ಸೋಮವಾರ, ಜನವರಿ 25, 2021
14 °C
88,000 ರೈತರಿಗೆ ನಷ್ಟ; ಅಧಿಕಾರಿಗಳು ರೈತರ ಸಮಸ್ಯೆಗಳಿಗೆ ಸ್ಪಂದಿಸಲು ಸಚಿವರ ಸೂಚನೆ

ಯಾದಗಿರಿ ಜಿಲ್ಲೆಯಲ್ಲಿ 77,000 ಹೆಕ್ಟೇರ್ ಬೆಳೆ ಹಾನಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ಜಿಲ್ಲೆಯಲ್ಲಿ ಜುಲೈ ತಿಂಗಳಿಂದ ಅಕ್ಟೋಬರ್ ತಿಂಗಳವರೆಗೆ ಸುರಿದ ಭಾರಿ ಮಳೆ ಹಾಗೂ ಪ್ರವಾಹದಿಂದಾಗಿ 77,000 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದ್ದು, 88,000 ರೈತರಿಗೆ ಇದರಿಂದ ಹಾನಿ ಸಂಭವಿಸಿದೆ. ರೈತರು ಕರೆ ಮಾಡಿದಾಗ ಅಧಿಕಾರಿಗಳು ಸ್ಪಂದಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್‌ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರವಾಹ ಹಾಗೂ ಅತಿವೃಷ್ಟಿಗೆ ಸಂಬಂಧಿಸಿದಂತೆ ಸೋಮವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಅವರು ಮಾತನಾಡಿದರು.

ವಾಡಿಕೆಗಿಂತ ಈ ಬಾರಿ ಹೆಚ್ಚಿನ ಮಳೆಯಾಗಿದ್ದು, ಮಹಾರಾಷ್ಟ್ರದಲ್ಲಿ ಸಂಭವಿಸಿದ ಪ್ರವಾಹವು ಜಿಲ್ಲೆಯಲ್ಲಿಯೂ ಹಾನಿಯುಂಟು ಮಾಡಿದೆ. ಜಿಲ್ಲೆಯಲ್ಲಿ ₹69 ಕೋಟಿ ಬೆಳೆ ಹಾನಿಗೆ ಪರಿಹಾರ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಬಗ್ಗೆ ತಯಾರಿಸಿದ ಜಂಟಿ ಸಮೀಕ್ಷೆಯ ವರದಿ ಪ್ರಕಾರ ₹69 ಕೋಟಿ ಹಾನಿಯಾಗಿರುವುದನ್ನು ಪತ್ತೆ ಮಾಡಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯ ರೋಜಾ ಹಾಗೂ ಶಿವನೂರು ಗ್ರಾಮಗಳ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಬೇಕು. ಅಧಿಕಾರಿಗಳು ಪ್ರವಾಹ ಹಾಗೂ ಭಾರಿ ಮಳೆಯಿಂದ ಸಂತ್ರಸ್ತರಾದವರಿಗೆ ಧೈರ್ಯ ತುಂಬಿ ಅವರಿಗೆ ಪರಿಹಾರ ಕಲ್ಪಿಸಿಕೊಡಬೇಕು. ಪ್ರವಾಹ ಹಾಗೂ ಅತಿವೃಷ್ಟಿಯಿಂದ ಹಾನಿಗೀಡಾದವರಿಗೆ ಪರಿಹಾರ ಕಲ್ಪಿಸಲು ಜಿಲ್ಲೆಯಲ್ಲಿ ಪ್ರವಾಹ ಹಾಗೂ ಅತಿವೃಷ್ಟಿಗೆ ಹಾನಿಗೊಳಗಾದ ಎಲ್ಲಾ ತಾಲ್ಲೂಕುಗಳಲ್ಲಿಯೂ ತಾರತಮ್ಯವಿಲ್ಲದೆ ಪರಿಹಾರದ ಮೊತ್ತ ಹಾಗೂ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.

ಜಿಲ್ಲೆಯ ರೈತರ ಒತ್ತಾಸೆಯಂತೆ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ 100 ಕ್ವಿಂಟಲ್‌ ಭತ್ತ ಖರೀದಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಹಾಗೂ ಸಂಬಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಯಾದಗಿರಿಯ ಬ್ರಿಜ್ ಕಂ ಬ್ಯಾರೇಜ್‌ಗಳಿಗೆ ಹೊಸ ಗೇಟ್‌ಗಳನ್ನು ಅಳವಡಿಸುವ ಕಾರ್ಯ ತುರ್ತಾಗಿ ಮಾಡಬೇಕು. ಈ ಹಿಂದೆ ಅನಾಹುತ ಸಂಭವಿಸಿದ್ದು ಕೃಷ್ಣ ಭಾಗ್ಯ ಜಲ ನಿಗಮದ ಅಧಿಕಾರಿಗಳು ಈ ಕುರಿತಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ನಿರ್ದೇಶನ ನೀಡಿದರು.

ಮುಂದಿನ ತಿಂಗಳಲ್ಲಿ ಕೆಡಿಪಿ ಸಭೆಯನ್ನು ಮಾಡಲಿದ್ದು, ಎಲ್ಲಾ ಅಧಿಕಾರಿಗಳು ಸೂಕ್ತ ಮಾಹಿತಿಯೊಡನೆ ಸಭೆಯಲ್ಲಿ ಹಾಜರಿರಲು ಸೂಚಿಸಿದರು.

ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್., ಮಾತನಾಡಿ, ಜಿಲ್ಲೆಯಲ್ಲಿ ಭಾರಿ ಮಳೆಯಾಗಿ ಲೋಕೋಪಯೋಗಿ ವ್ಯಾಪ್ತಿಯ ರಾಜ್ಯ ಹೆದ್ಧಾರಿ 56 ಕಿ.ಮೀ, ಜಿಲ್ಲಾ ಮುಖ್ಯರಸ್ತೆ 260 ಕಿ.ಮೀ, ಸೇತುವೆಗಳು 105 ಹಾನಿಯಾಗಿದ್ದು, ಒಟ್ಟಾರೆ 170 ಕೋಟಿ ಹಾನಿ ಸಂಭವಿಸಿದೆ. ಇದೀಗ ಸರ್ಕಾರದಿಂದ ₹10 ಕೋಟಿ ಬಿಡುಗಡೆಯಾಗಿದ್ದು, 34 ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಬೆಳೆ ಹಾನಿಗೆ ಸಂಬಂಧಿಸಿದಂತೆ ಹಂತ ಹಂತವಾಗಿ ಪರಿಹಾರ ಧನ ಬಿಡುಗಡೆಯಾಗಲಿದ್ದು, ಈ ವರೆಗೆ ₹3.52 ಕೋಟಿ ಬಿಡುಗಡೆಯಾಗಿದ್ದು, 5,300 ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮಾ ಮಾಡಲಾಗಿದೆ ಎಂದರು.

ಶಾಸಕರಾದ ಶರಣಬಸಪ್ಪಗೌಡ ದರ್ಶನಾಪುರ, ವೆಂಕಟರೆಡ್ಡಿಗೌಡ ಮುದ್ನಾಳ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಸನಗೌಡ ಯಡಿಯಾಪುರ, ಉಪಾಧ್ಯಕ್ಷೆ ಗಿರಿಜಮ್ಮ ಸದಾಶಿವಪ್ಪಗೌಡ, ಯೂಡಾ ಅಧ್ಯಕ್ಷ ಬಸವರಾಜ ಚಂಡರಕಿ, ಜಿಲಾಧಿಕಾರಿ ಡಾ.ರಾಗಪ್ರಿಯಾ ಆರ್., ಜಿಲ್ಲಾ ಪಂಚಾಯಿತಿ ಸಿಒಒ ಶಿಲ್ಪಾ ಶರ್ಮಾ, ಎಸ್ಪಿ ಋಷಿಕೇಶ ಭಗವಾನ್‌ ಸೋನವಣೆ, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ.ಜಿ ರಜಪೂತ, ಉಪವಿಭಾಗಾಧಿಕಾರಿ ಶಂಕರಗೌಡ ಸೋಮನಾಳ, ನಗರಸಭೆ ಅಧ್ಯಕ್ಷ ವಿಲಾಸ ಪಾಟೀಲ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

***

ಜಿಲ್ಲೆಯ ರೈತರು, ಜನಸಾಮಾನ್ಯರು ಅಧಿಕಾರಿಗಳಿಗೆ ಕರೆ ಮಾಡಿದಾಗ ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು. ನನಗೆ ಇಲ್ಲಿಂದ ಕರೆ ಬರದಂತೆ ಕಾರ್ಯ ನಿರ್ವಹಿಸಬೇಕು.

-ಪ್ರಭು ಚವ್ಹಾಣ್‌, ಜಿಲ್ಲಾ ಉಸ್ತುವಾರಿ ಸಚಿವ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು