ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಕಲು ಮುಕ್ತವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ: ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ

ಎಸ್ಎಸ್ಎಲ್‌ಸಿ ಪರೀಕ್ಷೆ ನಾಳೆಯಿಂದ
Last Updated 24 ಜೂನ್ 2020, 10:55 IST
ಅಕ್ಷರ ಗಾತ್ರ

ವಿಜಯಪುರ: ಜಿಲ್ಲೆಯಾದ್ಯಂತ ಜೂನ್ 25 ರಿಂದ ಜುಲೈ 4ರವರೆಗೆ ನಡೆಯಲಿರುವ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ನಕಲು ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕ ರೀತಿಯಲ್ಲಿ ನಡೆಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದರು.

ಈ ಪರೀಕ್ಷಾ ಪೂರ್ವ ಸಿದ್ಧತೆ ಕುರಿತು ಮಾಹಿತಿ ನೀಡಿದ ಅವರು, ಜಿಲ್ಲೆಯಾದ್ಯಂತ ಎಸ್ಎಸ್ಎಲ್‌ಸಿಪರೀಕ್ಷೆಯನ್ನು ವ್ಯವಸ್ಥಿತ ರೀತಿಯಲ್ಲಿ ನಡೆಸಲು 106 ಮುಖ್ಯ ಪರೀಕ್ಷಾ ಕೇಂದ್ರ ಹಾಗೂ 15 ಉಪ ಪರೀಕ್ಷಾ ಕೇಂದ್ರಗಳು ಸೇರಿದಂತೆ ಒಟ್ಟು 121 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದರು.

ಒಟ್ಟು 37,122 ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ. ವಿಜಯಪುರ ನಗರದಲ್ಲಿ ಬಾಹ್ಯ ವಿದ್ಯಾರ್ಥಿಗಳ 4 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಅವರು ತಿಳಿಸಿದರು.

ನಿಷೇಧಾಜ್ಞೆ:ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶದ ವ್ಯಾಪ್ತಿಯಲ್ಲಿ 144 ಕಲಂ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಯಾವುದೇ ರೀತಿಯ ಝರಾಕ್ಸ್, ಕಂಪ್ಯೂಟರ್, ಇಂಟರ್‌ನೆಟ್‌ ಕೆಫೆ, ಕೋಚಿಂಗ್ ಸೆಂಟರ್‌ಗಳನ್ನು ತೆರೆಯುವುದನ್ನು ನಿಷೇಧಿಸಲಾಗಿದೆ ಎಂದರು.

ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳನ್ನು ಹೊರತುಪಡಿಸಿ ಇತರರಿಗೆ ಕಂಪೌಂಡ್ ಒಳಗಡೆ ಅವಕಾಶ ಇರುವುದಿಲ್ಲ. ಗುಂಪುಗುಂಪಾಗಿ ಸೇರಲು ನಿರ್ಬಂಧವಿದೆ. ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಬಳಸುವುದನ್ನು ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದರು.

ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಸಿಸಿಟಿವಿ ಕ್ಯಾಮೆರಾ, ಮೂರು ಅಡಿ ಅಂತರದೊಂದಿಗೆ ಜಿಗ್‌ಜಾಗ್‌ ಮಾದರಿಯಲ್ಲಿ ಮಕ್ಕಳಿಗೆ ಆಸನದ ವ್ಯವಸ್ಥೆ, ಪ್ರತಿಯೊಂದು ಡೆಸ್ಕ್‌ಗೆ ಇಬ್ಬರು ವಿದ್ಯಾರ್ಥಿಗಳು ಒಳಗೊಂಡಂತೆ ಪ್ರತಿ ಬ್ಲಾಕ್‍ದಲ್ಲಿ ಕನಿಷ್ಠ 18 ಹಾಗೂ ಗರಿಷ್ಠ 20 ಮಕ್ಕಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ಸಹ ನೇಮಿಸಲಾಗಿದೆ. ಸೂಕ್ಷ್ಮ ಪರೀಕ್ಷಾ ಕೇಂದ್ರಗಳಿಗೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ ಎಂದರು.

ಪರೀಕ್ಷೆಗಳನ್ನು ಸುವ್ಯವಸ್ಥಿತವಾಗಿ ನಡೆಸಲು ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಸಮಿತಿ ರಚಿಸಲಾಗಿದೆ. ಸರ್ಕಾರದ ಮಾರ್ಗಸೂಚಿಯಂತೆ ಪರೀಕ್ಷೆ ನಡೆಸಲಾಗುತ್ತಿದ್ದು, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಸಾರಿಗೆ ಇಲಾಖೆ, ರಾಷ್ಟ್ರೀಯ ಸೇವಾದಳ, ಸ್ಕೌಟ್ಸ್ ಮತ್ತು ಗೈಡ್ಸ್ ಇವರ ಸಹಯೋಗದೊಂದಿಗೆ ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ನಡೆಸಲಾಗುತ್ತದೆ ಎಂದು ತಿಳಿಸಿದರು.

ವಿದ್ಯಾರ್ಥಿಗಳಿಗೆ ಸಹಾಯವಾಣಿ ಆರಂಭ

ಕೋವಿಡ್‌ 19 ಹಿನ್ನೆಲೆಯಲ್ಲಿ ಜಿಲ್ಲಾ ಕೇಂದ್ರದಲ್ಲಿ ಸಹಾಯವಾಣಿ ಸ್ಥಾಪಿಸಲಾಗಿದ್ದು, ಯಾವುದೇ ಸಮಸ್ಯೆ ಇದ್ದರೆ ದೂರವಾಣಿ ಸಂಖ್ಯೆ 08352250151ಗೆ ಕರೆ ಮಾಡಬಹುದು.

ಅಲ್ಲದೇ. ವಿದ್ಯಾರ್ಥಿಗಳು ಯಾವುದೇ ರೀತಿಯ ಸಮಸ್ಯೆಗಳಿದ್ದಲ್ಲಿ ಡಿಡಿಪಿಐ ಸಿ.ಪ್ರಸನ್ನ ಕುಮಾರ ಮೊ.ಸಂ:944899331, ಇಒ ಎಸ್.ಎ ಮುಜಾವರ-9483460011, ಪಿ.ಕೆ ಬಿರಾದಾರ(ಎಸ್.ಐ)-9740314500 ಹಾಗೂ ಬಿಇಒಗಳಾದ ಬಾಗೇವಾಡಿ ಬಿ.ಇ.ಒ-9480695092, ವಿಜಯಪುರ ಗ್ರಾಮೀಣ ಬಿಇಒ -9480695093, ವಿಜಯಪುರ ನಗರ ಬಿಇಒ-9480695094, ಚಡಚಣ ಬಿಇಒ 9480695095, ಇಂಡಿ ಬಿಇಒ -9480695096, ಮುದ್ದೇಬಿಹಾಳ ಬಿಇಒ -9480695097, ಸಿಂದಗಿ ಬಿಇಒ -948069509 ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

ಕೋವಿಡ್-19 ಮುನ್ನೆಚ್ಚರಿಕೆ ಕ್ರಮ

ಕೋವಿಡ್-19 ಮುನ್ನೆಚ್ಚರಿಕೆಯಾಗಿ ಈಗಾಗಲೇ ವಿವಿಧ ಜನಪ್ರತಿನಿಧಿಗಳು ಮತ್ತು ಟ್ರಸ್ಟ್‌ಗಳಿಂದ ಪೂರೈಸಿದ 1,07,250 ಮಾಸ್ಕ್‌ಗಳನ್ನು ವಿದ್ಯಾರ್ಥಿಗಳಿಗೆ ನೀಡಲು ಕ್ರಮ ಕೈಗೊಳಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಕಂಟೈನ್ಮೆಂಟ್ ವಲಯದಿಂದ ಬರುವ ಮಕ್ಕಳಿಗೆ ಆಯಾ ಪರೀಕ್ಷಾ ಕೇಂದ್ರಗಳಲ್ಲಿ ಪ್ರತ್ಯೇಕ ಕೊಠಡಿಗಳನ್ನು ಕಾಯ್ದಿರಿಸಲಾಗಿದೆ. ಎನ್-95 ಮಾಸ್ಕ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ.ಪ್ರಸನ್ನಕುಮಾರ್‌ ತಿಳಿಸಿದರು.

ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ ಕೇಂದ್ರಕ್ಕೆ ಬರಲು 147 ಬಸ್‍ಗಳ ವ್ಯವಸ್ಥೆ ಮಾಡಲಾಗಿದೆ. 107 ರೂಟ್‍ಗಳಲ್ಲಿ ಬಸ್‍ಗಳು ಸಂಚರಿಸಲಿವೆ. ಖಾಸಗಿ ಶಾಲೆಗಳ ಮೂಲಕ ಆಯಾ ವಿದ್ಯಾರ್ಥಿಗಳಿಗೆ ಕರೆದುಕೊಂಡು ಬರಲು ಮತ್ತು ಹೋಗಲು 141 ಖಾಸಗಿ ಬಸ್‍ಗಳ ಸೌಲಭ್ಯ ಕಲ್ಪಿಸಲಾಗಿದೆ ಎಂದರು.

ಕಂಟೈನ್ಮೆಂಟ್ ವಲಯದಿಂದ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಬಹುದು ಅಥವಾ ಹಾಜರಾಗದಿದ್ದಲ್ಲಿ ಮುಂದಿನ ಪರೀಕ್ಷೆಯನ್ನು ಪ್ರಥಮ ಪರೀಕ್ಷೆ ಎಂದು ಪರಿಗಣಿಸಿ ಅವಕಾಶ ಕಲ್ಪಿಸಲಾಗುವುದೆಂದು ಅವರು ತಿಳಿಸಿದರು.

ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಮಕ್ಕಳಿಗೆ ಕೋವಿಡ್-19 ಕುರಿತ ಮುನ್ನೆಚ್ಚರಿಕೆ ಮಾಹಿತಿ ನೀಡುವ ಪೋಸ್ಟರ್‌ಗಳನ್ನು ಲಗತ್ತಿಸಲಾಗುತ್ತಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸ್ಯಾನಿಟೈಜರ್ ಮತ್ತು ಎಲ್ಲ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಜ್ ಮಾಡಲಾಗಿದೆ ಎಂದರು.

ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಹೆಲ್ತ್‌ಕೌಂಟರ್ ತೆರೆಯಲಾಗಿದೆ. ವೈದ್ಯರು, ಆರೋಗ್ಯ ಸಹಾಯಕರು ಇರಲಿದ್ದು, ಥರ್ಮಲ್ ಸ್ಕ್ಯಾನಿಂಗ್, ಮಕ್ಕಳಿಗೆ ಸ್ಯಾನಿಟೈಜರ್ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT