ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಾ.ಬಾಬು ಜಗಜೀವನರಾಂ ಜೀವನ ಸ್ಫೂರ್ತಿದಾಯಕ

112ನೇ ಜಯಂತ್ಯುತ್ಸವದಲ್ಲಿ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಅಭಿಮತ
Last Updated 5 ಏಪ್ರಿಲ್ 2019, 10:38 IST
ಅಕ್ಷರ ಗಾತ್ರ

ಯಾದಗಿರಿ: ‘ಅಸ್ಪೃಶ್ಯತೆ, ಸಾಮಾಜಿಕ ವ್ಯವಸ್ಥೆಯಲ್ಲಿನ ತಾರತಮ್ಯದ ವಿರುದ್ಧ ಹೋರಾಡಿದ ಧೀಮಂತ ನಾಯಕ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಂ ಅವರ ಜೀವನ ನಮ್ಮೆಲ್ಲರಿಗೂ ಸ್ಫೂರ್ತಿದಾಯಕವಾಗಿದೆ’ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್ ಹೇಳಿದರು.

ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಹಾಗೂ ಡಾ.ಬಾಬು ಜಗಜೀವನರಾಮ್ ರವರ ಜಯಂತ್ಯುತ್ಸವ ಸಮಿತಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಡಾ.ಬಾಬು ಜಗಜೀವನರಾಂ ಅವರ 112ನೇ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದರು.

‘ಡಾ.ಬಾಬು ಜಗಜೀವನರಾಂ ಅವರು ಶಾಲೆ ಓದುತ್ತಿರುವಾಗ ತಮ್ಮ ಶಾಲೆಯಲ್ಲಿ ಮುಖ್ಯೋಪಾಧ್ಯಾಯರು ಕುಡಿಯುವ ನೀರು ನೀಡುವಲ್ಲಿ ಮಾಡುತ್ತಿದ್ದ ತಾರತಮ್ಯವನ್ನು ಖಂಡಿಸಿದ್ದರು. ಜಾತಿ ವ್ಯವಸ್ಥೆಯ ವಿರುದ್ಧ ಶಾಲಾ ದಿನಗಳಿಂದಲೇ ಹೋರಾಟದ ಮೂಲಕ ಪ್ರತಿಭಟಿಸಿದರು. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜತೆಗೂಡಿ ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದರು’ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಕವಿತಾ ಎಸ್.ಮನ್ನಿಕೇರಿ ಮಾತನಾಡಿ,‘ಸಾಮಾಜಿಕ ವ್ಯವಸ್ಥೆಯಲ್ಲಿ ಎಲ್ಲರಿಗೂ ನ್ಯಾಯ ಸಿಕ್ಕಿದೆ ಎಂದರೆ ಅದು ಇಂತಹ ನಾಯಕರ ಪ್ರಯತ್ನದ ಫಲವಾಗಿದೆ. ಆದ್ದರಿಂದ ಮಹಾನ್ ನಾಯಕರ ತತ್ವಾದರ್ಶಗಳನ್ನು ನಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಣೆ ಮಾತನಾಡಿ,‘ಡಾ.ಬಾಬು ಜಗಜೀವನರಾಂ ಅವರು ಅಂದಿನ ಸಾಮಾಜಿಕ ವ್ಯವಸ್ಥೆಯಲ್ಲಿ ಉತ್ತಮ ಶಿಕ್ಷಣ ಪಡೆಯುವ ಮೂಲಕ ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದ ಮಹಾನ್ ಪುರುಷರಾಗಿದ್ದಾರೆ. ಇಂತಹ ಮಹಾತ್ಮರ ತತ್ವಗಳನ್ನು ಅಳವಡಿಸಿಕೊಂಡಾಗ ಸದೃಢ ದೇಶದ ನಿರ್ಮಾಣ ಸಾಧ್ಯವಾಗುತ್ತದೆ’ ಎಂದು ಹೇಳಿದರು.

ಸರ್ಕಾರಿ ಪದವಿ ಮಹಾವಿದ್ಯಾಲಯದ ಉಪನ್ಯಾಸಕರಾದ ಸರ್ವೋದಯ ಶಿವಪುತ್ರಪ ಡಾ.ಬಾಬು ಜಗಜೀವನರಾಂ ಅವರ ಜೀವನ ಸಾಧನೆಯ ಕುರಿತು ಉಪನ್ಯಾಸ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ,ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಎಂ.ಎಸ್.ಅಲ್ಲಾಬಕಷ ನಗರಸಭೆಯ ಪೌರಾಯುಕ್ತರ ಮೇಶ ಸುಣಗಾರ ಇದ್ದರು.

ಉಪನ್ಯಾಸಕಿ ಡಾ.ಜ್ಯೋತಿಲತಾ ತಡಿಬಿಡಿಮಠ ಕಾರ್ಯಕ್ರಮ ನಿರೂಪಿಸಿದರು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ವಂದಿಸಿದರು.

ಬಿಜೆಪಿ ಕಚೇರಿ:
‘ದೇಶ ಕಂಡ ಅತ್ಯುತ್ತಮ ನಾಯಕರಲ್ಲಿ ಒಬ್ಬರಾದ ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನರಾಂ ಅವರ ಸ್ಮರಣೆ ಪ್ರತಿಯೊಬ್ಬರಲ್ಲೂ ಸಾಮಾಜಿಕ ಬದ್ಧತೆಯನ್ನು ಪ್ರೇರೇಪಿಸುತ್ತದೆ’ ಎಂದು ಶಾಸಕ ವೆಂಕಟರೆಡ್ಡಿ ಮುದ್ನಾಳ ಹೇಳಿದರು.

ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬಾಬು ಜಗಜೀವನರಾಂ 112ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಬಾಬು ಜಗಜೀವನರಾಂ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು

‘ಅಧಿಕಾರ ಚುಕ್ಕಾಣಿ ಹಿಡಿದ ವೇಳೆ ಉತ್ತಮ ವ್ಯಕ್ತಿಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅನುಕೂಲವಾಗುವ ಯೋಜನೆಗಳನ್ನು ರೂಪಿಸಿ ಜನಮಾನಸದಲ್ಲಿ ಸದಾ ಸ್ಮರಣೀಯರಾಗುತ್ತಾರೆ ಎಂಬುದಕ್ಕೆ ಬಾಬು ಜಗಜೀವನರಾಂ ಸಾಕ್ಷಿಯಾಗಿದ್ದಾರೆ. ಬಹು ಸಂಸ್ಕೃತಿಯ ದೇಶ ನಮ್ಮದು. ಸಹ ಜೀವನ, ಸಹಬಾಳ್ವೆಯಿಂದ ನಾವು ಸಾಧ್ಯವಾದಷ್ಟು ಅಶಕ್ತರ ಕಣ್ಣೀರು ಒರೆಸುವಂತಾಗಬೇಕು. ಬಾಬುಜೀ ಅವರ ಸಾಮಾಜಿಕ ನ್ಯಾಯದ ಪರಿಕಲ್ಪನೆ, ಅಭಿವೃದ್ಧಿಯ ಪರಿಕಲ್ಪನೆ ನಮಗೆ ಮಾದರಿಯಾಗಬೇಕಿದೆ’ ಎಂದರು.

ಶರಣಗೌಡ ಬಾಡಿಯಾಳ, ಹಣಮಂತ ಇಟಗಿ, ವೆಂಕಟರೆಡ್ಡಿ ಅಬ್ಬೆತುಮಕೂರ, ಸುರೇಶ ರಾಠೋಡ, ಶಿವು ದಾಸನಕೇರಿ, ತಿಪ್ಪಣ್ಣ ಕೋನಿಮನಿ, ಸ್ವಾಮಿದೇವ ದಾಸನಕೇರಿ, ಗೋಪಾಲ ದಾಸನಕೇರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT