ವಿಜಯಪುರ: ‘ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಸರ್ಕಾರ ಹಮ್ಮಿಕೊಂಡಿರುವ ಮಾನವ ಸರಪಳಿ ಕಾರ್ಯಕ್ರಮದ ಅಗತ್ಯ ಸಿದ್ಧತೆಗಳನ್ನು ಕೈಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು’ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಮಾನವ ಸರಪಳಿ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ವಿರೇಶನಗರದಿಂದ ಆಲಮಟ್ಟಿಯವರೆಗೆ ನಡೆಯಲಿದೆ. ಮಾರ್ಗದುದ್ದಕ್ಕೂ ಕಿ.ಮೀ ಗುರುತಿಸುವ ಪ್ರಕ್ರಿಯೆ ಆದಷ್ಟು ಬೇಗ ಪೂರ್ಣಗೊಳಿಸಬೇಕು. ನಿಯೋಜಿಸಿದ ಅಧಿಕಾರಿ, ಸಿಬ್ಬಂದಿಗಳು, ಮಾರ್ಗದ ಪರಿಶೀಲನೆ ನಡೆಸಬೇಕು’ ಎಂದರು.
‘ಶಾಲಾ ಕಾಲೇಜು, ವಸತಿ ನಿಲಯ, ಗ್ರಾಮಗಳ, ಪಟ್ಟಣಗಳ ವಿವರ ಖಚಿತಪಡಿಸಿಕೊಂಡು, ಪ್ರತಿ ಒಂದು ಕಿ.ಮೀಗೆ ಯೋಜನೆ ಸಿದ್ಧಪಡಿಸಿ, ಮೈಕ್ರೋ ಪ್ಲಾನಿಂಗ್ ಮಾಡಿಕೊಳ್ಳಬೇಕು. ಯಾವುದೇ ಸಮಸ್ಯೆ ಬಾರದಂತೆ ಕಾರ್ಯನಿರ್ವಹಿಸಬೇಕು’ ಎಂದು ಹೇಳಿದರು.
‘ಸಾರಿಗೆ ವ್ಯವಸ್ಥೆ, ಅಲ್ಪೋಪಹಾರದ ವ್ಯವಸ್ಥೆ, ಕುಡಿಯುವ ನೀರು, ಆಶಾ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿ, ಆಂಬುಲೆನ್ಸ್ ವ್ಯವಸ್ಥೆ, ಪೊಲೀಸ್ ಸಿಬ್ಬಂದಿ ನಿಯೋಜಿಸಬೇಕು’ ಎಂದರು.
ಜಿಲ್ಲಾ ಪಂಚಾಯಿತಿ ಸಿಇಒ ರಿಷಿ ಆನಂದ ಮಾತನಾಡಿ, ಜಿಲ್ಲೆಯ ಸಾರ್ವಜನಿಕರು ಕಾರ್ಯಕ್ರಮದ ಆನ್‍ಲೈನ್ ಲಿಂಕ್ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳಲು ಅಗತ್ಯ ಪ್ರಚಾರ ಕೈಗೊಳ್ಳಬೇಕು ಎಂದರು.
ಸಭೆಯಲ್ಲಿ ನೋಡಲ್ ಅಧಿಕಾರಿಗಳು, ಸೆಕ್ಟರ್ ಅಧಿಕಾರಿಗಳು, ತಹಶೀಲ್ದಾರರು ಸೇರಿದಂತೆ ಅನೇಕರಿದ್ದರು.
ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಪಾಟೀಲ ಕರೆ
ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಭಾನುವಾರ ನಡೆಯಲಿರುವ ಬೃಹತ್ ಮಾನವ ಸರಪಳಿ ಕಾರ್ಯಕ್ರಮ ವಿಜಯಪುರ ಜಿಲ್ಲೆಯಲ್ಲಿ ಒಟ್ಟು 62 ಕಿ.ಮೀ ವರೆಗೆ ನಡೆಯಲಿದ್ದು, ಜಿಲ್ಲೆಯ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಬೃಹತ್ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಕರೆ ನೀಡಿದ್ದಾರೆ.
ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಅವರು, ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನದ ಆಶಯಗಳ ಕುರಿತು ಜನಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ. ಶಾಲಾ ಕಾಲೇಜುಗಳಲ್ಲಿ ಸಂವಿಧಾನದ ಪ್ರಸ್ತಾವನೆ ಓದುವುದನ್ನು ಕಡ್ಡಾಯಗೊಳಿಸಿದೆ. ಸಂವಿಧಾನ ಜಾಗೃತಿ ಜಾಥಾದ ಮೂಲಕ ರಾಜ್ಯದ ಮೂಲೆ–ಮೂಲೆ ತಲುಪುವ ಕೆಲಸ ಮಾಡಿದೆ.
ಸಂವಿಧಾನದ ಆಶಯಗಳಾದ ಸಮಾನತೆ, ಸ್ವಾತಂತ್ರ್ಯ ಹಾಗೂ ಭಾತೃತ್ವದ ಆದರ್ಶಗಳನ್ನು ಜನರಲ್ಲಿ ಗಟ್ಟಿಗೊಳಿಸಲು ಜಿಲ್ಲೆಯ ಎಲ್ಲ ಶಾಲಾ–ಕಾಲೇಜು ವಿದ್ಯಾರ್ಥಿಗಳು, ಮಹಿಳಾ ಸ್ವ-ಸಹಾಯ ಗುಂಪುಗಳು, ನಾನಾ ಸಂಘ-ಸಂಸ್ಥೆಗಳು, ಸಂಘಟನೆಗಳ ಪದಾಧಿಕಾರಿಗಳು, ಸರ್ಕಾರ ಮತ್ತು ಸರ್ಕಾರೇತರ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಜಿಲ್ಲೆಯ ಜನರು ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.