ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ್‌ ಬಂದ್‌: ಯಾದಗಿರಿಯಲ್ಲಿ ರೈತರ ಹೋರಾಟಕ್ಕೆ ವ್ಯಾಪಕ ಬೆಂಬಲ

Last Updated 28 ಸೆಪ್ಟೆಂಬರ್ 2021, 3:19 IST
ಅಕ್ಷರ ಗಾತ್ರ

ಯಾದಗಿರಿ: ಮೂರು ಕೃಷಿ ಕಾಯ್ದೆಗಳು, ವಿದ್ಯುತ್ ಮಸೂದೆ ರದ್ದಾತಿ, ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಕಾನೂನು ಜಾರಿ, ಅಡುಗೆ ಅನಿಲ, ಡೀಸೆಲ್, ಪೆಟ್ರೋಲ್ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ನಗರ ಸೇರಿದಂತೆ ಜಿಲ್ಲೆಯಲ್ಲಿ ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯುವಜನ, ಮಹಿಳಾ ಸಂಘಟನೆಗಳ ಸಮನ್ವಯ ಸಮಿತಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಸೋಮವಾರ ಬೆಳಿಗ್ಗೆ 6 ಗಂಟೆಗೆ ಕೇಂದ್ರ ಬಸ್‌ ನಿಲ್ದಾಣ ಬಳಿ ಜಮಾಯಿಸಿದ ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ಕಾಯ್ದೆಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ನೀಡಿರುವ ಭಾರತ್ ಬಂದ್‌ಗೆ ಮಳೆ ನಡುವೆಯೂ ಹೋರಾಟಗಾರರು ಪ್ರತಿಭಟನೆ ನಡೆಸಿದರು.

ಕೇಂದ್ರ ಬಸ್ ನಿಲ್ದಾಣದ ಮುಂದೆ ಎಐಟಿಯುಸಿ, ಆರ್‌ಎಸ್‌ಕೆ ಹಾಗೂ ವಿವಿಧ ಸಂಘಟನೆ ಸದಸ್ಯರಿಂದ ಮಳೆಯಲ್ಲಿಯೇ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ಕಾಯ್ದೆಗಳನ್ನು ವಾಪಸ್ ಪಡೆಯಲು ಆಗ್ರಹಿಸಿದರು.
ಈ ವೇಳೆ ಮಾತನಾಡಿದ ಮುಖಂಡರು, ಕೇಂದ್ರದ ಎಪಿಎಂಸಿ ಕಾಯ್ದೆ ತಿದ್ದುಪಡಿ, ವಿದ್ಯುತ್ ಬಿಲ್, ಅಗತ್ಯ ವಸ್ತುಗಳ ಸರಕು ಸೇವಾ ಕಾಯ್ದೆ ಮತ್ತು ಗುತ್ತಿಗೆ ಕೃಷಿ ಕಾಯ್ದೆಗಳನ್ನು ಈ ಕೂಡಲೇ ಹಿಂಪಡೆಯಬೇಕು. ಭೂಸುಧಾರಣ ಕಾಯ್ದೆಯನ್ನು ರದ್ದು ಮಾಡಬೇಕು. ರೈತರ ಎಲ್ಲಾ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿಪಡಿಸಬೇಕು. ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ನೀತಿಯನ್ನು ಕೈಬಿಡಬೇಕು. ಕಾರ್ಮಿಕ ವಿರೋಧಿ 4 ಕಾರ್ಮಿಕ ಸಂಹಿತೆಗಳನ್ನು ರದ್ದು ಮಾಡಬೇಕು. ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಣ ಮಾಡಬೇಕು ಎಂದು ಆಗ್ರಹಿಸಿದರು.

ಸಾರ್ವಜನಿಕ ಪಡಿತರ ವ್ಯವಸ್ಥೆಯನ್ನು ಬಲಪಡಿಸಬೇಕು. ಎಲ್ಲಾ ಆಹಾರ ಪದಾರ್ಥಗಳನ್ನು ಪಡಿತರ ಚೀಟಿ ಮೂಲಕ ವಿತರಣೆ ಮಾಡಬೇಕು. ಮಹಾತ್ಮ ಗಾಂದಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ವರ್ಷಪೂರ್ತಿ ಕಾರ್ಮಿಕರಿಗೆ ಕೆಲಸ ನೀಡಬೇಕು ಮತ್ತು ದಿನಕ್ಕೆ ₹600 ಕೂಲಿ ಪಾವತಿಸಬೇಕು ಎಂದು ಆಗ್ರಹಿಸಿದರು.

ನಂತರ ಭಾರತ್ ಬಂದ್ ಅಂಗವಾಗಿ ರಾಷ್ಟ್ರಪತಿಯವರಿಗೆ ಬರೆದಿರುವ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಮೂಲಕ ಮನವಿ ಪತ್ರ ಸಲ್ಲಿಸಲಾಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ ಅವರಿಗೆ ಮನವಿ
ಪತ್ರ ಸ್ವೀಕರಿಸಿದರು.

ಇದಕ್ಕೂ ಮುನ್ನ ನಗರದ ವಿವಿಧ ಕಡೆ ಭಾರತ್‌ ಬಂದ್‌ ಅಂಗವಾಗಿ ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್‌ ಮಾಡಲಾಗಿತ್ತು.

ಆರ್‌ಕೆಎಸ್ ಜಿಲ್ಲಾ ಘಟಕದ ಅಧ್ಯಕ್ಷ ಶರಣಗೌಡ ಗೂಗಲ್, ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ್ ಸತ್ಯಂಪೇಟ, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ದಾವಲಸಾಬ್ ನದಾಫ್, ಜಿಲ್ಲಾ ಉಪಾಧ್ಯಕ್ಷ ಚನ್ನಪ್ಪ ಆನೆಗುಂದಿ, ಎಐಯುಟಿಯುಸಿ ರಾಜ್ಯ ಕಾರ್ಯದರ್ಶಿ ಕೆ.ಸೋಮಶೇಖರ್ ಯಾದಗಿರಿ, ಸಿಐಟಿಯು ಜಿಲ್ಲಾ ಸಂಚಾಲಕ ಜೈಲಾಲ್ ತೋಟದಮನಿ, ಎಐಟಿಯುಸಿ ಜಿಲ್ಲಾ ಕಾರ್ಯದರ್ಶಿ ಕಲ್ಪನಾ ಗುರುಸುಣಗಿ, ಎಐಯುಟಿಯುಸಿ ಜಿಲ್ಲಾ ಸಂಚಾಲಕಿ ಡಿ.ಉಮಾದೇವಿ, ಜಿಲ್ಲಾ ಕಾರ್ಯದರ್ಶಿ ರಾಮಲಿಂಗಪ್ಪ ಬಿ.ಎನ್, ರಾಜ್ಯ ರೈತ ಸಂಘದ ಮಹಿಳಾ ಘಟಕದ ರಾಜ್ಯಧ್ಯಕ್ಷೆ ನಾಗರತ್ನ ವಿ ಪಾಟೀಲ,
ಚಂದ್ರಕಲಾ ಬಾಗೂರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT