ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಶಿಷ್ಟರ ಅನುದಾನ ಖರ್ಚು ಮಾಡದಿದ್ದರೆ ಕ್ರಮ

ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್ ಎಚ್ಚರಿಕೆ
Last Updated 28 ಡಿಸೆಂಬರ್ 2018, 14:37 IST
ಅಕ್ಷರ ಗಾತ್ರ

ಯಾದಗಿರಿ: ‘ಅನುಸೂಚಿತ ಜಾತಿಗಳ ಉಪ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆ (ಎಸ್‌ಸಿಎಸ್‌ಪಿ, ಟಿಎಸ್‌ಪಿ) ಅಡಿ ಬಿಡುಗಡೆಯಾದ ಅನುದಾನವನ್ನು ಪ್ರತಿಶತ ಖರ್ಚು ಮಾಡದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಮಟ್ಟದ ಅನುಸೂಚಿತ ಜಾತಿಗಳ ಉಪ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆ (ಎಸ್‌ಸಿಎಸ್‌ಪಿ, ಟಿಎಸ್‌ಪಿ) ಅನುಷ್ಠಾನ ಕುರಿತ ಪರಿಶೀಲನಾ ಹಾಗೂ ಅಲೆಮಾರಿ,ಅರೆ ಅಲೆಮಾರಿ ಜನಾಂಗದ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.

‘ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅನುದಾನವನ್ನು ಕಾಲಮಿತಿಯಲ್ಲಿ ಖರ್ಚು ಮಾಡಬೇಕು. ಅನುದಾನ ಖರ್ಚು ಮಾಡದ ಅಧಿಕಾರಿಗಳ ವಿರುದ್ಧ ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಯ್ದೆ-2013ರ ಅಡಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಅವಕಾಶ ಇದೆ. ಆದ್ದರಿಂದ ಅಧಿಕಾರಿಗಳು ಎಚ್ಚೆತ್ತು ಅನುದಾನವನ್ನು ನಿಯಮಾನುಸಾರ ತುರ್ತಾಗಿ ಖರ್ಚು ಮಾಡಬೇಕು. ಅರ್ಹ ಫಲಾನುಭವಿಗಳಿಗೆ ವೈಯಕ್ತಿಕ ಸವಲತ್ತುಗಳನ್ನು ಮತ್ತು ಮೂಲ ಸೌಕರ್ಯಗಳಾದ ರಸ್ತೆ, ಚರಂಡಿ, ಕಾಲುವೆ ಒದಗಿಸಬೇಕು’ ಎಂದರು.

‘ಜಿಲ್ಲೆಯಲ್ಲಿ ಎಸ್‌ಸಿಎಸ್‌ಪಿ, ಟಿಎಸ್‌ಪಿ ಅಡಿ ಎಲ್ಲಾ ಇಲಾಖೆಗಳು ತೀರಾ ಕಡಿಮೆ ಪ್ರಗತಿ ಸಾಧಿಸಿದ್ದು, ಬರುವ ಜ.15ರೊಳಗೆ ಬಿಡುಗಡೆಯ ಸಂಪೂರ್ಣ ಅನುದಾನವನ್ನು ಖರ್ಚು ಮಾಡಬೇಕು. ಜನವರಿ ೨೦ರಂದು ನಡೆಯುವ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಕುರಿತು ವರದಿ ಹಾಜರುಪಡಿಸಬೇಕು. ಬಿಡುಗಡೆಯಾದ ಅನುದಾನಕ್ಕೆ ಪ್ರಗತಿ ಸಾಧಿಸುವುದಕ್ಕಿಂತಲೂ ನಿಗದಿಯಾದ ಅನುದಾನ ಮತ್ತು ಗುರಿಯನ್ನು ಸಾಧಿಸಲು ಅಧಿಕಾರಿಗಳು ಶ್ರಮಿಸಬೇಕು’ ಎಂದು ಸಲಹೆ ನೀಡಿದರು.

ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ, ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ, ಹೈದರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ, ಸಣ್ಣ ನೀರಾವರಿ ಇಲಾಖೆಗಳು ನಿರ್ವಹಿಸುತ್ತಿರುವ ಸಿವಿಲ್ ಕಾಮಗಾರಿಗಳನ್ನು ಕಡ್ಡಾಯವಾಗಿ ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ತಾಲ್ಲೂಕು ಮಟ್ಟದ ಅಧಿಕಾರಿಗಳಿಂದ ದೃಢೀಕರಣ ಪಡೆದು ನಿರ್ವಹಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನವಸತಿ ಇಲ್ಲದ ಪ್ರದೇಶಗಳಲ್ಲಿ ಸಿವಿಲ್ ಕಾಮಗಾರಿಗಳನ್ನು ನಿರ್ವಹಿಸಿದಲ್ಲಿ ಎಸ್‌ಸಿಎಸ್‌ಪಿ,ಟಿಎಸ್‌ಪಿ ಕಾಯ್ದೆ ಅಷ್ಟೇ ಅಲ್ಲದೆ, ಜಾತಿ ದೌರ್ಜನ್ಯ ಕಾಯ್ದೆ-1989ರ ಅಡಿಯಲ್ಲಿಯೂ ಪ್ರಕರಣ ದಾಖಲಿಸಲು ನಿರ್ದೇಶಿಸುವುದಾಗಿ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ, 2017–18ಮತ್ತು 2018–19ನೇ ಸಾಲಿನಲ್ಲಿ ಕೈಗೊಂಡಿರುವ ಕಾಮಗಾರಿಗಳ ಪಟ್ಟಿಯನ್ನು ಪರಿಶೀಲನೆಗೆ ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸಲು ಸೂಚಿಸಿದರು.

ರಾಜ್ಯ ವಲಯದ ಅನುದಾನ ಬಿಡುಗಡೆಯಾಗಿದ್ದರೂ ಸಹ ಸಭೆಗೆ ನೀಡಿರುವ ಮಾಹಿತಿಯಲ್ಲಿ ನಮೂದಿಸದೆ ನಿರ್ಲಕ್ಷ್ಯ ತೋರಿರುವುದನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಧಿಕಾರಿಗಳು, ಜಿಲ್ಲಾ ಖಜಾನೆಯಿಂದ ಸಂಬಂಧಿಸಿದ ಮಾಹಿತಿಯನ್ನು ಪಡೆದು ನಿರ್ಲಕ್ಷ್ಯ ತೋರಿದ ಮತ್ತು ತಪ್ಪು ಮಾಹಿತಿ ನೀಡಿರುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಎಚ್ಚರಿಸಿದರು.
ಕೇಂದ್ರ ಮತ್ತು ರಾಜ್ಯ ವಲಯದ ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನ ಇದುವರೆಗೆ ಬಿಡುಗಡೆಯಾಗದಿದ್ದಲ್ಲಿ ತಮ್ಮ ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಮೂಲಕ ಎರಡು ದಿನಗಳಲ್ಲಿ ಪತ್ರ ಬರೆಸಲು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ನಿರ್ದೇಶನ ಮಾಡಿದರು.

ಸಭೆಗೆ ಗೈರಾದ ಮೀನುಗಾರಿಕೆ, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ, ಪ್ರವಾಸೋದ್ಯಮ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಎಂ.ಎಸ್.ಅಲ್ಲಾಬಕಷ ಅವರಿಗೆ ನಿರ್ದೇಶಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕವಿತಾ ಎಸ್.ಮನ್ನಿಕೇರಿ, ಉಪ ವಿಭಾಗಾಧಿಕಾರಿ ಡಾ.ಬಿ.ಎಸ್. ಮಂಜುನಾಥ ಸ್ವಾಮಿ, ನಗರಸಭೆ ಪೌರಾಯುಕ್ತಸಂಗಪ್ಪ ಉಪಾಸೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT