ್ಲಿ ವಿಜಯ ಪತಾಕೆ ಹಾರಿಸಿತ್ತು. ಆದರೆ, ಇದೀಗ ಠೇವಣಿಯೊಂದಿಗೆ ಕ್ಷೇತ್ರವನ್ನು ಕಳೆದುಕೊ‌ಂಡಿದೆ.

ಸಿಂದಗಿ ಉಪ ಚುನಾವಣೆಯಲ್ಲಿ ಭಾರೀ ಪ್ರಮಾಣದಲ್ಲಿ ಹಣ ಹಂಚಿಕೆಯಾಗಿದೆ ಎಂಬ ಪ್ರಬಲ ಆರೋಪ ಕೇಳಿಬಂದಿತ್ತು.

ಬಿಜೆಪಿ ವಿಜಯೋತ್ಸವ: ಸಿಂದಗಿ ವಿಧಾನಸಭಾ  ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ  ಗೆಲುವು ಸಾಧಿಸುತ್ತಿರುವಂತೆ ಪಕ್ಷದ ಕಾರ್ಯಕರ್ತರು ಪರಸ್ಪರ ಗುಲಾಲ್ ಎರಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.

ವಿಜಯಪುರ ಸೈನಿಕ ಶಾಲೆ ಮುಂಭಾಗದಲ್ಲಿ ಕಾರ್ಯಕರ್ತರು, ಬಿಜೆಪಿಗೆ ಜಯವಾಗಲಿ, ಬೋಲೊ ಭಾರತ್ ಮಾತಾ ಕೀ ಜೈ, ರಮೇಶ್ ಭೂಸನೂರಗೆ ಜಯವಾಗಲಿ ಎಂಬ ಘೋಷಣೆಗಳು ಮೊಳಗಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು