ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರ್ಷದಲ್ಲೇ ವಿಮಾನ ಹಾರಾಟ ನಿಶ್ಚಿತ

ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ವಿಶ್ವಾಸ
Last Updated 13 ಜುಲೈ 2020, 13:38 IST
ಅಕ್ಷರ ಗಾತ್ರ

ವಿಜಯಪುರ: ನಗರ ಸಮೀಪದ ಬುರಣಾಪೂರ ಗ್ರಾಮದಲ್ಲಿ ನಿರ್ಮಾಣಗೊಳ್ಳಲಿರುವ ವಿಮಾನ ನಿಲ್ದಾಣದ ಕಾಮಗಾರಿಯನ್ನು ಒಂದು ವರ್ಷದಲ್ಲಿ ಪೂರ್ಣಗೊಳಿಸಿ, ವಿಮಾನ ಹಾರಾಟ ಆರಂಭಿಸಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ವಿಶ್ವಾಸ ವ್ಯಕ್ತಪಡಿಸಿದರು.

ವಿಮಾನ ನಿಲ್ದಾಣಕ್ಕಾಗಿ ಕಾಯ್ದಿರಿಸಿದ ಸ್ಥಳಕ್ಕೆ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಕಳೆದ ವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ವಿಮಾನ ನಿಲ್ದಾಣಕ್ಕಾಗಿ ₹220 ಕೋಟಿ ಅನುದಾನ ನೀಡಲು ಅನುಮೋದನೆ ನೀಡಲಾಗಿದೆ ಎಂದರು.

ಪ್ರಥಮ ಹಂತವಾಗಿ ₹ 95 ಕೋಟಿ ಅನುದಾನವನ್ನು ಕಾಯ್ದಿರಿಸಲಾಗಿದೆ. ಈಗಾಗಲೇ ಟೆಂಡರ್ ಕರೆಯಲಾಗಿದ್ದು, ಟೆಂಡರ್‌ ಪ್ರಕ್ರಿಯೆ ಪೂರ್ಣಗೊಳಿಸಲು ಎರಡು ತಿಂಗಳ ಕಾಲಾವಧಿ ನೀಡಲಾಗಿದೆ ಎಂದು ಹೇಳಿದರು.

ರಾಜ್ಯ ಸರ್ಕಾರವೇ ವಿಮಾನ ನಿಲ್ದಾಣ ನಿರ್ಮಿಸುವ ಸಂಪೂರ್ಣ ಜವಾಬ್ದಾರಿ ಹೊಂದಿದೆ. ಮುಂದಿನ ಒಂದು ವರ್ಷದ ಅವಧಿಯಲ್ಲಿ ವಿಮಾನ ನಿಲ್ದಾಣದ ಕಾಮಗಾರಿ ಪೂರ್ಣಗೊಳಿಸುವ ಉದ್ದೇಶ ಹೊಂದಿದ್ದು, ಎರಡನೇ ಹಂತದಲ್ಲಿ ಉಳಿದ ಕಾಮಗಾರಿಗಳು ಕೈಗೆತ್ತಿಕೊಳ್ಳಲಾಗುತ್ತದೆ ಎಂದರು.

ಕೇಂದ್ರ ಸರ್ಕಾರದ ಉಡಾನ್ ಯೋಜನೆಯಡಿ ಈ ನಿಲ್ದಾಣದಿಂದ ಎಟಿಆರ್ ಸಣ್ಣ ವಿಮಾನಗಳ ಹಾರಾಟಕ್ಕೆ ಅವಕಾಶ ದೊರೆಯಲಿದ್ದು, ಈ ಭಾಗದ ಜನತೆಯ ಬಹುವರ್ಷಗಳ ಬೇಡಿಕೆ ರಾಜ್ಯ ಸರ್ಕಾರ ಈಡೇರಿಸಿದೆ. ಇದಕ್ಕಾಗಿ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.

ಜಿಲ್ಲೆಯಲ್ಲಿ ಐತಿಹಾಸಿಕ ಸ್ಥಳಗಳು ಇರುವುದರಿಂದ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಈ ವಿಮಾನ ನಿಲ್ದಾಣದ ಮೂಲಕ ಆಗಮಿಸಲಿದ್ದಾರೆ. ಅಲ್ಲದೇ, ತೋಟಗಾರಿಕೆ ಉತ್ಪನ್ನಗಳನ್ನು ದೇಶ, ವಿದೇಶಕ್ಕೆ ರಫ್ತು ಮಾಡಲು ಅನುಕೂಲವಾಗಲಿದೆ. ಜಿಲ್ಲೆಯಲ್ಲಿ ಹೇರಳವಾಗಿ ನೀರು, ವಿದ್ಯುತ್‌, ಭೂಮಿ ಇರುವುದರಿಂದ ಭವಿಷ್ಯದಲ್ಲಿ ಜಿಲ್ಲೆಗೆ ಹೆಚ್ಚಿನ ಕೈಗಾರಿಕೆಗಳು ಬರಲಿದ್ದು, ಸ್ಥಳೀಯರಿಗೆ ಉದ್ಯೋಗ ಸಿಗಲಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಹಿಂದೆ ತಾವು ಸಚಿವರಾಗಿದ್ದಾಗಲೇ ಈ ನಿಲ್ದಾಣ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿತ್ತು. ಆದರೆ, ಹಿಂದಿನ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಇಚ್ಛಾಶಕ್ತಿಯ ಕೊರತೆಯಿಂದ ಸ್ಥಗಿತವಾಯಿತು. ಈಗ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮುತುವರ್ಜಿಯಿಂದ ಜಿಲ್ಲೆಗೆ ವಿಮಾನ ನಿಲ್ದಾಣ ನಿರ್ಮಾಣದ ಕನಸು ಸಾಕಾರಗೊಂಡಿದೆ ಎಂದರು.

ವಿಮಾನ ನಿಲ್ದಾಣದ ಪ್ರಸ್ತಾವಿತ ರನ್‌ವೇ ಸ್ಥಳ, ಕಟ್ಟಡ ನಿರ್ಮಾಣಕ್ಕಾಗಿ ಕಾಯ್ದಿರಿಸಿದ ಸ್ಥಳ, ಪಾರ್ಕಿಂಗ್ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಕಾರಜೋಳ ಅವರು ಅಧಿಕಾರಿಗಳಿಂದಮಾಹಿತಿ ಪಡೆದರು.

ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ, ಶಾಸಕ ಸೋಮನಗೌಡ ಪಾಟೀಲ ಸಾಸನೂರ, ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, ಜಿ.ಪಂ. ಸಿಇಒ ಗೋವಿಂದ ರೆಡ್ಡಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಮುಖ್ಯ ಎಂಜಿನಿಯರ್‌ ಎಸ್.ಎಫ್.ಪಾಟೀಲ್, ಬಿ.ವೈ.ಪವಾರ, ಉಪ ವ್ಯವಸ್ಥಾಪಕ ನಿರ್ದೇಶಕ ಅಬ್ದುಲ್ ಬಾರಿ, ಪಿಡಬ್ಲ್ಯುಡಿ ಕಾರ್ಯನಿರ್ವಾಹಕ ಎಂಜಿನಿಯರ್‌ ಬಿ.ಬಿ.ಪಾಟೀಲ, ಪ್ರಶಾಂತ್ ಗಿಡ್ಡಪ್ಪನಗೋಳ, ವಿ.ಎನ್.ಪಾಟೀಲ, ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್‌ ಮಜುಂದಾರ, ಹೆಸ್ಕಾಂನ ಅಧೀಕ್ಷಕ ಎಂಜಿನಿಯರ್‌ ಎಸ್.ಇ ಗೋಟ್ಯಾಳ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT