ಶುಕ್ರವಾರ, ನವೆಂಬರ್ 15, 2019
23 °C
ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್‌ರಿಂದ ರಾಷ್ಟ್ರ ಧ್ವಜಾರೋಹಣ

ಗಡಿ ಗ್ರಾಮಗಳಲ್ಲಿ ಕನ್ನಡ ಅನುಷ್ಠಾನಕ್ಕೆ ಕ್ರಮ: ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್

Published:
Updated:
Prajavani

ಯಾದಗಿರಿ: ‘ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಜಿಲ್ಲೆಯ ಗಡಿ ಗ್ರಾಮಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಕನ್ನಡವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗುತ್ತಿದೆ’ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಹೇಳಿದರು.

ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಶುಕ್ರವಾರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ನಗರಸಭೆ ಹಾಗೂ ಕನ್ನಡ ರಾಜ್ಯೋತ್ಸವ ದಿನಾಚರಣೆ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ 64ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

‘ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದಿಂದ ಸಾಂಸ್ಕೃತಿಕ ಕಾರ್ಯಕ್ರಮಗಳಿಗಾಗಿ 2018-19ನೇ ಸಾಲಿನಲ್ಲಿ ₹ 51 ಲಕ್ಷ ಬಿಡುಗಡೆಗೊಳಿಸಿದ್ದು, ಈ ಪೈಕಿ ಒಟ್ಟು 17 ಸಂಘ-ಸಂಸ್ಥೆಗಳಿಗೆ 1ನೇ ಕಂತಿನ ಅನುದಾನವಾಗಿ ₹ 45.90 ಲಕ್ಷ ನೀಡಿ ಕಾರ್ಯಕ್ರಮ ಯಶಸ್ವಿಗೊಳಿಸಲಾಗಿದೆ. ಅಲ್ಲದೇ, ಕನ್ನಡ ಸಂಸ್ಕೃತಿ ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಜಿಲ್ಲೆಯಲ್ಲಿ ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ, ಗಿರಿಜನ ಉತ್ಸವ, ಜನಪರ ಉತ್ಸವ ಹಮ್ಮಿಕೊಳ್ಳಲಾಗುತ್ತಿದೆ’ ಎಂದು ತಿಳಿಸಿದರು.

‘ಕರ್ನಾಟಕ ಕೇವಲ ಒಂದು ಭೂ ಪ್ರದೇಶಕ್ಕೆ ಮಾತ್ರ ಸೀಮಿತವಾಗಿಲ್ಲ. ಕನ್ನಡವೆಂದರೆ ಒಂದು ಸಂಸ್ಕೃತಿ, ಒಂದು ಜೀವನ ಪದ್ಧತಿ ಎಂಬ ವಿಶಾಲ ಅರ್ಥ ಹೊಂದಿದೆ. ಕನ್ನಡಕ್ಕೆ 8 ಜ್ಞಾನಪೀಠ ಪ್ರಶಸ್ತಿಗಳು ಸಂದಿರುವುದು ಹೆಮ್ಮೆಯ ವಿಷಯವಾಗಿದೆ’ ಎಂದು ಅಭಿಪ್ರಾಯಪಟ್ಟರು.

‘ಅತಿವೃಷ್ಟಿಯ ಕಾರಣ ಜಿಲ್ಲೆಯ ಕೃಷ್ಣಾ ಮತ್ತು ಭೀಮಾ ನದಿಗಳಲ್ಲಿ ಪ್ರವಾಹ ಉಂಟಾಗಿ, ಸಂಕಷ್ಟಕ್ಕೆ ಗುರಿಯಾದ ಜನರಿಗೆ ಸಾಂತ್ವನ ಹೇಳಿದ ಜಿಲ್ಲಾಧಿಕಾರಿಗಳು, ಸಂತ್ರಸ್ತರಿಗೆ ನೀಡಬಹುದಾದ ಎಲ್ಲ ಪರಿಹಾರಗಳನ್ನು ಕಲ್ಪಿಸಲು ಸರ್ಕಾರ ಬದ್ಧವಾಗಿದೆ’ ಎಂದು ಅಭಯ ನೀಡಿದರು.

‘ಆಡಳಿತದಲ್ಲಿ ಪಾರದರ್ಶಕತೆ ಮತ್ತು ಸಾರ್ವಜನಿಕರಿಗೆ ತ್ವರಿತಗತಿಯಲ್ಲಿ ಸೇವೆ ಒದಗಿಸುವ ದೃಷ್ಟಿಯಿಂದ ಜಿಲ್ಲಾಡಳಿತ ಭವನದಲ್ಲಿ ಇ-ಆಫೀಸ್ ಆರಂಭಿಸಲಾಗಿದೆ’ ಎಂದರು.

ಉತ್ತಮ ವಾತಾವರಣದ ನಗರ:
ಮಾಲಿನ್ಯ ನಿಯಂತ್ರಣ ಮಂಡಳಿಯು ಜಿಲ್ಲಾಡಳಿತ ಭವನ ಆವರಣದಲ್ಲಿ ಸತತ ಪರಿವೇಷ್ಟಕ ವಾಯು ಗುಣಮಟ್ಟ ಯಂತ್ರ ಸ್ಥಾಪಿಸಲಾಗಿದ್ದು, ಈ ಯಂತ್ರ ನೀಡುವ ಅಂಕಿ- ಅಂಶಗಳ ಆಧಾರದ ಮೇರೆಗೆ ಯಾದಗಿರಿ ನಗರವನ್ನು ದೇಶದಲ್ಲಿಯೇ ಉತ್ತಮ ವಾತಾವರಣ ಇರುವ ಪ್ರದೇಶವೆಂದು ಗುರುತಿಸಲಾಗಿದೆ’ ಎಂದರು.

ಆರೋಗ್ಯ ಕಾರ್ಡ್ ಮಾಡಿಸಿ:
ಆಯುಷ್ಮಾನ್ ಭಾರತ- ಆರೋಗ್ಯ ಕರ್ನಾಟಕ ಯೋಜನೆಯಡಿ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬದವರು ವರ್ಷದಲ್ಲಿ ₹ 5 ಲಕ್ಷದವರೆಗೆ ಉಚಿತವಾಗಿ ಚಿಕಿತ್ಸೆ ಪಡೆಯಬಹುದು. ಹೀಗಾಗಿ ಎಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬಗಳು ಆರೋಗ್ಯ ಕಾರ್ಡ್‌ ಮಾಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ನವೆಂಬರ್ 18 ಕೊನೆಯ ದಿನ:
ಮತದಾರರ ಪಟ್ಟಿ ಪರಿಶೀಲನಾ ಕಾರ್ಯಕ್ರಮ ಸೆಪ್ಟೆಂಬರ್ 1 ರಿಂದ ಪ್ರಾರಂಭವಾಗಿದ್ದು, ಜಿಲ್ಲೆಯಲ್ಲಿ ಒಟ್ಟು 9,83,239 ಮತದಾರರಿದ್ದಾರೆ. ಇವರಲ್ಲಿ 7,18,051 ಮತದಾರರು ತಮ್ಮ ಹೆಸರುಗಳನ್ನು ಪರಿಶೀಲಿಸಿಕೊಂಡಿದ್ದು, ಶೇ.73.03ರಷ್ಟು ಪ್ರಗತಿ ಸಾಧಿಸಲಾಗಿದೆ. ಉಳಿದ 2,65,188 ಮತದಾರರು ತಮ್ಮ ಹೆಸರು ಪರಿಶೀಲಿಸಿಕೊಳ್ಳಲು ನವೆಂಬರ್ 18 ಕೊನೆಯ ದಿನವಾಗಿದೆ’ ಎಂದರು.

ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ರಾಜಶೇಖರಗೌಡ ಪಾಟೀಲ ವಜ್ಜಲ್, ಉಪಾಧ್ಯಕ್ಷೆ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ, ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾ ಶರ್ಮಾ, ಎಸ್ಪಿ ಋಷಿಕೇಶ್ ಭಗವಾನ್ ಸೋನವಣೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಸಿದ್ಧಪ್ಪ ಹೊಟ್ಟಿ, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್, ಸಹಾಯಕ ಆಯುಕ್ತ ಶಂಕರಗೌಡ ಎಸ್.ಸೋಮನಾಳ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಸಂತೋಷ ಗೋಗೇರಿ, ಪೌರಾಯುಕ್ತ ರಮೇಶ ಸುಣಗಾರ, ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ ಇದ್ದರು.

ಪ್ರತಿಕ್ರಿಯಿಸಿ (+)