ಶಹಾಪುರ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅಮೆರಿಕಾದಲ್ಲಿ ಮೀಸಲಾತಿ ಕುರಿತು ಹೇಳಿಕೆಯನ್ನು ಖಂಡಿಸಿ ಶುಕ್ರವಾರ ಬಿಜೆಪಿ ಕಾರ್ಯಕರ್ತರು ತಹಶೀಲ್ದಾರ್ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದರು.
‘ಅಮೆರಿಕಾದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪರಿಶಿಷ್ಟರ ಹಾಗೂ ಒಬಿಸಿ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಅವಮಾನ ಮಾಡಿದ್ದಾರೆ. ವಿದೇಶದಲ್ಲಿ ನಮ್ಮ ದೇಶದ ಸಂವಿಧಾನ ವಿರೋಧಿ ಹೇಳಿಕೆ ನೀಡುತ್ತಿದ್ದು ಅವರ ಇಂಥಹ ವರ್ತನೆ ದೇಶ ವಿರೋಧಿ ಶಕ್ತಿಗಳಿಗೆ ಕುಮ್ಮಕ್ಕು ನೀಡುವಂತಿದೆ’ ಎಂದು ಪ್ರತಿಭಟನಾಕಾರರು ಆರೋಪಿಸಿದರು.
‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿಗೆ ನೀಡಿರುವ ಮೀಸಲಾತಿಯನ್ನು ಹಿಂಪಡೆಯುವ ಗೊಂದಲದ ಹೇಳಿಕೆ ನೀಡಿರುವುದು ಸರಿಯಲ್ಲ. ಪ್ರಸ್ತುತ ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷದ ದುರಾಡಳಿತದಿಂದ ಜನ ಸಾಮಾನ್ಯರಿಗೆ ರಕ್ಷಣೆ ಇಲ್ಲವಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಜಿಲ್ಲಾ ಘಟಕದ ಕಾರ್ಯದರ್ಶಿ ಗುರು ಕಾಮಾ, ನಗರ ಮಂಡಲ ಅಧ್ಯಕ್ಷ ಚಂದ್ರಶೇಖರ ಯಾಳಗಿ, ಪಕ್ಷದ ಮುಖಂಡರಾದ ಶಿವರಾಜ ದೇಶಮುಖ, ಅಡಿವೆಪ್ಪ ಜಾಕಾ, ಮಲ್ಲಿಕಾರ್ಜುನ ಕಂದಕೂರ, ಮಲ್ಲಿಕಾರ್ಜುನ ಚಿಲ್ಲಾಳ, ಬಸವರಾಜ ಅರುಣಿ,ಅವಿನಾಶ ಗುತ್ತೆದಾರ, ದೇವಿಂದ್ರ ಕೊನೇರ, ಕರಣ ಸುಬೇದಾರ ಮತ್ತಿತರರು ಭಾಗವಹಿಸಿದ್ದರು.