ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭ್ರೂಣ ಲಿಂಗ ಪತ್ತೆ ಮಾಡಿದರೆ ಕಠಿಣ ಕ್ರಮ

ಖಾಸಗಿ ಆಸ್ಪತ್ರೆಗಳಿಗೆ ಜಿಲ್ಲಾಧಿಕಾರಿ ವಿಜಯಮಹಾಂತೇಶ ಖಡಕ್‌ ಎಚ್ಚರಿಕೆ
Last Updated 10 ಡಿಸೆಂಬರ್ 2022, 13:02 IST
ಅಕ್ಷರ ಗಾತ್ರ

ವಿಜಯಪುರ: ಜಿಲ್ಲೆಯ ಯಾವುದೇ ಆಸ್ಪತ್ರೆಯಲ್ಲಿ ಅನಧಿಕೃತವಾಗಿ ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಮಾಡಿದರೆಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ವಿಜಯಮಹಾಂತೇಶ ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪಿಸಿಪಿಎನ್‌ಡಿಟಿ ಜಿಲ್ಲಾ ಮಟ್ಟದ ನೀರಿಕ್ಷಣಾ ಮತ್ತು ಮೇಲ್ವಿಚಾರಣಾ ಮಂಡಳಿ ಸಭೆಯಲ್ಲಿ ಅವರು ಮಾತನಾಡಿದರು.

ಹೆಣ್ಣು ಭ್ರೂಣ ಲಿಂಗ ಪತ್ತೆ ಮಾಡುವುದನ್ನು ನಿಷೇಧಿಸಲಾಗಿದ್ದು, ಕಾನೂನಿನ ಪ್ರಕಾರ ಭ್ರೂಣ ಲಿಂಗ ಪತ್ತೆ ಮಾಡುವುದು ಅಪರಾಧವಾಗಿದ್ದು, ಈ ಪ್ರಕರಣಗಳು ಕಂಡು ಬಂದಲ್ಲಿ ಅಂತಹ ಆಸ್ಪತ್ರೆಯ ಸ್ಕ್ಯಾನಿಂಗ್ ಯಂತ್ರಗಳನ್ನು ಸೀಜ್ ಮಾಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಸ್ಕ್ಯಾನಿಂಗ್ ಕೇಂದ್ರಗಳಿಗೆ ಪ್ರತಿ ತಿಂಗಳು ಭೇಟಿ ನೀಡಿ ಕಾಯ್ದೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು. ಕಾರ್ಯನಿರ್ವಹಿಸುತ್ತಿರುವ ಸ್ಕ್ಯಾನಿಂಗ್ ಕೇಂದ್ರಗಳು ಕಡ್ಡಾಯವಾಗಿ ನೋಂದಣಿಯಾಗಿರಬೇಕು. ನಿಯಮಾನುಸಾರ ಸ್ಕ್ಯಾನಿಂಗ್ ಕೇಂದ್ರಗಳು ನವೀಕರಣಗೊಳ್ಳಬೇಕು. ನವೀಕರಣಕ್ಕಾಗಿ ಒಂದು ತಿಂಗಳ ಮುಂಚಿತವಾಗಿ ಅರ್ಜಿ ಸಲ್ಲಿಸಿರಬೇಕು. ನವೀಕರಣದ ಅರ್ಜಿಗಳನ್ನು ಜಿಲ್ಲಾ ಮಟ್ಟದ ಸಮಿತಿಯಲ್ಲಿ ಮಂಡಿಸಿ, ಈ ಕುರಿತು ಕೂಲಂಕಷವಾಗಿ ಪರಿಶೀಲನೆ ನಡೆಸಿದ ತರುವಾಯ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

ಪಿಸಿಪಿಎನ್‌ಡಿಟಿ ಕಾಯ್ದೆಗೆ ಸಂಬಂಧಿಸಿದ ಎಇಸಿ ಪೋಸ್ಟರ್‌ಗಳನ್ನು ಮುದ್ರಿಸಿ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಸೇರಿದಂತೆ ವಿವಿಧ ಆಯ್ದ ಸ್ಥಳಗಳಲ್ಲಿ ಪ್ರಚುರ ಪಡಿಸಿ, ಸಾರ್ವಜನಿಕರಿಗೆ ಈ ಕುರಿತು ತಿಳಿವಳಿಕೆ-ಜಾಗೃತಿ ಮೂಡಿಸಬೇಕು. ಎಲ್ಲ ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ಒಂದೇ ನಮೂನೆಯಲ್ಲಿ ಎಫ್-ಫಾರ್ಮಗಳ ನಿರ್ವಹಣೆಗೆ ಸೇರಿದಂತೆ ಜಿಲ್ಲೆಯಲ್ಲಿ ಭ್ರೂಣ ಲಿಂಗ ಪತ್ತೆ ನಿಷೇಧ ಕಾನೂನನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸುರೇಶ ಚವ್ಹಾಣ, ಡಾ.ಕೆ.ಡಿ.ಗುಂಡಬಾವಡಿ, ಡಾ.ಎಸ್.ಆರ್.ಮುದನೂರ, ಡಾ.ಎಲ್.ಎಚ್.ಬಿದರಿ, ಡಾ.ಪಿ.ಬಿ.ದೇವಮಾನೆ, ಡಾ.ಎಂ.ಎಂ.ಪಾಟೀಲ, ಡಾ.ಎಸ್.ಎಸ್.ಕಲ್ಯಾಣ ಶೆಟ್ಟಿ, ಸ್ತ್ರೀರೋಗ ತಜ್ಞ ಟಿ.ಪಿ.ನಾಯ್ಡು, ಕಾನೂನು ಸಲಹೆಗಾರ ತುಳಸಿರಾಮ ಸೂರ್ಯವಂಶಿ ಸಭೆಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT