ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹತ್ವಾಕಾಂಕ್ಷಿ ಜಿಲ್ಲೆ: ರ್‍ಯಾಕಿಂಗ್‌ ಉತ್ತಮಗೊಳ್ಳಲಿ: ಡಿಸಿ ಡಾ.ರಾಗಪ್ರಿಯಾ ಆರ್.

ಮಹತ್ವಾಕಾಂಕ್ಷಿ ಜಿಲ್ಲೆಯ ಸೂಚ್ಯಂಕಗಳ ಪರಿಶೀಲನಾ ಸಭೆ
Last Updated 7 ಸೆಪ್ಟೆಂಬರ್ 2021, 3:47 IST
ಅಕ್ಷರ ಗಾತ್ರ

ಯಾದಗಿರಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಜಿಲ್ಲೆಗಳ ಯೋಜನೆಯಡಿ ಆಯ್ಕೆಯಾಗಿರುವ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ನಿಗದಿ ಪಡಿಸಲಾಗಿರುವ ಮಾನದಂಡಗಳ ಏರಿಕೆಗೆ ಕ್ರಮವಹಿಸಿ ರ್‍ಯಾಕಿಂಗ್‌ನಲ್ಲಿ ಜಿಲ್ಲೆಯನ್ನು ಮತ್ತಷ್ಟು ಉತ್ತಮ ಪಡಿಸುವಂತೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಮಹತ್ವಾಕಾಂಕ್ಷಿ ಜಿಲ್ಲೆಯ ಸೂಚ್ಯಂಕಗಳ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಶಿಕ್ಷಣ, ಆರೋಗ್ಯ, ಕೃಷಿ, ಕೌಶಲಾಭಿವೃದ್ಧಿ ಸೇರಿದಂತೆ ವಿವಿಧ ಸೂಚ್ಯಂಕಗಳನ್ನು ಏರಿಕೆಗೆ ಮಹತ್ವಾಕಾಂಕ್ಷಿ ಜಿಲ್ಲೆಗಳ ಯೋಜನೆಯಡಿ ಮಾನದಂಡಗಳನ್ನು ನಿಗದಿ ಪಡಿಸಲಾಗಿದೆ. ಆದಕಾರಣ ಸಂಬಂಧಿಸಿದ ಇಲಾಖೆಗಳ ವ್ಯಾಪ್ತಿಯಡಿ ಕೈಗೊಳ್ಳಬೇಕಾದ ಅಗತ್ಯ ಕಾರ್ಯ ಚಟುವಟಿಕೆಗಳನ್ನು ಕೈಗೊಂಡು ನಿಗದಿಪಡಿಸಿದ ಮಾನದಂಡಗಳ ಸೂಚ್ಯಂಕಗಳಲ್ಲಿ ಪ್ರಗತಿ ಸಾಧಿಸಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಶ್ರಮಿಸಬೇಕು ಎಂದು ತಿಳಿಸಿದರು.

ಕೋವಿಡ್- 19 ಸೋಂಕಿನ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಕೊರೊನಾ ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕಾದ ಕ್ರಮಗಳ ಜಾಗೃತಿ ಮೂಡಿಸಬೇಕೆಂದು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿಗೆ ನಿರ್ದೇಶನ ನೀಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಮಾತನಾಡಿದ ಜಿಲ್ಲಾಧಿಕಾರಿ, ಎಲ್ಲಾ ಶಾಲೆಗಳಲ್ಲಿಯೂ ಶೌಚಾಲಯ, ಕುಡಿಯುವ ನೀರು ಪೂರೈಕೆ ಮಾಡಿ ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ ನೋಡಿಕೊಳ್ಳಿ ಎಂದು ಶಿಕ್ಷಣಾಧಿಕಾರಿಗಳಿಗೆ ಸೂಚಿಸಿದರು.

ಕೃಷಿ ಕ್ಷೇತ್ರಕ್ಕೆ ಕುರಿತಂತೆ ನಡೆದ ಚರ್ಚೆಯಲ್ಲಿ ಹನಿ ನೀರಾವರಿ, ತುಂತುರು ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಅದರಂತೆ ಬೆಳೆ ವಿಮೆಗೆ ಹೆಚ್ಚಿನ ರೈತರನ್ನು ನೋಂದಾಯಿಸಿಕೊಳ್ಳಬೇಕು. ರೈತ ಸಂಪರ್ಕ ಕೇಂದ್ರಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು.

ಕೌಶಲ ಅಭಿವೃದ್ಧಿ ಇಲಾಖೆ ವತಿಯಿಂದ ಉದ್ಯೋಗಾಸಕ್ತರಿಗೆ, ನಿರುದ್ಯೋಗಿಗಳಿಗೆ ಕೌಶಲಗಳ ಕುರಿತು ತರಬೇತಿ ನೀಡಬೇಕು. ಆ ಮೂಲಕ ಸ್ವ–ಉದ್ಯೋಗ ಕೈಗೊಳ್ಳಲು ನೆರವಾಗಬೇಕು ಎಂದರು.

ಬ್ಯಾಂಕ್‌ಗಳ ಮೂಲಕ ನಿರುದ್ಯೋಗಿಗಳಿಗೆ ಉದ್ಯಮ ಸ್ಥಾಪನೆಗೆ ಸ್ವ- ಉದ್ಯೋಗಕ್ಕೆ ಅಗತ್ಯ ಸಾಲ ಸೌಲಭ್ಯ ನೀಡಲು ಎಲ್ಲಾ ಬ್ಯಾಂಕುಗಳಿಗೂ ನಿರ್ದೇಶನ ನೀಡುವಂತೆ ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್‌ಗೆ ತಿಳಿಸಿದರು.

ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಇಂದುಮತಿ ಕಾಮಶೆಟ್ಟಿ, ಮಹಿಳಾ ಮತ್ತು ಮಕ್ಕಳ ಇಲಾಖೆ ಉಪನಿರ್ದೇಶಕ ಪ್ರಭಾಕರ್ ಎಸ್.ಕವಿತಾಳ, ಡಿಡಿಪಿಐ ಶಾಂತಗೌಡ ಪಾಟೀಲ, ಜಂಟಿ ಕೃಷಿ ನಿರ್ದೇಶಕ ಅಭಿದ್ ಎಸ್.ಎಸ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT