ಬುಧವಾರ, ಮೇ 18, 2022
25 °C

ಆಧಾರ್-ಪಹಣಿ ಜೋಡಣೆ ಆಂದೋಲನಕ್ಕೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ‘ರೈತರ ಅನುಕೂಲಕ್ಕಾಗಿ ಒಂದೇ ಸೂರಿನಡಿ ಸಮಗ್ರ ಮಾಹಿತಿಯನ್ನು ದಾಖಲಿಸಲು ಸರ್ಕಾರವು ಫ್ರೂಟ್ಸ್ (FRUITS) ತಂತ್ರಾಂಶ ಅಭಿವೃದ್ಧಿ ಪಡಿಸಿದೆ. ರೈತರು ತಮ್ಮ ಜಮೀನಿಗೆ ಸಂಬಂಧಿಸಿದ ವಿವರಗಳನ್ನು ದಾಖಲಿಸುವ ಮೂಲಕ ನೋಂದಾಯಿಸಿಕೊಂಡು ಫ್ರೂಟ್ಸ್ ಗುರುತಿನ ಸಂಖ್ಯೆ (ಎಫ್ಐಡಿ ನಂಬರ್) ಪಡೆದುಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ರೈತರಿಗೆ ಮನವಿ ಮಾಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಧಾರ್-ಪಹಣಿ ಜೋಡಣೆ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದರು.

‘ಬೆಂಬಲ ಬೆಲೆ ಯೋಜನೆ, ಬೆಳೆ ವಿಮೆ, ಇತರೆ ಯೋಜನೆ ಅನುಷ್ಠಾನ ಪ್ರಕ್ರಿಯೆಯಲ್ಲಿ ರೈತರ ಜಮೀನಿನ ವಿವರಗಳನ್ನು ಪಡೆಯಲು ‘ಫ್ರೂಟ್ಸ್’ ತಂತ್ರಾಂಶ ಅಗತ್ಯವಿದ್ದು, ಇದರಲ್ಲಿ ರೈತರ ಜಮೀನಿನ ನಿಖರ ಹಾಗೂ ಸಂಪೂರ್ಣ ಮಾಹಿತಿ ಇರುತ್ತದೆ. ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ ಸೇರಿದಂತೆ ವಿವಿಧ ಇಲಾಖೆಗಳ ಯೋಜನೆಗಳಡಿ ಸೌಲಭ್ಯ ಪಡೆಯಲು ರೈತರ ಜಮೀನಿನ ವಿವರಗಳನ್ನು ‘ಫ್ರೂಟ್ಸ್’ ತಂತ್ರಾಂಶದಲ್ಲಿ ದಾಖಲಿಸಿ ರೈತರ ಗುರುತಿನ ಸಂಖ್ಯೆಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು’ ಎಂದು ಹೇಳಿದರು.

‘ರೈತರು ಅಗತ್ಯ ದಾಖಲೆಗಳಾದ ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ವಿವರ, ಆದಾಯ ಪ್ರಮಾಣ ಪತ್ರ, ಪರಿಶಿಷ್ಟ ಜಾತಿ, ಪರಿಶಿಷ್ಟ ರೈತರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರ, ಭಾವಚಿತ್ರಗಳನ್ನು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ, ನಾಡ ಕಚೇರಿ, ಗ್ರಾಮ ಪಂಚಾಯಿತಿ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗಳಿಗೆ ಭೇಟಿ ನೀಡಿ ತಮ್ಮ ಮಾಹಿತಿಗಳನ್ನು ಸಲ್ಲಿಸಿ ಎಫ್‌ಐಡಿ ನಂಬರ್ ಪಡೆದುಕೊಳ್ಳಬೇಕು’ ಎಂದರು.

‘ಗುರುತಿನ ಚೀಟಿಯಿಂದ ರೈತರು ಬೆಳೆ ಸಾಲ, ಪಿಎಂ ಕಿಸಾನ್ ಮುಂತಾದ ವಿವಿಧ ಯೋಜನೆಗಳಡಿ ಸಹಾಯಧನ ಪಡೆಯಲು ಕಚೇರಿಗಳಲ್ಲಿ ವ್ಯಯಿಸಬೇಕಾದ ಸಮಯವನ್ನು ಉಳಿಸಬಹುದು ಹಾಗೂ ರೈತರಿಗೆ ಇದು ಒಂದು ವ್ಯವಹಾರಿಕ ಗುರುತಿನ ಚೀಟಿಯಾಗುತ್ತದೆ’ ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ, ಉಪವಿಭಾಗಾಧಿಕಾರಿ ಶಂಕರಗೌಡ ಸೋಮನಾಳ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ದೇವಿಕಾ ಆರ್. ಸೇರಿದಂತೆ ಅಧಿಕಾರಿಗಳು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು