ಇಂಡಿ: ರಾಜ್ಯದ ಮುಖ್ಯಮಂತ್ರಿ ವಿರುದ್ಧ ಮಂಗಳವಾರ ನ್ಯಾಯಾಲಯ ನೀಡಿರುವ ಆದೇಶವನ್ನು ಗೌರವಿಸುತ್ತೇವೆ. ವಿರೋಧಿಗಳ ಷಡ್ಯಂತ್ರಕ್ಕೆ ಸೆಡ್ಡು ಹೊಡೆದು ಮುಂದಿನ ಹೋರಾಟಕ್ಕೆ ಅಣಿಯಾಗುತ್ತೇವೆ. ಮುಖ್ಯಮಂತ್ರಿಗೆ ಪಕ್ಷದ ಎಲ್ಲಾ ಶಾಸಕರು ಬೆಂಬಲಕ್ಕೆ ನಿಲ್ಲುತ್ತೇವೆ ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ಅವರು ಮಂಗಳವಾರ ಇಂಡಿ ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ರಾಜ್ಯದ ಜನ ಕಾಂಗ್ರೆಸ್ ಪಕ್ಷದ ಪರವಾಗಿ ಜನಾದೇಶ ನೀಡಿದ್ದಾರೆ. ಆದರೆ ಕೇಂದ್ರ ಸರ್ಕಾರ ಇಲ್ಲಸಲ್ಲದ ಆರೋಪ ಮಾಡಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ದಕ್ಕೆ ತರುವ ಕೆಲಸ ಮಾಡುತ್ತಿದೆ. ಇದನ್ನು ರಾಜ್ಯದ ಜನ ನೋಡುತ್ತಿದ್ದಾರೆ. ಒಬ್ಬ ನಿಷ್ಠಾವಂತ ಮುಖ್ಯಮಂತ್ರಿಯ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ. ಇದು ಸರಿಯಲ್ಲ ಎಂದರು.
ಪಕ್ಷದ ಶಾಸಕರೆಲ್ಲರೂ ಕೂಡಿಕೊಂಡು ಕೇಂದ್ರ ಸರ್ಕಾರದ ವಿರುದ್ದ ಹೋರಾಟ ಮಾಡುತ್ತೇವೆ. ಜಯ ಯಾವಾಗಲೂ ಸತ್ಯದ ಕಡೆ ಇರುತ್ತದೆ. ರಾಜ್ಯಪಾಲರು ತಮ್ಮ ವಿಶೇಷ ಗೌರವವನ್ನು ರಾಜಕೀಯಗೊಳಿಸಿಕೊಂಡಿರುವದನ್ನು ಖಂಡಿಸುವದಾಗಿ ಹೇಳಿದರು.
ಐಟಿ, ಇಡಿ ಮತ್ತು ಸಿಬಿಐ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ತನ್ನ ಕೈವಶ ಮಾಡಿಕೊಂಡಿದೆ ಎಂದು ಆರೋಪಿಸಿದರು.