ಇಂಡಿ: ‘ಗೃಹಲಕ್ಷ್ಮಿ ಯೋಜನೆಯಡಿ ಆನ್‌ಲೈನ್ ಅರ್ಜಿ ಸಲ್ಲಿಸುವುದು ಸಂಪೂರ್ಣ ಉಚಿತವಾಗಿದ್ದು, ಹಣ ಪಡೆದು ನೋಂದಣಿ ಮಾಡುವ ಕೇಂದ್ರಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದು ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.
ಅವರು ತಾಲ್ಲೂಕಿನ ತಾಂಬಾ ಗ್ರಾಮದ ಬಾಪೂಜಿ ಸೇವಾ ಕೇಂದ್ರ ಹಾಗೂ ಗ್ರಾಮ ಒನ್ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪರಿಶೀಲಿಸಿ, ಸಾರ್ವಜನಿಕರೊಂದಿಗೆ ಸಮಾಲೋಚಿಸಿದರು.
ಸಾರ್ವಜನಿಕರು ಮಧ್ಯವರ್ತಿಗಳ ಮೇಲೆ ಅವಲಂಬಿತರಾಗದೇ ತಮ್ಮ ವ್ಯಾಪ್ತಿಯ ಸೇವಾ ಕೇಂದ್ರಗಳಿಗೆ ಖುದ್ದಾಗಿ ಹೋಗಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ, ಉಚಿತವಾಗಿ ಯೋಜನೆಗೆ ನೋಂದಣಿ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
‘ತಾಲ್ಲೂಕಿನ ಗ್ರಾಮೀಣ ಪ್ರದೇಶದ ಫಲಾನುಭವಿಗಳು ಗ್ರಾಮ ಒನ್ ಅಥವಾ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಮತ್ತು ಪಟ್ಟಣದ ಫಲಾನುಭವಿಗಳು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ. ನೋಂದಣಿಗೆ ಕೊನೆಯ ದಿನಾಂಕ ನಿಗದಿಯಾಗಿಲ್ಲ’ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.