ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಆಸ್ಪತ್ರೆಯಾಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ

ಆರೋಗ್ಯ ಸಚಿವ ಸುಧಾಕರ್‌ಗೆ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಮನವಿ
Last Updated 17 ಮೇ 2021, 11:48 IST
ಅಕ್ಷರ ಗಾತ್ರ

ವಿಜಯಪುರ: ನಗರದಲ್ಲಿ ನಿರ್ಮಾಣವಾಗಿರುವ ಅತ್ಯಾಧುನಿಕ ಸೌಲಭ್ಯವುಳ್ಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡವನ್ನು 100 ಬೆಡ್‌ಗಳ ಕೋವಿಡ್ ಆಸ್ಪತ್ರೆಯಾಗಿ ಮಾರ್ಪಡಿಸಿ, ವೈದ್ಯ ಸಿಬ್ಬಂದಿಯನ್ನು ಶೀಘ್ರವಾಗಿ ನಿಯೋಜಿಸುವ ಮೂಲಕ ಸಾರ್ವಜನಿಕರ ಉಪಯೋಗಕ್ಕೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಒತ್ತಾಯಿಸಿದರು.

ಜಿಲ್ಲೆಯ ಶಾಸಕರ ನಿಯೋಗದೊಂದಿಗೆ ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ. ಸುಧಾಕರ್ ಅವರನ್ನು ಸೋಮವಾರ ಭೇಟಿ ಮಾಡಿದ ಸಚಿವೆ ಜೊಲ್ಲೆ, ಕೋವಿಡ್‌ ನಿಯಂತ್ರಣ ಮತ್ತು ಚಿಕಿತ್ಸೆಗೆ ಸಂಬಂಧಿಸಿದಂತೆ ಜಿಲ್ಲೆಗೆ ಅಗತ್ಯವಿರುವ ವಿವಿಧ ಸೌಲಭ್ಯಗಳನ್ನು ಆದ್ಯತೆ ಮೇಲೆ ಒದಗಿಸುವಂತೆ ಮನವಿ ಸಲ್ಲಿಸಿದರು.

ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿವೆ ಮತ್ತು ಹೊಸದಾಗಿ ಬ್ಲ್ಯಾಕ್ ಪಂಗಸ್ ಕಾಯಿಲೆ ಕಾಣಿಸಿಕೊಳ್ಳುತ್ತಿದೆ ಇದರ ಚಿಕಿತ್ಸೆಗೆ ಸೂಕ್ತವಾದ ತಜ್ಞ ವೈದ್ಯರ ಅವಶ್ಯಕತೆ ಇದ್ದು ಕೂಡಲೇ ತಜ್ಞ ವೈದ್ಯರನ್ನು ನೇಮಕ ಮಾಡಬೇಕು ಎಂದರು.

ಜಿಲ್ಲೆಯ ಎಲ್ಲ ತಾಲ್ಲೂಕು ಹಾಗೂ ವಿವಿಧ ಹಳ್ಳಿಗಳಿಗೆ ಅಧಿಕಾರಿಗಳೊಂದಿಗೆ ನಾನೇ ಖುದ್ದಾಗಿ ಭೇಟಿ ನೀಡಿದ ವೇಳೆ ವೆಂಟಿಲೇಟರ್ ಬೆಡ್, ಆಕ್ಸಿಜನ್ ಬೆಡ್ ಸಮಸ್ಯೆ, ಅಗತ್ಯ ತಾಂತ್ರಿಕ ಸಿಬ್ಬಂದಿ ಅವಶ್ಯಕತೆ, ರೆಮ್‌ ಡಿಸಿವಿರ್ ಲಸಿಕೆಗೆ ಹೆಚ್ಚಿನ ಬೇಡಿಕೆ ಕಂಡುಬಂದಿದ್ದು, ಇವುಗಳನ್ನು ಆದ್ಯತೆ ಮೇಲೆ ಒದಗಿಸುವಂತೆ ಆರೋಗ್ಯ ಸಚಿವರಿಗೆ ಜಿಲ್ಲೆ ಮನವಿ ಸಲ್ಲಿಸಿದರು.

ಜಿಲ್ಲೆಯ 13 ತಾಲ್ಲೂಕುಗಳ ಪೈಕಿ 4 ತಾಲ್ಲೂಕುಗಳಲ್ಲಿ ಮಾತ್ರ ತಾಲ್ಲೂಕು ಆಸ್ಪತ್ರೆ ಇದ್ದು, ಉಳಿದ 9 ತಾಲ್ಲೂಕಿನಲ್ಲಿ ತಾಲ್ಲೂಕು ಆಸ್ಪತ್ರೆ ಮಂಜೂರು ಮಾಡಬೇಕು ಹಾಗೂ ಶೀಘ್ರವೇ ಕಾಮಗಾರಿ ಪ್ರಾರಂಭಿಸಬೇಕು ಎಂದು ಹೇಳಿದರು.

ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ವೆಂಟಿಲೇಟರ್ ಬೆಡ್, ಆಕ್ಸಿಜನ್ ಬೆಡ್ ಹಾಗೂ ಸೂಕ್ತ ತಜ್ಞ ವೈದ್ಯರು ಹಾಗೂ ತಂತ್ರಜ್ಞರನ್ನು ನೇಮಕ ಮಾಡಬೇಕು ಹಾಗೂ ಅವರಿಗೆ ಸೂಕ್ತವಾದ ತರಬೇತಿ ನೀಡಬೇಕು ಎಂದು ಹೇಳಿದರು.

ಕೂಡಗಿ ಎನ್. ಟಿ. ಪಿ. ಸಿ ಘಟಕದಲ್ಲಿ ಅಗತ್ಯ ಮೂಲ ಸೌಲಭ್ಯಗಳನ್ನು ಒಳಗೊಂಡ 100 ಬೆಡ್‌ಗಳ ತಾತ್ಕಾಲಿಕ ಆಸ್ಪತ್ರೆ ನಿರ್ಮಿಸಲು ಎನ್. ಟಿ. ಪಿ. ಸಿ ಮುಖ್ಯಸ್ಥರಿಗೆ ಸೂಚನೆ ನೀಡಬೇಕು ಎಂದು ಮನವಿ ಮಾಡಿದರು.

ಜಿಲ್ಲೆಯಲ್ಲಿ 81 ವಿವಿಧ ವೃಂದದ ತಜ್ಞ ವೈದ್ಯರ ಅವಶ್ಯಕತೆ ಇದ್ದು, ಕೂಡಲೇ ವೈದ್ಯರನ್ನು ನೇಮಕ ಮಾಡಿಕೊಳ್ಳಬೇಕು ಎಂದು ಬೇಡಿಕೆ ಸಲ್ಲಿಸಿದರು.

ಸಿಂದಗಿ ಹಾಗೂ ತಾಳಿಕೋಟೆ ತಾಲ್ಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಘಟಕ ನಿರ್ಮಿಸಬೇಕು ಹಾಗೂ ರೆಮ್‌ ಡಿಸಿವಿರ್ ಲಸಿಕೆಗೆ ಹೆಚ್ಚಿನ ಬೇಡಿಕೆಯಿದ್ದು, ಬೇಡಿಕೆ ನೀಗಿಸಲು ಅಗತ್ಯ ಲಸಿಕೆಗಳನ್ನು ಸರಬರಾಜು ಮಾಡಬೇಕು ಎಂದು ಮನವಿ ಸಲ್ಲಿಸಿದರು.

ನಿಯೋಗದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ, ವಿಧಾನ ಪರಿಷತ್‌ ಸದಸ್ಯ ಅರುಣ್ ಶಹಾಪುರ, ಲಿಂಬೆ ಅಭಿವೃದ್ದಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪುರ ಇದ್ದರು.

***

‘ಆಧಾರ್ ಕಾರ್ಡ್ ಇಲ್ಲದ ಹಿರಿಯರಿಗೂ ಲಸಿಕೆ’

ವಿಜಯಪುರ: ಆಧಾರ್ ಕಾರ್ಡ್ ಇಲ್ಲದೆ ಇರುವ ಹಿರಿಯ ನಾಗರಿಕರಿಗೆ ಆದ್ಯತೆಯ ಮೇರೆಗೆ ಕೋವಿಡ್ ಲಸಿಕೆ ನೀಡಲು ಆರೋಗ್ಯ ಸಚಿವರಿಗೆ ಮನವಿ ಮಾಡಲಾಗಿದ್ದು, ಶೀಘ್ರವೆ ಲಸಿಕೆ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ಸಮಗ್ರ ಮಕ್ಕಳ ರಕ್ಷಣಾ ಘಟಕದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ವರ್ಗದವರನ್ನು ಕೊರೊನಾ ಸೇನಾನಿಗಳೆಂದು ಪರಿಗಣಿಸಿ, ಅವರಿಗೂ ಲಸಿಕೆಯನ್ನು ನೀಡಬೇಕು ಹಾಗೂ ಹೈಕೋರ್ಟ್ ಆದೇಶದಂತೆ ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ಆದ್ಯತೆಯ ಮೇರೆಗೆ ಕೋವಿಡ್‌ ಲಸಿಕೆ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ಸಚಿವರಿಗೆ ಮನವಿ ಮಾಡಿರುವುದಾಗಿ ಹೇಳಿದರು.

ಎಲ್ಲ ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತ ಮಕ್ಕಳಿಗಾಗಿ ಬೆಡ್ ಕಾಯ್ದಿರಿಸುವಂತೆ ಮನವಿ ಮಾಡಿದ್ದು, ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT