ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ವೈರಸ್‍: ಹೋಮ್ ಕ್ವಾರಂಟೈನ್‍ನಲ್ಲಿ 41 ಜನ

ಕೊರೊನಾ ಪರೀಕ್ಷೆಗಾಗಿ 21 ಹೊಸ ಮಾದರಿ ಸಂಗ್ರಹ
Last Updated 7 ಏಪ್ರಿಲ್ 2020, 15:56 IST
ಅಕ್ಷರ ಗಾತ್ರ

ಯಾದಗಿರಿ: ಕೊರೊನಾ ವೈರಸ್‍ಗೆ ಸಂಬಂಧಿಸಿದಂತೆ ಜಿಲ್ಲೆಯಿಂದ ಕಳುಹಿಸಿದ್ದ ಒಟ್ಟು 21 ಮಾದರಿಗಳ ವರದಿ ಈಗಾಗಲೇ ನೆಗೆಟಿವ್ ಬಂದಿದ್ದು, ಕೊರೊನಾ ಪರೀಕ್ಷೆಗಾಗಿ ಜಿಲ್ಲೆಯಲ್ಲಿ ಮಂಗಳವಾರ ಮತ್ತೆ 21 ಮಾದರಿಗಳನ್ನು ಸಂಗ್ರಹಿಸಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರಕೇರಾ (ಕೆ) ಹಾಸ್ಟೆಲ್‍ನ ಇನ್‍ಸ್ಟಿಟ್ಯೂಶನಲ್ ಕ್ವಾರಂಟೈನ್‍ನಲ್ಲಿ 24 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ. ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಕೋವಿಡ್ –19 ದೃಢಪಟ್ಟಿಲ್ಲ. ವೈರಸ್ ತಡೆಗೆ ಜಿಲ್ಲಾಡಳಿತವು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರು ಆತಂಕಪಡಬಾರದು ಎಂದು ಮನವಿ ಮಾಡಿದ್ದಾರೆ.

ನಿಜಾಮುದ್ದೀನ್ ಸಭೆಗೆ ಹೋದವರ ಮಾಹಿತಿ ನೀಡಿ: ನಿಜಾಮುದ್ದೀನ್ ತಬ್ಲೀಗಿ ಮರ್ಕಜ್ ಸಭೆಯಲ್ಲಿ ಭಾಗವಹಿಸಿ ಯಾದಗಿರಿ ಜಿಲ್ಲೆಗೆ ವಾಪಸಾಗಿರುವ ಜನರು ಕಂಡುಬಂದಲ್ಲಿ ಜಿಲ್ಲಾಡಳಿತದ ಕಂಟ್ರೋಲ್ ರೂಮ್ ಸಹಾಯವಾಣಿ ಸಂಖ್ಯೆ 08473-253950 ಗೆ ಕರೆ ಮಾಡಿ ಮಾಹಿತಿ ನೀಡಲು ಹೆಚ್ಚುವರಿ ಜಿಲ್ಲಾಧಿಕಾರಿ ಕೋರಿದ್ದಾರೆ.

ಹೋಮ್ ಕ್ವಾರಂಟೈನ್‍ನಲ್ಲಿ 41 ಜನ: ಯಾದಗಿರಿ ತಾಲ್ಲೂಕಿನಲ್ಲಿ 30 ಜನ, ಶಹಾಪುರ ತಾಲ್ಲೂಕಿನಲ್ಲಿ 19 ಹಾಗೂ ಸುರಪುರ ತಾಲ್ಲೂಕಿನಲ್ಲಿ 22 ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 71 ಜನ ವಿದೇಶಗಳಿಂದ ಜಿಲ್ಲೆಗೆ ಮರಳಿ ಬಂದಿರುವ ಹಿನ್ನೆಲೆಯಲ್ಲಿ ಇವರನ್ನು ವೈದ್ಯಕೀಯ ತಪಾಸಣೆಗೊಳಪಡಿಸಲಾಗಿದೆ.

ಅವರಲ್ಲಿ ಯಾವುದೇ ರೋಗಲಕ್ಷಣಗಳು ಕಂಡುಬಂದಿರುವುದಿಲ್ಲ. ಅವರನ್ನು ಹೋಮ್ ಕ್ವಾರಂಟೈನ್‍ನಲ್ಲಿ ಇರಿಸಲಾಗಿತ್ತು. ಈ 71 ಜನರ ಪೈಕಿ ಒಟ್ಟು 30 ಜನ 28 ದಿನಗಳ ಅವಲೋಕನ ಅವಧಿಯನ್ನು ಪೂರ್ಣಗೊಳಿಸಿದ್ದು, ಬಾಕಿ 41 ಜನರನ್ನು ಮನೆಯಲ್ಲಿ ಪ್ರತ್ಯೇಕವಾಗಿರಿಸಲಾಗಿದೆ.

ವಿದೇಶಗಳಿಂದ ಬಂದವರನ್ನು ಮುಂಜಾಗ್ರತಾ ಕ್ರಮವಾಗಿ ದಿನಕ್ಕೆ 2 ಬಾರಿಯಂತೆ 14 ದಿನಗಳ ಕಾಲ ವೈದ್ಯಕೀಯ ತಂಡ ಭೇಟಿ ನೀಡಿ ತಪಾಸಣೆ ನಡೆಸುತ್ತಿದೆ. ಇವರ ಕುಟುಂಬದ ಸದಸ್ಯರ ಮೇಲೆಯೂ ನಿಗಾ ವಹಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ವೈರಸ್ ಸೋಂಕಿತರಿಗಾಗಿ ಯಾದಗಿರಿ ಸಾರ್ವಜನಿಕ ಆಸ್ಪತ್ರೆಯಲ್ಲಿ 15 ಹಾಗೂ ಹೊಸ ಜಿಲ್ಲಾಸ್ಪತ್ರೆಯಲ್ಲಿ 100 ಐಸೊಲೇಷನ್ ಬೆಡ್‍ಗಳ ವ್ಯವಸ್ಥೆ ಮಾಡಲಾಗುತ್ತಿದೆ. ಆರೋಗ್ಯ ಸಹಾಯವಾಣಿ-104 ಕ್ಕೆ ಬರುವ ಕರೆಗಳಿಗಾಗಿ 3 ಸಿಬ್ಬಂದಿಯನ್ನು ಮೀಸಲಿರಿಸಿದೆ. ಜಿಲ್ಲಾಡಳಿತದ ಕಂಟ್ರೋಲ್ ರೂಮ್ ಸಹಾಯವಾಣಿ ಸಂಖ್ಯೆ 08473-253950 ಗೆ 8 ಕರೆಗಳು ಬಂದಿವೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕರಿಗೆ ಮನವಿ:

ಕೋವಿಡ್-19 ಪೀಡಿತ ದೇಶಗಳಿಂದ ಹಿಂತಿರುಗಿರುವ ಅಥವಾ ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿರುವ ಯಾರಾದರೂ ಭಾರತಕ್ಕೆ ಹಿಂತಿರುಗಿದ ದಿನದಿಂದ 14 ದಿನಗಳವರೆಗೆ ರೋಗ ಲಕ್ಷಣಗಳು ಇರಲಿ ಅಥವಾ ಇಲ್ಲದಿರಲಿ ಮನೆಯಲ್ಲಿ ಪ್ರತ್ಯೇಕವಾಗಿರಬೇಕು ಹಾಗೂ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ವರದಿ ಮಾಡಿಕೊಳ್ಳಬೇಕು.

ಜಿಲ್ಲಾಡಳಿತದ ಕಂಟ್ರೋಲ್ ರೂಮ್ ಸಹಾಯವಾಣಿ ಅಥವಾ 24X7 ಉಚಿತ ಆರೋಗ್ಯ ಸಹಾಯವಾಣಿ 104ಕ್ಕೆ ಕರೆ ಮಾಡಬಹುದು ಎಂದು ತಿಳಿಸಿದ್ದಾರೆ.

ಸಾರ್ವಜನಿಕರು ವೈಯಕ್ತಿಕ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಕೆಮ್ಮುವಾಗ ಅಥವಾ ಸೀನುವಾಗ ಕರವಸ್ತ್ರ/ಟಿಶ್ಯೂ ಪೇಪರನ್ನು ಬಳಸಿ. ಕೈ ಸ್ವಚ್ಛಗೊಳಿಸುವ ದ್ರಾವಣ ಅಥವಾ ನೀರು ಮತ್ತು ಸೋಪು ಬಳಸಿ ಆಗಾಗ ಕೈಗಳನ್ನು ತೊಳೆದುಕೊಳ್ಳಿ ಮತ್ತು ಸಾಮಾಜಿಕವಾಗಿ ಗುಂಪು ಸೇರುವುದನ್ನು ಮಾಡಬಾರದು ಎಂದು ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT