ಭಾನುವಾರ, ಆಗಸ್ಟ್ 1, 2021
27 °C
ಎಎಸ್‌ಐ, ಪೊಲೀಸ್‌ ಕಾನ್‌ಸ್ಟೆಬಲ್‌ಗೆ ಕೋವಿಡ್‌ ದೃಢ

ವಿಜಯಪುರ: ಎಸ್‌‍ಪಿ ಹೋಂ ಕ್ವಾರಂಟೈನ್‌; ಕಚೇರಿ ಸೀಲ್‌ ಡೌನ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಜಿಲ್ಲಾ ಪೊಲೀಸ್ ಕಚೇರಿ ಹಾಗೂ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯ ಸಿಬ್ಬಂದಿಗೆ
ಕೋವಿಡ್‌ ಪಾಸಿಟಿವ್ ದೃಢವಾದ ಹಿನ್ನೆಲೆಯಲ್ಲಿ ಎರಡೂ ಕಚೇರಿಗಳನ್ನು ಸೀಲ್‌ಡೌನ್‌ ಮಾಡಲಾಗಿದೆ.  ಅಲ್ಲದೇ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅನುಪಮ್‌ ಅಗರವಾಲ್‌ ಸೇರಿದಂತೆ 50ಕ್ಕೂ ಹೆಚ್ಚು ಸಿಬ್ಬಂದಿ ಹೋಂ ಕ್ವಾರಂಟೈನ್‌ ಆಗಿದ್ದಾರೆ.
 
ಕಂಟೈನ್‍ಮೆಂಟ್ ಝೋನ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್‌ ಕರ್ತವ್ಯ ನಿರ್ವಹಿಸಿದ್ದ ಜಿಲ್ಲಾ ಪೊಲೀಸ್ ಕಚೇರಿಯ ಎಎಸ್‍ಐ ಹಾಗೂ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿಗೆ ಶುಕ್ರವಾರ ಕೋವಿಡ್‌ ದೃಢವಾಗಿದೆ.ಸೋಂಕಿತರನ್ನು ನಿಗದಿತ ಕೋವಿಡ್ ಆಸ್ಪತ್ರೆಗೆ ದಾಖಲಿಸಿ, ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.

ಸೋಂಕಿತರೊಂದಿಗಿನ ಪ್ರಥಮ ಮತ್ತು ದ್ವಿತೀಯ ಸಂಪರ್ಕಿತರನ್ನು ಗುರುತಿಸಿ ಹೋಂಕ್ವಾರಂಟೈನ್ ಮಾಡಲಾಗಿದೆ. ಅಲ್ಲದೇ, ಸೋಂಕಿತರು ಕರ್ತವ್ಯ ನಿರ್ವಹಿಸುತ್ತಿದ್ದ ಜಿಲ್ಲಾ ಪೊಲೀಸ್ ಕಾರ್ಯಾಲಯ ಹಾಗೂ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯನ್ನು ತಾತ್ಕಾಲಿಕವಾಗಿ ಸೀಲ್‍ಡೌನ್ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅನುಪಮ್‌ ಅಗರವಾಲ್‌ ತಿಳಿಸಿದ್ದಾರೆ.

ಡಿಸಿ ಸ್ಪಂದನೆ:

ಚಿಕಿತ್ಸೆ ಸಿಗದೆ ಪರಾದಡುತ್ತಿದ್ದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರಿಗೆ ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ಸ್ಪಂದಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಸಿಂದಗಿ ತಾಲ್ಲೂಕಿನಿಂದ ರೋಗಿಯೊಂದಿಗೆ ಕಾರಿನಲ್ಲಿ ಶುಕ್ರವಾರ ನೇರವಾಗಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಕುಟುಂಬದವರು ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ಅವರನ್ನು ಭೇಟಿಯಾದರು.

ಜಿಲ್ಲಾಸ್ಪತ್ರೆ, ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ವೈದ್ಯರು ನಿರಾಕರಿಸುತ್ತಿದ್ದಾರೆ. ರಾತ್ರಿಯಿಡೀ ತಿರುಗಾಡಿದೆವು. ಯಾರೊಬ್ಬರೂ ಚಿಕಿತ್ಸೆ ನೀಡಲಿಲ್ಲ ಎಂದು ಕುಟುಂಬದವರು ಅಳಲು ತೋಡಿಕೊಂಡರು.

ಜಿಲ್ಲಾಧಿಕಾರಿ ಅವರು ತಕ್ಷಣ ಜಿಲ್ಲಾಸ್ಪತ್ರೆ ವೈದ್ಯರಿಗೆ ಕರೆ ಮಾಡಿ, ರೋಗಿಯನ್ನು ಚಿಕಿತ್ಸೆಗೆ ದಾಖಲಿಸುವಂತೆ ಸೂಚಿಸಿದರು.

ಮತ್ತೆ 89 ಜನರಿಗೆ ಕೋವಿಡ್ ದೃಢ

ವಿಜಯಪುರ: ಜಿಲ್ಲೆಯಲ್ಲಿ ಶುಕ್ರವಾರ ಮತ್ತೆ 89 ಜನರಿಗೆ ಕೋವಿಡ್ ಪಾಸಿಟಿವ್‌ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದ್ದಾರೆ.

ಇದರಲ್ಲಿ ಮಹಾನಗರ ಪಾಲಿಕೆಯ ಮೂವರು ಪೌರಕಾರ್ಮಿಕರು, ಒಬ್ಬ ಪೌರಕಾರ್ಮಿಕ ಮೇಲ್ವಿಚಾರಕರು, ಇಬ್ಬರು ಪೊಲೀಸ್ ಹಾಗೂ ನಾಲ್ವರು ಆರೋಗ್ಯ ಆರೈಕೆ ಕಾರ್ಯಕರ್ತರಿಗೂ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಹೇಳಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 710 ಕೋವಿಡ್ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, 463 ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆಸ್ಪತ್ರೆಯಲ್ಲಿ ಸದ್ಯ 234 ಕೋವಿಡ್  ಪಾಸಿಟಿವ್ ಸಕ್ರಿಯ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯವರೆಗೆ ಒಟ್ಟು 13 ಜನ ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು